ರಾಜ್ಯದಲ್ಲಿ ವಿಧಿ ವಿಜ್ಞಾನ ವಿವಿ ಸ್ಥಾಪನೆ ವಿಚಾರ: 3 ದಿನಗಳ ಕಾಲ ಗೃಹ ಸಚಿವ ಆರಗ ಜ್ಞಾನೇಂದ್ರ ಗುಜರಾತ್ ಪ್ರವಾಸ

ಕರ್ನಾಟಕದಲ್ಲಿ ವಿಧಿವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಂಗಳವಾರದಿಂದ ಗುಜರಾತ್‌ ರಾಜ್ಯಕ್ಕೆ ಮೂರು ದಿನಗಳ ಕಾಲ ಭೇಟಿ ನೀಡಲಿದ್ದಾರೆ.
ಗೃಹ ಸಚಿವ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಕರ್ನಾಟಕದಲ್ಲಿ ವಿಧಿವಿಜ್ಞಾನ ವಿಶ್ವವಿದ್ಯಾಲಯ ಸ್ಥಾಪನೆ ಸಂಬಂಧ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಮಂಗಳವಾರದಿಂದ ಗುಜರಾತ್‌ ರಾಜ್ಯಕ್ಕೆ ಮೂರು ದಿನಗಳ ಕಾಲ ಭೇಟಿ ನೀಡಲಿದ್ದಾರೆ.

ಅಪರಾಧದ ದೃಶ್ಯಗಳಿಂದ ವೈಜ್ಞಾನಿಕ ಪುರಾವೆಗಳನ್ನು ಸಂಗ್ರಹಿಸುವಲ್ಲಿ ತನ್ನ ಸಾಮರ್ಥ್ಯವನ್ನು ಹೆಚ್ಚಿಸಲು ವಿಧಿವಿಜ್ಞಾನದ ಕೋರ್ಸ್‌ಗಳನ್ನು ನೀಡಲು ರಾಜ್ಯ ಸರ್ಕಾರವು ಪ್ರತ್ಯೇಕ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ಚಿಂತನೆ ನಡೆಸುತ್ತಿದೆ.

ಗುಜರಾತ್‌ನ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯದ ಅಧಿಕಾರಿಗಳೊಂದಿಗೆ ಈಗಾಗಲೇ ಹಲವು ಸುತ್ತಿನ ಮಾತುಕತೆ ನಡೆಸಲಾಗಿದ್ದು, ಕರ್ನಾಟಕದಲ್ಲಿ ಇದೇ ರೀತಿಯ ವಿಶ್ವವಿದ್ಯಾಲಯವನ್ನು ಸ್ಥಾಪಿಸಲು ರಾಜ್ಯಕ್ಕೆ ನೆರವು ನೀಡಲು ಮುಂದೆ ಬಂದಿದೆ.

ಯೋಜನೆಯನ್ನು ಮುಂದಕ್ಕೆ ಕೊಂಡೊಯ್ಯಲು, ಗೃಹ ಸಚಿವರು ವಿಶ್ವವಿದ್ಯಾಲಯದ ಉಪಕುಲಪತಿ ಮತ್ತು ಇತರ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ 3 ದಿನಗಳ ಕಾಲ ಗುಜರಾತ್ ರಾಜ್ಯ ಪ್ರವಾಸ ಕೈಗೊಳ್ಳುತ್ತಿದ್ದಾರೆ.

ಗುಜರಾತ್ ಭೇಟಿ ವೇಳೆ ವಿಶ್ವವಿದ್ಯಾಲಯದೊಂದಿಗೆ ಒಪ್ಪಂದ ಪತ್ರಕ್ಕೆ ಸಹಿ ಹಾಕುವ ಸಾಧ್ಯತೆಯಿದೆ. ಒಮ್ಮೆ ವಿಶ್ವವಿದ್ಯಾಲಯ ಸ್ಥಾಪನೆಯಾಗಿದ್ದೇ ಆದರೆ, ದಕ್ಷಿಣ ಭಾರತದಲ್ಲಿ ಸ್ಥಾಪನೆಗೊಂಡ ಮೊದಲ ವಿಧಿವಿಜ್ಞಾನ ವಿಶ್ವವಿದ್ಯಾಲಯ ಎಂಬ ಹಿರಿಮೆಗೆ ಪಾತ್ರವಾಗಲಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಕೋರ್ಸ್‌ಗಳನ್ನು ಪ್ರಾರಂಭಿಸಲು ಸರ್ಕಾರ ಚಿಂತನೆ ನಡೆಸಿದೆ.

ಗುಜರಾತ್ ರಾಜ್ಯಕ್ಕೆ ಭೇಟಿ ನೀಡುವ ಜ್ಞಾನೇಂದ್ರ ಅವರು, ಈ ವೇಳೆ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರನ್ನೂ ಭೇಟಿ ಮಾಡಲಿದ್ದಾರೆಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com