ಸಚಿವ ಸಂಪುಟ ಪುನಾರಚನೆ ಕುರಿತು ಶೀಘ್ರದಲ್ಲೇ ನಿರ್ಧಾರ: ಸಿಎಂ ಬೊಮ್ಮಾಯಿ, ಬಿಎಸ್‌ವೈ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ ಅವರು, ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಜ್ಜಾಗಿರುವ ಕುರಿತು ಶನಿವಾರ ಸುಳಿವು ನೀಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಶಿವಮೊಗ್ಗ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿಎಸ್ ಯಡಿಯೂರಪ್ಪ ಅವರು, ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಜ್ಜಾಗಿರುವ ಕುರಿತು ಶನಿವಾರ ಸುಳಿವು ನೀಡಿದ್ದಾರೆ.

ಎರಡು ಅಥವಾ ಮೂರು ದಿನಗಳಲ್ಲಿ ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳಲಿದ್ದು, ನಂತರ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದು ಯಡಿಯೂರಪ್ಪ ಹೇಳಿದ್ದು, ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ ಎಂದು ಬೊಮ್ಮಾಯಿ ಅವಕು ಹೇಳಿದ್ದಾರೆ.

ಶಿಕಾರಿಪುರದಲ್ಲಿ ಶನಿವಾರ ನಡೆದ 'ಬೂತ್ ವಿಜಯ' ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದ ಯಡಿಯೂರಪ್ಪ ಅವರು, ಯಾರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕು ಎಂಬುದನ್ನು ಪ್ರಧಾನಿ ಮೋದಿ ಮತ್ತು ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ. ಹೈಕಮಾಂಡ್ ಯಾವ ನಿರ್ಧಾರ ಕೈಗೊಂಡರೂ ಅದಕ್ಕೆ ಬದ್ಧರಾಗಿರುತ್ತೇವೆ ಎಂದು ಹೇಳಿದರು.

ಈ ನಡುವೆ ಸಚಿವ ಸಂಪುಟ ವಿಸ್ತರಣೆ ಕುರಿತು ಯಡಿಯೂರಪ್ಪ ಅವರ ಹೇಳಿಕೆಗಳ ಬಗ್ಗೆ ಚಿತ್ರದುರ್ಗದಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಬೊಮ್ಮಾಯಿ ಅವರು, ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಯಾರೆಲ್ಲಾ ನಾಯಕರು ಸೇರ್ಪಡೆಗೊಳ್ಳಲಿದ್ದಾರೆಂಬ ಪ್ರಶ್ನೆಗೆ ಉತ್ತರಿಸಿ, ಈ ಸಂಬಂಧ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದರು. ಆದರೆ, ಹೈಕಮಾಂಡ್ ಜೊತೆಗಿನ ಭೇಟಿ ದಿನಾಂಕವನ್ನು ಅವರು ಸ್ಪಷ್ಟಪಡಿಸಿಲ್ಲ.ಶೀಘ್ರದಲ್ಲೇ ನಡೆಯಲಿದೆ ಎಂದಿದ್ದಾರೆ.

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕುಮ್ಮಕ್ಕು ನೀಡಿದ ಆರೋಪದ ಮೇಲೆ ರಾಜೀನಾಮೆ ನೀಡಿದ ಕೆ.ಎಸ್.ಈಶ್ವರಪ್ಪ, ಲೈಂಗಿಕ ಹಗರಣದ ಆರೋಪದ ಮೇಲೆ ರಾಜೀನಾಮೆ ನೀಡಿದ ರಮೇಶ್ ಜಾರಕಿಹೊಳಿ ಸೇರಿದಂತೆ ಹಲವು ಅತೃಪ್ತ ಶಾಸಕರು ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಈಶ್ವರಪ್ಪ ಅವರಿಗೆ ಪೊಲೀಸರು ಕ್ಲೀನ್ ಚಿಟ್ ನೀಡಿದ್ದರೂ, ಹೆಚ್ಚಿನ ಸಾಕ್ಷ್ಯಾಧಾರಗಳನ್ನು ನೀಡುವಂತೆ ಪಾಟೀಲ ಕುಟುಂಬ ಸದಸ್ಯರನ್ನು ಪ್ರಚೋದಿಸಿ ಕೆಲವು ರಾಜಕಾರಣಿಗಳು ತಮ್ಮ ವಿರುದ್ಧ ಪಿತೂರಿ ನಡೆಸಿರಬಹುದು ಎಂದು ಈಶ್ವರಪ್ಪ ಶುಕ್ರವಾರ ಶಿವಮೊಗ್ಗದಲ್ಲಿ ಆರೋಪಿಸಿದ್ದರು. ತಮಗೆ ಸಚಿವ ಸ್ಥಾನ ಸಿಗದಂತೆ ನೋಡಿಕೊಳ್ಳಲು ಕೆಲವರು ಷಡ್ಯಂತ್ರ ರೂಪಿಸಿರಬಹುದು ಎಂದಿದ್ದರು.

ಬಳಿಕ ಸಚಿವ ಸಂಪುಟಕ್ಕೆ ಸೇರ್ಪಡೆಯಾಗುವ ವಿಶ್ವಾಸ ವ್ಯಕ್ತಪಡಿಸಿದ ಅವರು, ನಿರ್ಧಾರವನ್ನು ಹೈಕಮಾಂಡ್ ಮತ್ತು ಸಿಎಂಗೆ ಬಿಡಲಾಗಿದೆ ಎಂದು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com