ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಅವಧಿ ಪೂರ್ಣಗೊಳಿಸಲಿದ್ದಾರೆ: ಡಿಸಿಎಂ ದೇವೇಂದ್ರ ಫಡ್ನವಿಸ್

ಮಹಾರಾಷ್ಟ್ರದಲ್ಲಿನ ಸರ್ಕಾರ ಉರುಳದಿದೆ ಎನ್ನುವ ಊಹಾಪೋಹಗಳ ಬಗ್ಗೆ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಸರ್ಕಾರದ ಅವಧಿ ಪೂರ್ಣಗೊಳ್ಳುವವರೆಗೆ ಏಕನಾಥ್ ಶಿಂಧೆ ಅವರೇ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ.
ದೇವೇಂದ್ರ ಫಡ್ನವಿಸ್
ದೇವೇಂದ್ರ ಫಡ್ನವಿಸ್

ವಿಜಯಪುರ: ಮಹಾರಾಷ್ಟ್ರದಲ್ಲಿನ ಸರ್ಕಾರ ಉರುಳಲಿದೆ, ಮುಖ್ಯಮಂತ್ರಿಯ ಬದಲಾವಣೆಯಾಗಲಿದೆ ಎನ್ನುವ ಊಹಾಪೋಹಗಳ ಬಗ್ಗೆ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಸರ್ಕಾರದ ಅವಧಿ ಪೂರ್ಣಗೊಳ್ಳುವವರೆಗೆ ಏಕನಾಥ್ ಶಿಂಧೆ ಅವರೇ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಇರುತ್ತಾರೆ ಎಂದು ಖಡಾಖಂಡಿತವಾಗಿ ಹೇಳಿದ್ದಾರೆ.

ಮುಂದಿನ ವಿಧಾನಸಭಾ ಚುನಾವಣೆಯವರೆಗೂ ಏಕನಾಥ್ ಶಿಂಧೆ ಸಿಎಂ ಆಗಿಯೇ ಇರುತ್ತಾರೆ ಮತ್ತು ನಂತರ ಮಹಾರಾಷ್ಟ್ರದಲ್ಲಿ ಅವರ ನೇತೃತ್ವದಲ್ಲಿ ಚುನಾವಣೆ ಎದುರಿಸಿ ಗೆಲ್ಲುತ್ತೇವೆ ಎಂದು ಸ್ಪಷ್ಟವಾಗಿ ಹೇಳುತ್ತೇನೆ ಎಂದರು.

ಬುಧವಾರ ವಿಜಯಪುರದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆಂದು ಬಬಲೇಶ್ವರ ವಿಧಾನಸಭಾ ಕ್ಷೇತ್ರಕ್ಕೆ ತೆರಳುವ ಮುನ್ನ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, ಮಹಾರಾಷ್ಟ್ರದಲ್ಲಿ ಮುಖ್ಯಮಂತ್ರಿಯನ್ನು ಬದಲಾಯಿಸುವ ಸಾಧ್ಯತೆ ಇದೆ ಎಂದು ಹೇಳುತ್ತಿರುವುದು ಕೇವಲ ಮಾಧ್ಯಮಗಳ ಸೃಷ್ಟಿ ಎಂದು ಹೇಳಿದರು. 

ಬೆಳಗಾವಿ ಕರ್ನಾಟಕದ ಭಾಗವಾಗಿಯೇ ಉಳಿಯಬೇಕು ಎಂದು ಮಹಾಜನ್ ಆಯೋಗ ಘೋಷಿಸಿದ್ದರೂ ಸಹ ಮಹಾರಾಷ್ಟ್ರ ಸರ್ಕಾರವು ಗಡಿ ವಿವಾದವನ್ನು ಏಕೆ ಪ್ರಸ್ತಾಪಿಸುತ್ತದೆ ಎಂದು ಕೇಳಿದಾಗ, ಫಡ್ನವಿಸ್ ಉತ್ತರಿಸಲು ನಿರಾಕರಿಸಿದರು. ಈ ವಿಷಯವು ಸುಪ್ರೀಂ ಕೋರ್ಟ್‌ನಲ್ಲಿದೆ ಎಂದು ಹೇಳಿದರು.

ಕರ್ನಾಟಕದ 865 ಗಡಿ ಗ್ರಾಮಗಳ ಮೇಲೆ ಹಕ್ಕು ಸಾಧಿಸಲು ಮಹಾರಾಷ್ಟ್ರ ಸರ್ಕಾರ ಉದ್ದೇಶಪೂರ್ವಕವಾಗಿ ಆರೋಗ್ಯ ಖಾತ್ರಿ ಯೋಜನೆಯನ್ನು ಜಾರಿಗೊಳಿಸುತ್ತಿದೆ ಎಂಬ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು, ಬಿಜೆಪಿ ಸರ್ಕಾರವು ಈ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಹೊಸ ಆದೇಶವನ್ನು ಹೊರಡಿಸಿಲ್ಲ ಎಂದು ಹೇಳಿದರು.

ಆರೋಗ್ಯ ಯೋಜನೆ ಜಾರಿಗೊಳಿಸುವ ಸಂಬಂಧ ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿಯೇ ಆದೇಶ ಹೊರಡಿಸಲಾಗಿದೆ ಹೊರತು ನಮ್ಮ ಸರ್ಕಾರವಲ್ಲ ಎಂದು ಸ್ಪಷ್ಟಪಡಿಸಿದ್ದೇವೆ. ಈ ಸಂಬಂಧ ಸೂಕ್ತ ದಾಖಲೆಗಳನ್ನೂ ತೋರಿಸಿದ್ದೇವೆ ಎಂದರು.
ಮಹಾರಾಷ್ಟ್ರ ಸರ್ಕಾರವು ತಮ್ಮೊಂದಿಗೆ ಪಕ್ಷಪಾತ ಮಾಡುತ್ತಿದೆ ಎಂಬ ಕರ್ನಾಟಕದ ಗಡಿ ಗ್ರಾಮಗಳಲ್ಲಿ ವಾಸಿಸುವ ಕನ್ನಡಿಗರ ಆರೋಪಕ್ಕೆ ಸಂಬಂಧಿಸಿದಂತೆ, ಸರ್ಕಾರವು ಅಗತ್ಯ ಸೌಲಭ್ಯಗಳನ್ನು ನೀಡುತ್ತಿದೆ ಎಂದು ಫಡ್ನವಿಸ್ ಆರೋಪಗಳನ್ನು ತಳ್ಳಿಹಾಕಿದರು.

ಇದಕ್ಕೂ ಮುನ್ನ, ಮುಸ್ಲಿಮರಿಗೆ ನೀಡಲಾಗಿದ್ದ ಶೇ 4ರಷ್ಟು ಮೀಸಲಾತಿಯನ್ನು ರದ್ದುಪಡಿಸುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸರ್ಕಾರದ ನಿರ್ಧಾರವನ್ನು ಅವರು ಸಮರ್ಥಿಸಿಕೊಂಡರು. ಸಂವಿಧಾನದಲ್ಲಿ ಧರ್ಮದ ಆಧಾರದಲ್ಲಿ ಮೀಸಲಾತಿ ನೀಡದ ಕಾರಣ ಕಾಂಗ್ರೆಸ್ ಸರ್ಕಾರ ಮಾಡಿದ ತಪ್ಪನ್ನು ಸರಿಪಡಿಸಲು ಬಿಜೆಪಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಬಿಜೆಪಿ ಸರ್ಕಾರ ಏನೇ ಮಾಡಿದರೂ ಸರಿ ಎಂದು ಹೇಳಿದ ಅವರು, ಪ್ರಕರಣ ಈಗ ಸುಪ್ರೀಂ ಕೋರ್ಟ್‌ಗೆ ಹೋಗಿರುವುದರಿಂದ ಪ್ರಕರಣವನ್ನು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com