ಮಂಡ್ಯ ಜಿಲ್ಲೆಯ ರೂ. 885 ಕೋಟಿ ಮೊತ್ತದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ: ಡಾ.ನಾರಾಯಣಗೌಡ
ಜಲ ಜೀವನ್ ಮಿಷನ್ ಯೋಜನೆಯಡಿ ಮಂಡ್ಯ ಜಿಲ್ಲೆಯ ಐದು ಪ್ರತ್ಯೇಕ ಯೋಜನೆಗಳಿಗೆ ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ.
Published: 21st February 2023 01:20 AM | Last Updated: 21st February 2023 01:23 AM | A+A A-

ಡಾ.ನಾರಾಯಣಗೌಡ
ಬೆಂಗಳೂರು/ಮಂಡ್ಯ: ಜಲ ಜೀವನ್ ಮಿಷನ್ ಯೋಜನೆಯಡಿ ಮಂಡ್ಯ ಜಿಲ್ಲೆಯ ಐದು ಪ್ರತ್ಯೇಕ ಯೋಜನೆಗಳಿಗೆ ಸಚಿವ ಸಂಪುಟ ಸಭೆಯಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದ್ದಾರೆ.
ಶ್ರೀರಂಗಪಟ್ಟಣ ತಾಲೂಕಿನ ಕಾವೇರಿ ನದಿ ಬಲಭಾಗದಲ್ಲಿರುವ 28 ಜನವಸತಿ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆ- ಅಂದಾಜು ಮೊತ್ತ ರೂ.39.04 ಕೋಟಿ, ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿ ಉತ್ತರ ಭಾಗದಲ್ಲಿರುವ ಮಂಡ್ಯ ತಾಲೂಕಿನ 240 ಜನವಸತಿಗಳು ಮತ್ತು ಮದ್ದೂರು ತಾಲೂಕಿನ 156 ಜನವಸತಿಗಳಿಗೆ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯ ಅಂದಾಜು ಮೊತ್ತ 372.92 ಕೋಟಿ, ಶ್ರೀರಂಗಪಟ್ಟಣ ತಾಲ್ಲೂಕಿನ ಕಾವೇರಿ ನದಿಯ ಎಡಭಾಗದಲ್ಲಿರುವ 56 ಜನವಸತಿಗಳಿಗೆ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯ ಅಂದಾಜು ಮೊತ್ತ ರೂ.58.61 ಕೋಟಿ ಎಂದು ಸಚಿವರು ತಿಳಿಸಿದ್ದಾರೆ.
ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ದಕ್ಷಿಣ ಭಾಗದಲ್ಲಿರುವ ಮಂಡ್ಯ ತಾಲ್ಲೂಕಿನ 51 ಜನವಸತಿಗಳಿಗೆ ಮತ್ತು ಮದ್ದೂರು ತಾಲೂಕಿನ 117 ಜನವಸತಿಗಳಿಗೆ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯ ಅಂದಾಜು ಮೊತ್ತ ರೂ.230.18 ಕೋಟಿ, ಮಳವಳ್ಳಿ ತಾಲ್ಲೂಕಿನ 151 ಜನವಸತಿಗಳಿಗೆ ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯ ಅಂದಾಜು ಮೊತ್ತ ರೂ.184.44 ಕೋಟಿ ಸೇರಿದಂತೆ ಒಟ್ಟು 885.19 ಕೋಟಿ ಮೊತ್ತದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಆದ್ಯತೆ- ಜೆಜೆಎಂನಲ್ಲಿ ಸುಮಾರು 2 ಸಾವಿರ ಕೋಟಿ: ಪ್ರತಿಯೊಬ್ಬರಿಗೂ ಶುದ್ದ ಕುಡಿಯವ ನೀರು ನೀಡಬೇಕು ಎಂಬುದು ಸರ್ಕಾರದ ಕನಸು. ಈ ನಿಟ್ಟಿನಲ್ಲಿ ಜಲಜೀವನ್ ಮೀಷನ್ ಯೋಜನೆಯಡಿ ಮನೆ ಮನೆಗೂ ಶುದ್ದೀಕರಣ ನೀರು ಪೂರೈಕೆ ಮಾಡುವ ಯೋಜನೆ ಜಾರಿಗೆ ತರಲಾಗಿದೆ. ಜೆಜೆಎಂ ಯೋಜನೆಯಲ್ಲಿ ಮಂಡ್ಯ ಜಿಲ್ಲೆಗೆ ಸುಮಾರು 2,000ಸಾವಿರ ಕೋಟಿ ರೂಪಾಯಿಯಷ್ಟು ಅನುದಾನ ನೀಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಮೊದಲ ಹಂತದಲ್ಲಿ ಕೆಆರ್ ಪೇಟೆ, ನಾಗಮಂಗಲ, ಪಾಂಡವಪುರ ತಾಲೂಕುಗಳಲ್ಲಿ 791 ಕೋಟಿ ರೂಪಾಯಿ ಯೋಜನೆ ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ. ಇದೀಗ ಮಂಡ್ಯ ಜಿಲ್ಲೆಯಲ್ಲಿ ಸುಮಾರು 885 ಕೋಟಿ ರೂಪಾಯಿ ಮೊತ್ತದ ಯೋಜನೆಗೆ ಇವತ್ತಿನ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಶೀಘ್ರವಾಗಿ ಕಾಮಗಾರಿ ಆರಂಭಿಸಿ, ಆದಷ್ಟು ಬೇಗ ಕುಡಿಯುವ ನೀರು ಪೂರೈಕೆ ಮಾಡಲಾಗುವುದು ಎಂದು ಸಚಿವ ಡಾ.ನಾರಾಯಣಗೌಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.