ಬೆಳಗಾವಿಯ ಹಿಂಡಲಗಾ ಜೈಲಿನಿಂದ ನಿತಿನ್ ಗಡ್ಕರಿಗೆ ಬೆದರಿಕೆ ಕರೆ; ಕೂಲಂಕಷ ತನಿಖೆ ನಡೆಸುತ್ತೇವೆ ಎಂದ ಸಿಎಂ ಬೊಮ್ಮಾಯಿ
ಬೆಳಗಾವಿಯ ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಸರ್ಕಾರವು ಕೂಲಂಕಷವಾಗಿ ತನಿಖೆ ನಡೆಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದ್ದಾರೆ.
Published: 16th January 2023 01:00 PM | Last Updated: 16th January 2023 04:59 PM | A+A A-

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ಬೆಳಗಾವಿಯ ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಕರೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಸರ್ಕಾರವು ಕೂಲಂಕಷವಾಗಿ ತನಿಖೆ ನಡೆಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದ್ದಾರೆ.
ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರ ನಾಗ್ಪುರ ಕಚೇರಿಗೆ ಕರೆ ಮಾಡಿದ ವ್ಯಕ್ತಿ ಜೀವ ಬೆದರಿಕೆಯೊಡ್ಡಿದ್ದಾನೆ ಮತ್ತು 100 ಕೋಟಿ ರೂ. ಹಣಕ್ಕೆ ಬೇಡಿಕೆಯಿಟ್ಟಿದ್ದಾನೆ.
ಕರೆ ಮಾಡಿದ ಆರೋಪಿ ಜಯೇಶ್ ಪೂಜಾರಿ ಹಿಂಡಲಗಾ ಜೈಲಿನ ಕೈದಿಯಾಗಿದ್ದು, ಈ ಹಿಂದಿನ ಕೊಲೆ ಪ್ರಕರಣವೊಂದರಲ್ಲಿ ನ್ಯಾಯಾಲಯದಿಂದ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದಾನೆ ಎಂದು ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಇದನ್ನೂ ಓದಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಜೀವ ಬೆದರಿಕೆ ಕರೆ, ಬಿಗಿ ಭದ್ರತೆ
ಪೊಲೀಸರ ಪ್ರಕಾರ, ಪೂಜಾರಿ ತಾನು ದಾವೂದ್ ಇಬ್ರಾಹಿಂ ಗ್ಯಾಂಗ್ ಸದಸ್ಯ ಎಂದು ಹೇಳಿಕೊಂಡಿದ್ದಾನೆ.
ಹಿಂಡಲಗಾ ಜೈಲಿನಿಂದ ಕರೆ ಮಾಡಲಾಗಿತ್ತು. ನಾವು ಸಂಪೂರ್ಣ ತನಿಖೆ ನಡೆಸುತ್ತಿದ್ದೇವೆ. ನಾವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಬೊಮ್ಮಾಯಿ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಕರೆ ಮಾಡಿದ ವ್ಯಕ್ತಿಯ ಹಿನ್ನೆಲೆ ಪರಿಶೀಲನೆ ನಡೆಸುವುದಾಗಿಯೂ ಮುಖ್ಯಮಂತ್ರಿ ಹೇಳಿದ್ದಾರೆ.
ಕೊಲೆ ಪ್ರಕರಣದಲ್ಲಿ ನ್ಯಾಯಾಲಯದಿಂದ ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಪೂಜಾರಿ 2016 ರಲ್ಲಿ ಜೈಲಿನಿಂದ ಪರಾರಿಯಾಗಿದ್ದ. ಆದರೆ, ನಂತರ ಪೊಲೀಸರು ಬಂಧಿಸಿದ್ದರು.