ಈಡೇರದ ಬೇಡಿಕೆ: ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಸಾರಿಗೆ ನೌಕರರು, ಜ.24 ರಂದು ಪ್ರತಿಭಟನೆಗೆ ಮುಂದು

ತಮ್ಮ ಬೇಡಿಕೆಗಳನ್ನು ಈಡೇರಿಸದ ರಾಜ್ಯ ಸರ್ಕಾರದ ವಿರುದ್ಧ ಸಾರಿಗೆ ನೌಕರರು ಆಕ್ರೋಶ ವ್ಯಕ್ತಪಡಿಸಿದ್ದು, ಜನವರಿ 24 ರಂದು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ತಮ್ಮ ಬೇಡಿಕೆಗಳನ್ನು ಈಡೇರಿಸದ ರಾಜ್ಯ ಸರ್ಕಾರದ ವಿರುದ್ಧ ಸಾರಿಗೆ ನೌಕರರು ಆಕ್ರೋಶ ವ್ಯಕ್ತಪಡಿಸಿದ್ದು, ಜನವರಿ 24 ರಂದು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಸಾರಿಗೆ ನೌಕರರ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾದ ಹಿನ್ನೆಲೆ ಸರ್ಕಾರದ ಧೋರಣೆ ಖಂಡಿಸಿ  ಜನವರಿ 24 ರಂದು ರಾಜ್ಯ ಸಾರಿಗೆ ನೌಕರರ ಮುಖಂಡ ಅನಂತಸುಬ್ಬರಾವ್ ನೇತೃತ್ವದಲ್ಲಿ ಧರಣಿ ಸತ್ಯಾಗ್ರಹ ನಡೆಸಲು ಮುಂದಾಗಿದ್ದಾರೆ.

ವೇತನ ಹೆಚ್ಚಳ, ವಜಾಗೊಂಡ ನೌಕರರನ್ನು ಮರುಸೇರ್ಪಡೆಗೊಳಿಸುವುದು ಮತ್ತು ಕೆಲಸದ ಪರಿಸ್ಥಿತಿಗಳನ್ನು ಸುಧಾರಿಸಲು ರಾಜ್ಯ ಸರ್ಕಾರವನ್ನು ಒತ್ತಾಯಿಸಿ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ಕೆಕೆಎಸ್‌ಆರ್‌ಟಿಸಿ ಮತ್ತು ಎನ್‌ಡಬ್ಲ್ಯುಕೆಎಸ್‌ಆರ್‌ಟಿಸಿ ನೌಕರರು ಜನವರಿ 24 ರಂದು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಅಖಿಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಮಂಡಳಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸಂಘ ಹಾಗೂ ಇತರೆ ಸಂಘಗಳು ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿವೆ. ಆದರೆ, ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ ಎಂದು ಒಕ್ಕೂಟಗಳು ಸ್ಪಷ್ಟಪಡಿಸಿವೆ.

ಸಾರಿಗೆ ನೌಕರರ ವೇತನ ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಪದೇ ಪದೇ ಮನವಿ ಮಾಡುತ್ತಲೇ ಬಂದಿದ್ದೇವೆ. ಸಾರಿಗೆ ಸಚಿವ ಬಿ.ಶ್ರೀರಾಮುಲು ಅವರು ಹಲವು ಬಾರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಗಮನಕ್ಕೆ ತಂದು ನಮ್ಮ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಇಲ್ಲಿಯವರೆಗೆ ನಮ್ಮ ಬೇಡಿಕೆಗಳನ್ನು ಈಡೇರಿಸಿಲ್ಲ. ನಮ್ಮ ಕಾರ್ಮಿಕರು ತೊಂದರೆ ಅನುಭವಿಸುತ್ತಿದ್ದಾರೆ ಎಂದು ಕೆಎಸ್‌ಆರ್‌ಟಿಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಫೆಡರೇಶನ್ ಅಧ್ಯಕ್ಷ ಎಚ್‌ವಿ ಅನಂತ ಸುಬ್ಬರಾವ್ ಅವರು ಹೇಳಿದ್ದಾರೆ.

ವೇತನ ಪರಿಷ್ಕರಣೆ, ಕೆಲಸದ ಅವಧಿಯನ್ನು ಕಡಿತಗೊಳಿಸುವುದು, ಎಲ್ಲಾ ಕಾರ್ಮಿಕರಿಗೆ, ವಿಶೇಷವಾಗಿ ಮಹಿಳೆಯರಿಗೆ ಕೆಲಸದ ಪರಿಸ್ಥಿತಿಗಳನ್ನು ಸುಧಾರಿಸುವುದು, ನೌಕರರ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗಳನ್ನು ಹಿಂಪಡೆಯುವುದು ಮತ್ತು ವಜಾಗೊಂಡ ನೌಕರರನ್ನು ಮರುನೇಮಕಗೊಳಿಸುವುದು ಸೇರಿದಂತೆ 14 ಬೇಡಿಕೆಗಳ ಪಟ್ಟಿಯನ್ನು ಸಂಘಗಳು ಹೊಂದಿವೆ ಎಂದು ಅವರು ತಿಳಿಸಿದರು.

ನೌಕರರು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರೆ, ಇತರರು ಕರ್ನಾಟಕದಾದ್ಯಂತ ತಮ್ಮ ವಿಭಾಗೀಯ ಕೇಂದ್ರಗಳ ಮುಂದೆ ಪ್ರತಿಭಟನೆ ನಡೆಸಲಿದ್ದಾರೆ. "ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ, ಮುಂದಿನ ಹಂತದಲ್ಲಿ ನಮ್ಮ ಸೇವೆಗಳನ್ನು ಸ್ಥಗಿತಗೊಳಿಸಿ ಪ್ರತಿಭಟನೆ ತೀವ್ರಗೊಳಿಸಲು ಮುಂದಾಗಲಾಗುತ್ತದೆ. ನಂತರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗುವುದು ಎಂದು ಎಚ್ಚರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com