ಬೆಳಗಾವಿ: ತಾಲ್ಲೂಕಿನ ಹೊಸ ಒಂಟಮೂರಿ ಗ್ರಾಮದಲ್ಲಿ ಭಾನುವಾರ ರಾತ್ರಿ ಮಹಿಳೆಯೊಬ್ಬರನ್ನು ಬೆತ್ತಲೆಗೊಳಿಸಿ, ಗ್ರಾಮದಲ್ಲಿ ಮೆರವಣಿಗೆ ಮಾಡಿ, ಕಂಬಕ್ಕೆ ಕಟ್ಟಿ ಥಳಿಸಲಾಗಿದೆ.
ಹೊಸ ಒಂಟಮೂರಿಯ ಸಂತ್ರಸ್ತ ಮಹಿಳೆಯ ಪುತ್ರ ಯುವತಿಯನ್ನು ಪ್ರೀತಿಸಿ ಓಡಿಹೋಗಿದ್ದೇ ಘಟನೆಗೆ ಕಾರಣ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಸಂತ್ರಸ್ತೆಯ ಪುತ್ರ ದುಂಡಪ್ಪ ಹಾಗೂ ಇದೇ ಊರಿನ ಪ್ರಿಯಾಂಕ ಪ್ರೀತಿಸುತ್ತಿದ್ದರು. ಪ್ರಿಯಾಂಕ ಮನೆಯವರು ಇದಕ್ಕೆ ಒಪ್ಪದೇ, ಬೇರೊಬ್ಬ ವರನೊಂದಿಗೆ ನಿಶ್ಚಿತಾರ್ಥ ಮಾಡಿದ್ದರು. ಸೋಮವಾರ (ಡಿ.11) ಪ್ರಿಯಾಂಕ ಮದುವೆ ಕೂಡ ಗೊತ್ತಾಗಿತ್ತು. ಆದರೆ, ಭಾನುವಾರ ರಾತ್ರಿಯೇ ದುಂಡಪ್ಪ– ಪ್ರಿಯಾಂಕ ಮನೆ ಬಿಟ್ಟು ಓಡಿಹೋದರು.
ಇದರಿಂದ ರೊಚ್ಚಿಗೆದ್ದ ಯುವತಿ ಮನೆಯವರು ಯುವಕನ ತಾಯಿಯನ್ನು ಹಿಗ್ಗಾಮುಗ್ಗಾ ಥಳಿಸಿದರು. ಬೆತ್ತಲೆ ಮಾಡಿ ಊರಿನ ಬೀದಿಗಳಲ್ಲಿ ಓಡಾಡಿಸಿದರು. ಕಂಬಕ್ಕೆ ಕಟ್ಟಿ ಮತ್ತೆ ಹೊಡೆದರು. ಅವರ ಮನೆಗೆ ಬೆಂಕಿ ಹಚ್ಚಿ ಅಪಾರ ಹಾನಿ ಮಾಡಿದರು ಎಂದು ಮೂಲಗಳು ತಿಳಿಸಿವೆ. ತಡರಾತ್ರಿ ಸ್ಥಳಕ್ಕೆ ಕಾಕತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ಸಂಬಂಧ 7 ಜನ ಆರೋಪಿಗಳನ್ನು ಬಂಧಿಸಲಾಗಿದೆ.
ಇಂದು ಬೆಳಗ್ಗೆ ನಗರ ಪೊಲೀಸ್ ಆಯುಕ್ತ ಎಸ್.ಎನ್.ಸಿದ್ದರಾಮಪ್ಪ ಅವರು ಕೂಡ ಗ್ರಾಮಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದ್ದಾರೆ. ಓಡಿ ಹೋಗಿರುವ ಯುವಕ, ಯುವತಿಗೆ ಪೊಲೀಸರ ಶೋಧ ಕಾರ್ಯ ಆರಂಭಿಸಿದ್ದಾರೆ. ಗ್ರಾಮದಲ್ಲಿ 2 ಕೆಎಸ್ ಆರ್ ಪಿ ತುಕಡಿ ಮತ್ತು ಪೊಲೀಸ್ ಬಂದೋಬಸ್ತ್ ಅನ್ನು ಸಹ ನಿಯೋಜಿಸಲಾಗಿದೆ.
Advertisement