ಕೋವಿಡ್ 19 ಪರಿಸ್ಥಿತಿ ಕುರಿತು ಸಿಎಂ ಸಭೆ: ಆಕ್ಸಿಜನ್‌, ವೆಂಟಿಲೇಟರ್‌, ಬೆಡ್‌ಗಳ ಲಭ್ಯತೆ ಖಾತ್ರಿಗೊಳಿಸಲು ಸೂಚನೆ

ರಾಜ್ಯದಲ್ಲಿ ಕೋವಿಡ್‌ 19 ಪ್ರಕರಣಗಳು ಮತ್ತೆ ಹೆಚ್ಚಳವಾಗುತ್ತಿರುವ  ಹಿನ್ನೆಲೆಯಲ್ಲಿ ರಾಜ್ಯದ ಸ್ಥಿತಿಗತಿಯ ಕುರಿತು ಚರ್ಚಿಸಲು ಹಾಗೂ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಚರ್ಚೆ ನಡೆಸಲಾಯಿತು.
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿನ ಉನ್ನತ ಮಟ್ಟದ ಸಭೆ
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿನ ಉನ್ನತ ಮಟ್ಟದ ಸಭೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌ 19 ಪ್ರಕರಣಗಳು ಮತ್ತೆ ಹೆಚ್ಚಳವಾಗುತ್ತಿರುವ ಹಾಗೂ ಬೆಂಗಳೂರಿನಲ್ಲಿ ಕೋವಿಡ್‌ನಿಂದಾಗಿ ಕಳೆದ ಮೂರು ದಿನಗಳಲ್ಲಿ ಮೂವರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯದ ಸ್ಥಿತಿಗತಿಯ ಕುರಿತು ಚರ್ಚಿಸಲು ಹಾಗೂ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ರಾಜ್ಯದಲ್ಲಿರುವ ಒಟ್ಟು 92 ಸಕ್ರಿಯ ಪ್ರಕರಣಗಳಲ್ಲಿ 80 ಬೆಂಗಳೂರು ನಗರದಲ್ಲಿ ಇದೆ. ಉಳಿದಂತೆ ಮೈಸೂರಿನಲ್ಲಿ 5, ಬಳ್ಳಾರಿಯಲ್ಲಿ 3, ರಾಮನಗರ ಹಾಗೂ ಮಂಡ್ಯದಲ್ಲಿ ತಲಾ 1 ಪ್ರಕರಣ ವರದಿಯಾಗಿದೆ. ಇವರಲ್ಲಿ 72 ಜನ ಮನೆಯಲ್ಲಿಯೇ ಪ್ರತ್ಯೇಕವಾಗಿದ್ದಾರೆ. 20 ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಏಳು ಜನರು ಐಸಿಯುನಲ್ಲಿದ್ದು, ಇವರೆಲ್ಲರೂ ಇತರ ಸಮಸ್ಯೆಗಳಿಂದಲೂ ಬಳಲುತ್ತಿದ್ದಾರೆ. ಅದಾಗ್ಯೂ ಜನರು ಆತಂಕ ಪಡುವ ಅಗತ್ಯವಿಲ್ಲ. ಆದರೆ ಮುನ್ನೆಚ್ಚರಿಕೆ ಕ್ರಮಗಳನ್ನು ಅಗತ್ಯವಾಗಿ ಕೈಗೊಳ್ಳಬೇಕಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು. 

ತಾಂತ್ರಿಕ ಸಲಹಾ ಸಮಿತಿ ನೀಡಿರುವ ಸಲಹೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಆಕ್ಸಿಜನ್‌, ವೆಂಟಿಲೇಟರ್‌, ಬೆಡ್‌ಗಳು ಯಾವುದಕ್ಕೂ ತೊಂದರೆ ಆಗಬಾರದು. ಆಕ್ಸಿಜನ್‌ ಲಭ್ಯತೆ ಖಾತ್ರಿಗೊಳಿಸಬೇಕು. ಇದಕ್ಕೆ ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಸನ್ನದ್ಧವಾಗಿ ಯಾವುದೂ ಕೊರತೆಯಾಗದಂತೆ ನೋಡಿಕೊಳ್ಳಬೇಕು. ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳನ್ನು ಪಾಲಿಸಬೇಕು. ಎಲ್ಲರೂ ಜವಾಬ್ದಾರಿ ಅರಿತು ಕೆಲಸ ಮಾಡಬೇಕು ಎಂದರು. 

ಕೋವಿಡ್‌ ನ ಸಮರ್ಪಕ ನಿರ್ವಹಣೆ ಹಾಗೂ ಪಾರದರ್ಶಕತೆಗಾಗಿ ಸಚಿವ ಸಂಪುಟ ಉಪ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಗಿದ್ದು, ಎಲ್ಲ ಆಸ್ಪತ್ರೆಗಳಲ್ಲಿ ಪೂರ್ವ ಸಿದ್ಧತೆ ಪರಿಶೀಲನೆ ಮಾಡಲಾಗಿದೆ. ಎಲ್ಲ ಆಸ್ಪತ್ರೆಗಳೂ ಕೋವಿಡ್‌ ಪ್ರಕರಣಗಳನ್ನು ನಿರ್ವಹಿಸಲು ಸಿದ್ಧತೆ ನಡೆಸಿಕೊಳ್ಳಲು ಸೂಚಿಸಲಾಗಿದೆ.

ತಾಂತ್ರಿಕ ಸಲಹಾ ಸಮಿತಿಯ ಶಿಫಾರಸುಗಳು ಹಾಗೂ ರಾಜ್ಯದಲ್ಲಿ ಹೊರಡಿಸಿರುವ ಮಾರ್ಗಸೂಚಿಗಳು, 60 ವರ್ಷ ಮೇಲ್ಪಟ್ಟ ಎಲ್ಲರೂ, ಕಿಡ್ನಿ, ಹೃದಯ, ಲಿವರ್‌ ಸಮಸ್ಯೆಗಳಿಂದ ಬಳಲುತ್ತಿರುವವರು, ಗರ್ಭಿಣಿ ಹಾಗೂ ಬಾಣಂತಿಯರು ಮಾಸ್ಕ್‌ ಧರಿಸುವುದು ಹಾಗೂ ಮುಚ್ಚಿದ, ಹೆಚ್ಚು ಗಾಳಿಯಾಡದ ಸ್ಥಳಗಳಿಗೆ ಹಾಗೂ ಜನಸಂದಣಿ ಇರುವ ಸ್ಥಳಗಳಿಗೆ ಭೇಟಿ ನೀಡದೆ ಇರದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ತಿಳಿಸಿದರು. 

ಉಸಿರಾಟದ ಸಮಸ್ಯೆಯ ಲಕ್ಷಣಗಳಾದ ಜ್ವರ, ಕೆಮ್ಮು, ಶೀತ, ನೆಗಡಿ ಇತ್ಯಾದಿಗಳಿಂದ ಬಳಲುತ್ತಿರುವವರು ಕೂಡಲೇ ವೈದ್ಯಕೀಯ ಸಮಾಲೋಚನೆ ನಡೆಸುವುದು ಹಾಗೂ ಮಾಸ್ಕ್‌ ಧರಿಸುವುದು. ವೈಯಕ್ತಿಕ ಸ್ವಚ್ಛತೆಯನ್ನು ಕಾಪಾಡುವುದು. ಅನಾರೋಗ್ಯ ಪೀಡಿತರಾದರೆ ಮನೆಯಲ್ಲೇ ಇರಿ ಹಾಗೂ ಇತರರೊಂದಿಗೆ ಸಂಪರ್ಕವನ್ನು ಕಡಿಮೆ ಮಾಡಿ. ಜನಸಂದಣಿಯ ಪ್ರದೇಶದಲ್ಲಿ ಮಾಸ್ಕ್‌ ಧರಿಸುವುದು ಉತ್ತಮ ಎಂದರು.

ವಿದೇಶ ಪ್ರವಾಸದ ಸಂದರ್ಭದಲ್ಲಿ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಬೇಕು. ರಾಜ್ಯವೂ ಕೇರಳ ಮತ್ತು ತಮಿಳು ನಾಡು ಗಡಿ ಭಾಗದಲ್ಲಿ ಜ್ವರದ ಪ್ರಕರಣಗಳ ಮೇಲೆ ನಿಗಾ ವಹಿಸಿ, ಪರೀಕ್ಷೆ ಮತ್ತು ವರದಿ ಮಾಡುವ ವ್ಯವಸ್ಥೆ ಮಾಡಲಾಗುತ್ತಿದೆ. ಎಲ್ಲ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಉಸಿರಾಟದ ತೊಂದರೆ ಮತ್ತು 20 ರಲ್ಲಿ 1 ಜ್ವರ (ILI) ದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಮುಖ್ಯಮಂತ್ರಿ ಸೂಚಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com