
ಸಂಗ್ರಹ ಚಿತ್ರ
ಬೆಂಗಳೂರು: ಕಾಮುಕನೊಬ್ಬ ಮೂರುವರೆ ವರ್ಷದ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವ ಹೇಯ ಕೃತ್ಯವೊಂದು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಂದಾ ಗೋಕುಲ ಸರಕಾರಿ ಶಾಲೆ ಸಮೀಪದ ಕಾವೇರಿಪುರದಲ್ಲಿ ಸೋಮವಾರ ಮಧ್ಯಾಹ್ನ ಈ ದುರ್ಘಟನೆ ನಡೆದಿದೆ. ಈ ಸಂಬಂಧ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಿ, ವಿಚಾರಣೆಗೊಳಪಡಿಸಿದ್ದಾರೆ.
ಮಂಗಳವಾರ ಸಂಜೆ 7 ಗಂಟೆ ಸುಮಾರಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಕುಟುಂಬ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು 26 ವರ್ಷದ ವ್ಯಕ್ತಿಯನ್ನು ಬಂಧನಕ್ಕೊಳಪಡಿಸಿದ್ದಾರೆ.
ಬಾಲಕಿಯ ಪೋಷಕರು, ಗಾರ್ಮೆಂಟ್ಸ್ ಕಾರ್ಖಾನೆ ಉದ್ಯೋಗಿಗಳು. ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ ಹಲವು ವರ್ಷಗಳಿಂದ ವಾಸವಿದ್ದರು. ಬಾಲಕಿ ಹಾಗೂ ಅವರ ಪೋಷಕರಿಗೆ ಪರಿಚಯವಿರುವ ಆರೋಪಿಯೇ ಕೃತ್ಯ ಎಸಗಿದ್ದಾನೆಂದು ತಿಳಿದುಬಂದಿದೆ.
ಬಾಲಕಿಯನ್ನು ಪುಸಲಾಯಿಸಿರುವ ಆರೋಪಿ, ಆಕೆಯ ಮೇಲೆ ಮೃಗೀಯ ರೀತಿಯಲ್ಲಿ ವರ್ತಿಸಿದ್ದಾನೆ. ಬಳಿಕ ಅಳುತ್ತಿದ್ದ ಬಾಲಕಿಯ ತಲೆಗೆ ಆಯುಧದಿಂದ ಹೊಡೆದಿದ್ದಾನೆ. ಈ ವೇಳೆ ಬಾಲಕಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾಳೆ. ಘಟನೆ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಬಾಲಕಿಯನ್ನು ಕೂಡಲೇ ಪೋಷಕರು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದಿದ್ದು, ಈ ವೇಳೆ ಬಾಲಕಿ ಮೃತಪಟ್ಟಿರುವುದು ತಿಳಿದುಬಂದಿದೆ.
ಇದೀಗ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆಂದು ತಿಳಿದುಬಂದಿದೆ.