ಫೆಬ್ರವರಿ 27ಕ್ಕೆ ಪ್ರಧಾನಿ ಮೋದಿಯಿಂದ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ: ಬಿಎಸ್‌ವೈ

ಶಿವಮೊಗ್ಗ ವಿಮಾನ ನಿಲ್ದಾಣವನ್ನು ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಬುಧವಾರ ಹೇಳಿದ್ದಾರೆ.
ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ಯಡಿಯೂರಪ್ಪ
ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ಯಡಿಯೂರಪ್ಪ

ಶಿವಮೊಗ್ಗ: ಶಿವಮೊಗ್ಗ ವಿಮಾನ ನಿಲ್ದಾಣವನ್ನು ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಬುಧವಾರ ಹೇಳಿದ್ದಾರೆ.

ವಿಮಾನ ನಿಲ್ದಾಣ ಉದ್ಘಾಟನೆಯ ನಂತರ ಶಿವಮೊಗ್ಗ-ಬೆಂಗಳೂರು ನಡುವೆ ವಿಮಾನ ಹಾರಾಟ ಪ್ರಾರಂಭವಾಗಲಿದೆ ಎಂದು ಸಂಸದ ಬಿ ವೈ ರಾಘವೇಂದ್ರ ಅವರು ತಿಳಿಸಿದ್ದಾರೆ.

ಇಂದು ಸೋಗಾನೆ ವಿಮಾನ ನಿಲ್ದಾಣ ಕಾಮಗಾರಿಯನ್ನು ತಂದೆ-ಮಗ ಇಬ್ಬರೂ ಪರಿಶೀಲಿಸಿದರು. ಬಳಿಕ ಮಾತನಾಡಿದ ಯಡಿಯೂರಪ್ಪ, ವಿಮಾನ ನಿಲ್ದಾಣ ಕಾಮಗಾರಿ ಮುಕ್ತಾಯ ಹಂತದಲ್ಲಿದ್ದು, ಇದು ರಾಜ್ಯದಲ್ಲಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಂತರ ಅತಿ ದೊಡ್ಡ ವಿಮಾನ ನಿಲ್ದಾಣವಾಗಲಿದೆ. ಈ ವಿಮಾನ ನಿಲ್ದಾಣ ಉದ್ಘಾಟನೆ ಮಾಡುವಂತೆ ಪ್ರಧಾನಿ ಮೋದಿಗೆ ಮನವಿ ಮಾಡಿದ್ದೆ. ಫೆಬ್ರವರಿ 27 ರಂದು ಪ್ರಧಾನಿಯವರು ವಿಮಾನ ನಿಲ್ದಾಣವನ್ನು ಉದ್ಘಾಟಿಸಲಿದ್ದಾರೆ ಎಂದು ಹೇಳಿದರು.

ಶಿವಮೊಗ್ಗ ವಿಮಾನ ನಿಲ್ದಾಣವನ್ನು ಕನಿಷ್ಠ 449 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಶಿವಮೊಗ್ಗ ವಿಮಾನ ನಿಲ್ದಾಣವು ಕನಿಷ್ಠ ವೆಚ್ಚದಲ್ಲಿ ನಿರ್ಮಿಸಿದ ದೇಶದ ಮೊದಲ ವಿಮಾನ ನಿಲ್ದಾಣವಾಗಿದ್ದು, ಈ ವಿಮಾನ ನಿಲ್ದಾಣವು ವಿಮಾನಗಳ ರಾತ್ರಿ ಇಳಿಯುವಿಕೆಯಂತಹ ಸುಧಾರಿತ ಸೌಲಭ್ಯಗಳನ್ನು ಹೊಂದಿರುತ್ತದೆ. ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭೂಮಿ ನೀಡಿದ ರೈತರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.

ಬಳಿಕ ಸಂಸದ ರಾಘವೇಂದ್ರ ಮಾತನಾಡಿ, ಹಲವು ವಿಮಾನ ನಿಲ್ದಾಣಗಳು ಉದ್ಘಾಟನೆಗೊಂಡ ಎರಡ್ಮೂರು ವರ್ಷಗಳ ನಂತರ ಕಾರ್ಯಾಚರಣೆ ಆರಂಭಿಸಿವೆ. ಈ ವಿಮಾನ ನಿಲ್ದಾಣ ಉದ್ಘಾಟನೆಯಾದ ತಕ್ಷಣ ಕಾರ್ಯಾಚರಣೆ ಆರಂಭಿಸಲು ಅಧಿಕಾರಿಗಳು ವಿಮಾನ ನಿರ್ವಾಹಕರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ತಿಳಿಸಿದರು.

ಸ್ಟಾರ್ ಏರ್ ಕಾರ್ಯನಿರ್ವಹಿಸಲು ಮುಂದೆ ಬಂದಿದೆ. ನಾವು ಇತರ ವಿಮಾನಯಾನ ಸಂಸ್ಥೆಗಳೊಂದಿಗೆ ಸಂಪರ್ಕದಲ್ಲಿದ್ದೇವೆ. ಮೊದಲ ವಿಮಾನ ಕಾರ್ಯಾಚರಣೆ ಶಿವಮೊಗ್ಗ ಮತ್ತು ಬೆಂಗಳೂರು ನಡುವೆ ಆರಂಭವಾಗಲಿದೆ. ಪ್ರಧಾನಿಯವರ ವಿಮಾನವು ಮೊದಲು ಇಲ್ಲಿ ಇಳಿಯಬೇಕೆಂದು ನಾವು ಬಯಸುತ್ತೇವೆ ಎಂದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com