ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಣ ದುರುಪಯೋಗ: ವಿಸ್ತೃತ ತನಿಖೆ ಆರಂಭ- ಸಚಿವ ಸತೀಶ್ ಜಾರಕಿಹೊಳಿ

ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಹಣ ದುರುಪಯೋಗ ಹಾಗೂ ಶೇ.40 ಕಮಿಷನ್ ಅವ್ಯವಹಾರದ ಬಗ್ಗೆ ವಿಸ್ತೃತ ತನಿಖೆ ನಡೆಸಲು ಇದು ಸೂಕ್ತ ಸಮಯ ಎಂದು   ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಭಾನುವಾರ ಹೇಳಿದರು.
ಸಚಿವ ಸತೀಶ್ ಜಾರಕಿಹೊಳಿ ಸಾಂದರ್ಭಿಕ ಚಿತ್ರ
ಸಚಿವ ಸತೀಶ್ ಜಾರಕಿಹೊಳಿ ಸಾಂದರ್ಭಿಕ ಚಿತ್ರ

ಬೆಳಗಾವಿ: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಹಣ ದುರುಪಯೋಗ ಹಾಗೂ ಶೇ.40 ಕಮಿಷನ್ ಅವ್ಯವಹಾರದ ಬಗ್ಗೆ ವಿಸ್ತೃತ ತನಿಖೆ ನಡೆಸಲು ಇದು ಸೂಕ್ತ ಸಮಯ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಭಾನುವಾರ ಹೇಳಿದರು.

ಬೆಳಗಾವಿಯಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೋವಿಡ್ 19 ಪರಿಸ್ಥಿತಿಯಲ್ಲಿ ಹಣ ದುರುಪಯೋಗಪಡಿಸಿಕೊಂಡ ಬಗ್ಗೆ ತನಿಖೆ ನಡೆಸುವಂತೆ ನಾವು ವಿಪಕ್ಷದಲ್ಲಿದ್ದಾಗಲೇ  ಸರ್ಕಾರದ ಮೇಲೆ ಒತ್ತಡ ಹೇರಿದ್ದೆವು. ಈಗ ನಮ್ಮ ಸರ್ಕಾರ ಅಧಿಕಾರದಲ್ಲಿದೆ. ಹೀಗಾಗಿ ವಿಚಾರಣೆ ನಡೆಸಲು ಇದು ಸರಿಯಾದ ಸಮಯ. ಸರ್ಕಾರದ ವಿವಿಧ ತನಿಖಾ ಸಂಸ್ಥೆಗಳು ಈಗಾಗಲೇ ತಮ್ಮ ಕೆಲಸ ಆರಂಭಿಸಿವೆ. ವರದಿ ಸಲ್ಲಿಸಿದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.

ಬಿಜೆಪಿ ಸರ್ಕಾರದಲ್ಲಿ ಆರೋಗ್ಯ ಸಚಿವರಾಗಿದ್ದ ಡಾ.ಕೆ.ಸುಧಾಕರ್‌ ಕಾಂಗ್ರೆಸ್‌ ಪಕ್ಷ ಸೇರುತ್ತಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಕಾಂಗ್ರೆಸ್‌ ಸೇರುವ ಬಗ್ಗೆ ನನಗೆ ತಿಳಿದಿಲ್ಲ. ಬಿಜೆಪಿ ತೊರೆದು ಕಾಂಗ್ರೆಸ್ ಸೇರುವ ನಿರ್ಧಾರ ಅವರಿಗೆ ಬಿಟ್ಟದ್ದು. ಆದರೆ, ಕೋವಿಡ್ ಪರಿಸ್ಥಿತಿಯಲ್ಲಿ ಹಣ ದುರುಪಯೋಗವಾಗುವುದು ಖಾತರಿಯಾಗಿದೆ. ಸುಧಾಕರ್ ಈಗ ಶಾಸಕರಲ್ಲದಿದ್ದರೂ ಅವರ ವಿರುದ್ಧ ಆರೋಪಗಳಿದ್ದು, ತನಿಖೆಯ ಅಗತ್ಯವಿದೆ' ಎಂದರು.

ಕಾಂಗ್ರೆಸ್ ಅಧಿಕಾರಕ್ಕೆ ಬಂದು 100 ದಿನಗಳು ಕಳೆದಿವೆ. ಸರ್ಕಾರದ ಸಾಧನೆಗಳನ್ನು ಅರಿಯಲು ಕನಿಷ್ಠ ಆರು ತಿಂಗಳು ಕಳೆಯಬೇಕು. ಕಳೆದ ಮೂರು ತಿಂಗಳಲ್ಲಿ ಮಾಡಿರುವ ಸಾಧನೆಯಿಂದ ನಮಗೆ ತೃಪ್ತಿ ಇದೆ ಎಂದು ಸಚಿವರು,ಲೋಕಸಭಾ ಚುನಾವಣೆಗೆ ಸಿದ್ಧತೆಯನ್ನು ಈಗಾಗಲೇ ಆರಂಭಿಸಿದ್ದೇವೆ. ಚಿಕ್ಕೋಡಿ ಮತ್ತು ಬೆಳಗಾವಿ ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಇನ್ನೂ ನಿಗದಿ ಮಾಡಿಲ್ಲ, ಮುಂದಿನ ದಿನಗಳಲ್ಲಿ ಅಂತಿಮಗೊಳಿಸಲಾಗುವುದು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com