ಬೆಂಗಳೂರು: ಕರ್ನಾಟಕ ನವೀಕರಿಸಬಹುದಾದ ಇಂಧನ ನೀತಿ 2022-27ರ ತಿದ್ದುಪಡಿಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ರಾಜ್ಯ ಸೈಬರ್ ಭದ್ರತಾ ನೀತಿ 2023ಕ್ಕೆ ಒಪ್ಪಿಗೆ ನೀಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ. ಸಿ. ಮಾಧುಸ್ವಾಮಿ ಸುದ್ದಿಗಾರರಿಗೆ ತಿಳಿಸಿದರು.
ಬಳ್ಳಾರಿ ಜಿಲ್ಲೆಯ ಹಗರಿಯಲ್ಲಿ ರೂ.25 ಕೋಟಿ ವೆಚ್ಚದಲ್ಲಿ ನೂತನ ಕೃಷಿ ಕಾಲೇಜು ಸ್ಥಾಪನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದ್ದು, ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕು ಆಸ್ಪತ್ರೆಯನ್ನು ರೂ.23.50 ಕೋಟಿ ವೆಚ್ಚದಲ್ಲಿ ಮೇಲ್ದರ್ಜೇಗೇರಿಸಲು ಸಂಪುಟ ಅನುಮೋದನೆ ನೀಡಿದೆ. ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ ಅಧಿನಿಯಮ 2022ನ್ನು ಭಾರತ ಸಂವಿಧಾನದ ಅನುಸೂಚಿ 9ರಲ್ಲಿ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಸಲ್ಲಿಸಲು ತೀರ್ಮಾನ ಮಾಡಲಾಗಿದೆ.
ಜಲ ಜೀವನ್ ಮಿಷನ್ ಯೋಜನೆಯಡಿ ಚಾಮರಾಜನಗರ ತಾಲೂಕಿನ 166 ಗ್ರಾಮಗಳ ರೂ. 26 ಕೋಟಿ ವೆಚ್ಚದ ಕುಡಿಯುವ ನೀರು ಸರಬರಾಜು ಯೋಜನೆ, ಕಲಬುರಗಿಯ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಕಚೇರಿ ಹಾಗೂ ವಾಣಿಜ್ಯ ಸಂಕೀರ್ಣವನ್ನು ರೂ. 26.58 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
ಬೆಂಗಳೂರಿನ ಗೋವಿಂದರಾಜ ನಗರದಲ್ಲಿರುವ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ರೂ. 24 ಕೋಟಿ ವೆಚ್ಚದಲ್ಲಿ ವೈದ್ಯಕೀಯ ಉಪಕರಣಗಳ ಖರೀದಿಗೆ ಅನುಮೋದನೆ ಸಿಕ್ಕಿದ್ದು, ರಾಜ್ಯದ 30 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳನ್ನು ಟಾಟಾ ಟೆಕ್ನಾಲಜಿ ಸಹಯೋಗದೊಂದಿಗೆ ರೂ. 927 ಕೋಟಿ ವೆಚ್ಚದಲ್ಲಿ ಮೇಲ್ದರ್ಜೇಗೇರಿಸಲು ಸಮ್ಮತಿ ನೀಡಲಾಗಿದೆ.
ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ರೂ.12 ಕೋಟಿ ವೆಚ್ಚದಲ್ಲಿ ನೂತನ ಪೊಲೀಸ್ ಭವನ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ ದೊರಕಿದೆ. ಹಾವೇರಿ ಜಿಲ್ಲೆ ಶಿಗ್ಗಾಂವ ತಾಲೂಕಿನ ಕಲ್ಯಾಣ ಗ್ರಾಮದಲ್ಲಿ ರೂ.73.75 ಕೋಟಿ ವೆಚ್ಚದಲ್ಲಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಸ್ಥಾಪಿಸಲು ಅನುಮೋದನೆ ನೀಡಲಾಗಿದೆ.
Advertisement