ಹಿಜಾಬ್ ನಿಷೇಧ ಹಿಂಪಡೆಯಲು ಸೂಚನೆ ನೀಡಿದ್ದೇನೆ: ಸಿಎಂ ಸಿದ್ದರಾಮಯ್ಯ
ಮೈಸೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ತರಲಾಗಿದ್ದ ಹಿಜಾಬ್ ನಿಷೇಧವನ್ನು ಹಿಂಪಡೆಯಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನ ನಂಜನಗೂಡು ತಾಲೂಕಿನ ಕವಲಂದೆ ಗ್ರಾಮದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಿಜಾಬ್ ನಿಷೇಧವನ್ನು ವಾಪಸ್ ಪಡೆಯಲು ಸೂಚನೆ ನೀಡಿದ್ದೇನೆ. ಪ್ರಧಾನಿ ಮೋದಿ ಅವರ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹೀಗಾಗಿ ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ಹೇಳಿದ್ದೇನೆ ಎಂದು ಹೇಳಿದರು.
ಎಲ್ಲರೂ ಹಿಜಾಬ್ ಧರಿಸಿ ಹೋಗಬಹುದು. ಆದೇಶ ಹಿಂಪಡೆಯಲು ಸೂಚಿಸಿದ್ದೇನೆ. ಉಡುಪು, ಊಟ ಮಾಡುವುದು ನಿಮ್ಮ ಆಯ್ಕೆ. ಅದಕ್ಕೆ ನಾವು ಅಡ್ಡಿಪಡಿಸುವುದಿಲ್ಲ. ಮತಕ್ಕಾಗಿ ರಾಜಕಾರಣ ಮಾಡುವುದು ತಪ್ಪು. ಬಡವರಿಗಾಗಿ ನಮ್ಮ ಸರ್ಕಾರ ಕೆಲಸ ಮಾಡುತ್ತದೆ. ಇದರಿಂದ ವಿಚಲಿತರಾಗುವ ಪ್ರಶ್ನೆ ಇಲ್ಲ. ರಾಜೀ ಮಾಡಿಕೊಳ್ಳುವ ಪ್ರಶ್ನೆ ಇಲ್ಲ. ಸುಳ್ಳು, ಮೋಸ ಮಾಡುವವರ ಜೊತೆ ಹೋಗಬೇಡಿ ಎಂದು ಹೇಳಿದರು.
ಈ ಮೂಲಕ ಕಾಂಗ್ರೆಸ್ ಸರ್ಕಾರವು ಹಿಂದಿನ ಬಿಜೆಪಿ ಸರ್ಕಾರದ ಶೈಕ್ಷಣಿಕ ಸಂಸ್ಥೆಗಳಲ್ಲಿ ತಂದಿದ್ದ ಹಿಜಾಬ್ ನಿಷೇಧವನ್ನು ತೆರವು ಮಾಡುತ್ತಿದೆ. ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಹಿಜಾಬ್ ಧರಿಸಿ ತೆರಳಲು ಅವಕಾಶ ನೀಡಲು ಮುಂದಾಗಿದೆ.