ಕೊಡಗು: ಇಬ್ಬರನ್ನು ಬಲಿಪಡೆದಿದ್ದ ನರಭಕ್ಷಕ ಹುಲಿಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಫೆ.12 ರಂದು 24 ಗಂಟೆಗಳಲ್ಲಿ ಕೊಡಗು ಜಿಲ್ಲೆಯಲ್ಲಿ ಹುಲಿ ದಾಳಿಗೆ ಇಬ್ಬರು ಸಾವನ್ನಪ್ಪಿದ್ದರು.
ಪೊನ್ನಂಪೇಟೆ ತಾಲೂಕಿನ ನಾಣಚ್ಚಿಗೇಟ್ ಬಳಿ ಅರಣ್ಯ ಇಲಾಖೆ ಸಿಬ್ಬಂದಿ ಹುಲಿಯನ್ನು ಸೆರೆ ಹಿಡಿದಿದ್ದಾರೆ. ದಸರಾ ಆನೆ ಅಭಿಮನ್ಯು ನೇತೃತ್ವದಲ್ಲಿ ಅಶ್ವತ್ಥಾಮ, ಭೀಮ, ಗಣೇಶ ಆನೆಗಳನ್ನು ಬಳಸಿ ಹುಲಿ ಸೆರೆ ಕಾರ್ಯಾಚರಣೆಯನ್ನು ನಡೆಸಲಾಗಿತ್ತು. ಅರವಳಿಕೆ ಚುಚ್ಚು ಮದ್ದು ನೀಡಿ ಹುಲಿಯನ್ನು ಸೆರೆ ಹಿಡಿಯಲಾಗಿದೆ.
ಸೆರೆ ಹಿಡಿಯಲಾಗಿರುವ ಹುಲಿ 11-13 ವರ್ಷದ ಹೆಣ್ಣು ಹುಲಿಯಾಗಿದ್ದು, ವಿರಾಜಪೇಟೆ ವಿಭಾಗದ ಅರಣ್ಯ ಇಲಾಖೆಯ 150 ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
ಮಧ್ಯಾಹ್ನದ ಅವಧಿಯಲ್ಲಿ ನಾಣಚ್ಚಿಗೇಟ್ ಬಳಿ ಹುಲಿ ಕಾಣಿಸಿಕೊಂಡಿತ್ತು ತಕ್ಷಣವೇ ತಜ್ಞ ಡಿಆರ್‌ಎಫ್‌ಒ ರಂಜನ್ ಹುಲಿಗೆ ಅರವಳಿಕೆ ನೀಡಿ ಶಾಂತಗೊಳಿಸುವ ಪ್ರಕ್ರಿಯೆ ಪ್ರಾರಂಭಿಸಿದರು. ಸೆರೆಯಾಗಿರುವ ಹುಲಿಗೆ ಕಾಲು ಸೇರಿದಂತೆ ದೇಹದ ಹಲವು ಭಾಗಗಳಲ್ಲಿ ಗಾಯಗಳಾಗಿದ್ದು, ಮತ್ತೊಂದು ಹುಲಿಯೊಂದಿಗೆ ಕಾದಾಡಿರುವ ಸಾಧ್ಯತೆ ಇದೆ ಎಂದು ನಾಗರಹೊಳೆ ವನ್ಯಜೀವಿ ವಿಭಾಗದ ಎಸಿಎಫ್ ಗೋಪಾಲ್ ಹೇಳಿದ್ದಾರೆ.
Advertisement