ಪ್ರಧಾನಿ ಮೋದಿ ರೋಡ್ ಶೋಗೆ ರೂ.3 ಕೋಟಿ ಖರ್ಚು: ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು
ಬೆಂಗಳೂರು: ಬೆಂಗಳೂರಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ರೋಡ್‌ಶೋಗಾಗಿ ಸರ್ಕಾರದ ಹಣವನ್ನು ದುರುಪಯೋಗಪಡಿಸಿಕೊಂಡಿರುವುದಾಗಿ ಆರೋಪ ಮಾಡಿರುವ ಕಾಂಗ್ರೆಸ್, ಬಿಜೆಪಿ ವಿರುದ್ಧ ಚುನಾವಣಾ ಆಯೋಗಕ್ಕೆ ಶನಿವಾರ ದೂರು ನೀಡಿದೆ.
ಮಾಗಡಿ ರಸ್ತೆಯಲ್ಲಿ ಪ್ರಧಾನಿ ಮೋದಿ ಅವರು ನಡೆಸಿದ ರೋಡ್ ಶೋಗೆ ಸುಮಾರು ರೂ.3 ಕೋಟಿ ವೆಚ್ಚದಲ್ಲಿ ಚುನಾವಣಾ ಪ್ರಚಾರ ಸಾಮಗ್ರಿಗಳನ್ನು ಬಳಸಲಾಗಿದೆ, ಇದಕ್ಕೆ ಯಾವುದೇ ಅನುಮತಿಯನ್ನೂ ಪಡೆದಿಲ್ಲ. ಇದು ಚುನಾವಣಾ ಆಯೋಗದ ನಿಯಮಗಳಿಗೆ ವಿರುದ್ಧವಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ರಾಜ್ಯದಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಈ ಹಿನ್ನೆಲೆಯಲ್ಲಿ ಯಾವುದೇ ಕಾರ್ಯಕ್ರಮಕ್ಕೇ ಆದರೂ ಚುನಾವಣಾ ಆಯೋಗದಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಆದರೆ, ಬಿಜೆಪಿ ಮೋದಿಯವರ ಕಾರ್ಯಕ್ರಮಕ್ಕೆ ಯಾವುದೇ ಅನುಮತಿ ಪಡೆದಿಲ್ಲ ಎಂದು ಹೇಳಿದೆ.
ಇದಲ್ಲದೆ, ಚುನಾವಣಾ ಪ್ರಚಾರಕ್ಕಾಗಿ ಪಕ್ಷವು ಸುಮಾರು 3 ಕೋಟಿ ರೂ ಖರ್ಚು ಮಾಡಿದ್ದು, ಇದಕ್ಕಾಗಿ ಬಿಬಿಎಂಪಿ ಹಾಗೂ ಇತರೆ ಸರ್ಕಾರಿ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡಿದೆ. ಪ್ರಚಾರ ಕಾರ್ಯಕ್ರಮಗಳನ್ನು ಕೈಗೊಳ್ಳಲು ಬಿಬಿಎಂಪಿ ನಿಗದಿಪಡಿಸಿದ ಶುಲ್ಕವನ್ನೂ ಬಿಜೆಪಿ ಪಾವತಿಸಿಲ್ಲ ಎಂದು ದೂರಿನಲ್ಲಿ ತಿಳಿಸಿದೆ ಎಂದು ತಿಳಿದುಬಂದಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ