ಕರ್ನಾಟಕ ಪಿಎಸ್ಐ ಮರುಪರೀಕ್ಷೆ ಮೇಲಿನ ತಡೆ ಮುಂದುವರಿಕೆ; ಆಗಸ್ಟ್ 16ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್!

ಕರ್ನಾಟಕ ಪಿಎಸ್ಐ ಮರುಪರೀಕ್ಷೆ ಮೇಲಿನ ತಡೆ ಮುಂದುವರೆಸಿರುವ ಕರ್ನಾಟಕ ಹೈಕೋರ್ಟ್ ಆಗಸ್ಟ್ 16ಕ್ಕೆ ವಿಚಾರಣೆ ಮುಂದೂಡಿದೆ.
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್

ಬೆಂಗಳೂರು: ಕರ್ನಾಟಕ ಪಿಎಸ್ಐ ಮರುಪರೀಕ್ಷೆ ಮೇಲಿನ ತಡೆ ಮುಂದುವರೆಸಿರುವ ಕರ್ನಾಟಕ ಹೈಕೋರ್ಟ್ ಆಗಸ್ಟ್ 16ಕ್ಕೆ ವಿಚಾರಣೆ ಮುಂದೂಡಿದೆ.

ಸೋಮವಾರ ನಡೆದ ವಿಚಾರಣೆಯಲ್ಲಿ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಅಕ್ರಮ ಹಿನ್ನೆಲೆಯಲ್ಲಿ ಈ ಮೊದಲು ನಡೆಸಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಹೊಸದಾಗಿ ಪರೀಕ್ಷೆ ನಡೆಸಲು ಬಿಜೆಪಿ ನೇತೃತ್ವದ ಹಿಂದಿನ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ರದ್ದು ಕೋರಿ ಆಯ್ಕೆಯಾಗಿದ್ದ ಹಲವು ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಆಗಸ್ಟ್‌ 16ಕ್ಕೆ ಮುಂದೂಡಿದೆ.

ಈ ಸಂಬಂಧ ಬೆಂಗಳೂರಿನ ಎನ್ ವಿ ಚಂದನ್ ಸೇರಿದಂತೆ ಆಯ್ಕೆಪಟ್ಟಿಯಲ್ಲಿ ಹೆಸರಿದ್ದ 100 ಮಂದಿ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಗಳು ನ್ಯಾಯಮೂರ್ತಿಗಳಾದ ಪಿ ಎಸ್ ದಿನೇಶ್ ಕುಮಾರ್ ಮತ್ತು ಟಿ ಜಿ ಶಿವಶಂಕರೇಗೌಡ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ಸೋಮವಾರ ವಿಚಾರಣೆಗೆ ನಿಗದಿಯಾಗಿತ್ತು.

ಈ ವೇಳೆ ಅರ್ಜಿದಾರರ ಪರ ವಕೀಲರು “ವಾದ ಮಂಡನೆಗೆ ಸ್ವಲ್ಪ ಕಾಲಾವಕಾಶ ನೀಡಬೇಕು” ಎಂದು ಕೋರಿದರು. ಮತ್ತೊಂದೆಡೆ ಅಡ್ವೋಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿ ಅವರು ಅರ್ಜಿಯನ್ನು ಆಗಸ್ಟ್‌ 16ರಂದು ವಿಚಾರಣೆಗೆ ನಿಗದಿಪಡಿಸಬಹುದು ಎಂದು ತಿಳಿಸಿದರು. ಇದಕ್ಕೆ ಒಪ್ಪಿದ ಪೀಠವು ವಿಚಾರಣೆಯನ್ನು ಆಗಸ್ಟ್‌ 16ಕ್ಕೆ ಮುಂದೂಡಿತಲ್ಲದೆ, ಅಂದು ಅರ್ಜಿಗೆ ಸಂಬಂಧಿಸಿದ ಎಲ್ಲಾ ಪಕ್ಷಕಾರರು ವಾದ ಮಂಡನೆಗೆ ಸಿದ್ಧವಾಗಿರಬೇಕು ಎಂದು ಮೌಖಿಕವಾಗಿ ಸೂಚಿಸಿತು.

ವ್ಯಾಪಕ ಪರೀಕ್ಷಾ ಅಕ್ರಮ ಕೇಳಿಬಂದ ಹಿನ್ನೆಲೆಯಲ್ಲಿ ಪಿಎಸ್‌ಐ ನೇಮಕಾತಿಗೆ ನಡೆಸಲಾಗಿದ್ದ ಲಿಖಿತ ಪರೀಕ್ಷೆಯನ್ನು ರದ್ದುಪಡಿಸಿದ್ದ ಈ ಹಿಂದಿನ ಬಿಜೆಪಿ ಸರ್ಕಾರವು ಮರುಪರೀಕ್ಷೆ ನಡೆಸುವುದಾಗಿ 2022ರ ಏಪ್ರಿಲ್‌ 29ರಂದು ಆದೇಶ ಹೊರಡಿಸಿತ್ತು. ಈ ಆದೇಶ ರದ್ದು ಕೋರಿ ಆಯ್ಕೆಯಾಗಿದ್ದ ಕೆಲ ಅಭ್ಯರ್ಥಿಗಳು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿಗೆ (ಕೆಎಟಿ) ಅರ್ಜಿ ಸಲ್ಲಿಸಿದ್ದರು. ಅದನ್ನು 2022ರ ಜುಲೈ 19ರಂದು ಕೆಎಟಿ ವಜಾಗೊಳಿಸಿತ್ತು. ಇದರಿಂದ ಅಭ್ಯರ್ಥಿಗಳು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಹೊಸದಾಗಿ ಲಿಖಿತ ಪರಿಕ್ಷೆ ನಡೆಸುವ ಸರ್ಕಾರದ ಆದೇಶಕ್ಕೆ 2022ರ ಸೆಪ್ಟೆಂಬರ್‌ 28ರಂದು ಮಧ್ಯಂತರ ತಡೆಯಾಜ್ಞೆ ನೀಡಲಾಗಿತ್ತು. 

ಈ ಹಿಂದಿನ ವಿಚಾರಣೆಯಲ್ಲಿ ಪೊಲೀಸ್‌ ಸಬ್‌ಇನ್‌ಸ್ಪೆಕ್ಟರ್‌ ನೇಮಕಾತಿಯ ಹಗರಣದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಮರು ಪರೀಕ್ಷೆ ನಡೆಸಲು ಉದ್ದೇಶಿಸಿರುವ ತೀರ್ಮಾನದಲ್ಲಿ ನ್ಯಾಯಾಲಯ ಮಧ್ಯಪ್ರವೇಶ ಮಾಡಲಾಗದು ಎಂದು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಮೌಖಿಕವಾಗಿ ಅಭಿಪ್ರಾಯಪಟ್ಟಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com