
ಬೆಂಗಳೂರು: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಕೆಎಸ್ಆರ್'ಟಿಸಿಯ ರಾಜಹಂಸ ಬಸ್ ಡಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೋಮವಾರ ನಡೆದಿದೆ.
ಮೃತ ವ್ಯಕ್ತಿಯ ಹೆಸರು, ವಿಳಾಸ ಸದ್ಯಕ್ಕೆ ಪತ್ತೆಯಾಗಿಲ್ಲ. ಸುಮಾರು 40-45 ವರ್ಷದ ವ್ಯಕ್ತಿಯಾಗಿದ್ದು, ಪ್ಯಾಂಟ್, ಶರ್ಟ್, ಸ್ವೆಟರ್ ಧರಿಸಿದ್ದಾರೆ. ಜೈಬಿನಲ್ಲಿ ತಿರುಪತಿಯಿಂದ ಬೆಂಗಳೂರಿಗೆ ಬಂದಿರುವ ಬಸ್ ಟಿಕೆಟ್ ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸೋಮವಾರ ಮುಂಜಾನೆ 3.30ರ ಸುಮಾರಿಗೆ ದಾವಣಗೆರೆಯಿಂದ ಬೆಂಗಳೂರಿಗೆ ಬಂದಿರುವ ರಾಜಹಂಸ ಬಸ್, ಮೆಜೆಸ್ಟಿಕ್ ಕೆಎಸ್ಆರ್'ಟಿಸಿ ಬಸ್ ನಿಲ್ದಾಣದ ಟರ್ಮಿನಲ್ ಒಳಗೆ ತೆರಳುವಾಗ ರಸ್ತೆ ದಾಟುತ್ತಿದ್ದ ಪಾದಚಾರಿಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ತಲೆಗೆ ಗಂಭೀರ ಪೆಟ್ಟು ಬಿದ್ದು ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ, ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನೆ ಸಂಬಂಧ ಕೆಎಸ್ಆರ್'ಟಿಸಿ ಬಸ್ ಚಾಲಕನನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಾಗಿದೆ. ಉಪ್ಪಾರಪೇಟೆ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
Advertisement