ಶಿರಸಿ: ಗ್ಯಾರಂಟಿ ಯೋಜನೆಗಳು ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಹೊರೆಯಾಗಿರುವುದು ನಿಜ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉತ್ತಮವಾಗಿ ನಿರ್ವಹಿಸುತ್ತಿದ್ದಾರೆಂದು ಪ್ರವಾಸೋದ್ಯಮ ಸಚಿವ ಎಚ್‌ಕೆ ಪಾಟೀಲ್ ಅವರು ಸೋಮವಾರ ಹೇಳಿದರು.
ಶಿರಸಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂಬರುವ ಬಜೆಟ್‌ನಲ್ಲಿ ಹೆಚ್ಚುವರಿ ತೆರಿಗೆ ಒಳಗೊಂಡ ಯೋಜನೆಗಳನ್ನು ಮುಂದುವರಿಸಲು ಸರ್ಕಾರ ವಿವಿಧ ಮೂಲಗಳ ಮೂಲಕ ಆದಾಯ ಗಳಿಸಲು ಚಿಂತನೆ ನಡೆಸುತ್ತಿದೆ ಎಂದು ಹೇಳಿದರು.
2024 ರ ಲೋಕಸಭಾ ಚುನಾವಣೆಯ ಕಾರ್ಯತಂತ್ರದ ಕುರಿತ ಪ್ರಶ್ನೆಗೆ ಉತ್ತರಿಸಿ, ರಾಜ್ಯದಲ್ಲಿ ಪಕ್ಷದ ವರಿಷ್ಠರು ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಅಥವಾ ಪ್ರಿಯಾಂಕಾ ಗಾಂಧಿ ಅವರನ್ನು ರಾಜ್ಯದಿಂದ ಚುನಾವಣೆಗೆ ಸ್ಪರ್ಧಿಸುವಂತೆ ಬಯಸುತ್ತಿದ್ದಾರೆ. ಆದರೆ, ಈ ಬಗ್ಗೆ ಇನ್ನೂ ಚರ್ಚೆಯಾಗಬೇಕಿದೆ ಎಂದು ತಿಳಿಸಿದರು.
ಇದೇ ವೇಳೆ ಸಂಸತ್ ಭದ್ರತಾ ಲೋಪದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ 142 ಸಂಸದರನ್ನು ಸಂಸತ್ತಿನಲ್ಲಿ ಅಮಾನತುಗೊಳಿಸಿರುವುದನ್ನು ಸಚಿವರು ಖಂಡಿಸಿದರು.
Advertisement