ಟೆಂಡರ್ ಶ್ಯೂರ್ ಕಾಮಗಾರಿಗಳಲ್ಲಿ ಅಕ್ರಮ: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ಬಿಜೆಪಿ ದೂರು

2013-14 ರಲ್ಲಿ ಟೆಂಡರ್ ಶ್ಯೂರ್ ಕಾಮಗಾರಿಗಳಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ಬಿಜೆಪಿ, ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ವಿರುದ್ಧ ತನಿಖೆ ನಡೆಸುವಂತೆ ಕರ್ನಾಟಕ ಲೋಕಾಯುಕ್ತಕ್ಕೆ ದೂರು ನೀಡಿದೆ. 
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: 2013-14 ರಲ್ಲಿ ಟೆಂಡರ್ ಶ್ಯೂರ್ ಕಾಮಗಾರಿಗಳಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿರುವ ಬಿಜೆಪಿ, ರಾಜ್ಯದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ವಿರುದ್ಧ ತನಿಖೆ ನಡೆಸುವಂತೆ ಕರ್ನಾಟಕ ಲೋಕಾಯುಕ್ತಕ್ಕೆ ದೂರು ನೀಡಿದೆ. 

ಟೆಂಡರ್‌ ಶ್ಯೂರ್‌ ರಸ್ತೆ ಕಾಮಗಾರಿಗಳಲ್ಲಿ ಗುತ್ತಿಗೆದಾರರಿಗೆ ಶೇ 53.86ರಷ್ಟು ಹೆಚ್ಚುವರಿ ಮೊತ್ತ ಪಾವತಿಸಿ, ಅಕ್ರಮ ಎಸಗಿರುವ ಆರೋಪಕ್ಕೆ ಸಂಬಂಧಿಸಿದಂತೆ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ ಲೋಕಾಯುಕ್ತರಿಗೆ ಸೋಮವಾರ ದೂರು ಸಲ್ಲಿಸಲಾಗಿದೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಎಸ್‌ಸಿ ಮೋರ್ಚಾ ಅಧ್ಯಕ್ಷ ಹಾಗೂ ಎಂಎಲ್‌ಸಿ ಛಲವಾದಿ ನಾರಾಯಣಸ್ವಾಮಿ, 'ಕಾಂಗ್ರೆಸ್ ಯಾವುದೇ ಪುರಾವೆ ಇಲ್ಲದೇ ಶೇ.40 ಕಮಿಷನ್ ಆರೋಪ ಮಾಡುತ್ತಿದೆ ಹಾಗೂ ಬಿಜೆಪಿ ಮತ್ತು ರಾಜ್ಯ ಸರ್ಕಾರದ ವಿರುದ್ಧ ಅಪಪ್ರಚಾರ ನಡೆಸುತ್ತಿದೆ. ಅದಕ್ಕೆ ಪ್ರತಿಯಾಗಿ ಸಿದ್ದರಾಮಯ್ಯ ವಿರುದ್ಧ ನಾವು ಲೋಕಾಯುಕ್ತಕ್ಕೆ ದಾಖಲೆ ಸಹಿತ ದೂರು ನೀಡಿದ್ದೇವೆ’ ಎಂದರು.

ಲೋಕಾಯುಕ್ತಕ್ಕೆ ದೂರು ನೀಡಿದ್ದೇವೆ. ನಾವು ಮಾಡುತ್ತಿರುವ ಆರೋಪಗಳಿಗೆ ನಮ್ಮ ಬಳಿ ಪುರಾವೆಗಳಿವೆ. ಆದರೆ, ಅವರ ಬಳಿ ಇಲ್ಲ. ಅವರು ಇಲ್ಲಿಯವರೆಗೆ ಯಾವುದೇ ಪುರಾವೆಗಳನ್ನು ನೀಡಲು ಸಾಧ್ಯವಾಗಿಲ್ಲ. ದಾಖಲೆಗಳ ಆಧಾರದಲ್ಲಿ ಕ್ರಮ ಜರುಗಿಸುವುದಾಗಿ ಲೋಕಾಯುಕ್ತರು ಭರವಸೆ ನೀಡಿದ್ದಾರೆ ಎಂದು ನಾರಾಯಣಸ್ವಾಮಿ ಹೇಳಿದರು.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿನ 2013-14ರಲ್ಲಿ ನಡೆದ 'ಟೆಂಡರ್‌ ಶ್ಯೂರ್‌' ಯೋಜನೆಗಳಲ್ಲಿ ನಿಜವಾಗಿ ಟೆಂಡರ್‌ ಮಾಡಿದ್ದಕ್ಕಿಂತ ಶೇ 53.86 ರಷ್ಟು ಹೆಚ್ಚುವರಿ ಹಣ ಬಿಡುಗಡೆಯಾಗಿದ್ದು, ಇದನ್ನು ಸಾಬೀತುಪಡಿಸಲು ಬಿಜೆಪಿ ಕೆಲವು ದಾಖಲೆಗಳನ್ನು ನೀಡಿದೆ.

ಸಿದ್ದರಾಮಯ್ಯ ವಿರುದ್ಧ 65 ಪ್ರಕರಣಗಳಿದ್ದು, ಅವುಗಳ ವಿಚಾರಣೆ ನಡೆಸುವ ಬದಲು ಲೋಕಾಯುಕ್ತ ಸಂಸ್ಥೆಯನ್ನು ಮುಚ್ಚಲು ನಿರ್ಧರಿಸಿದ್ದರು ಎಂದ ನಾರಾಯಣಸ್ವಾಮಿ, ತಮ್ಮ ಅಧಿಕಾರಾವಧಿಯಲ್ಲಿ ಭ್ರಷ್ಟಾಚಾರ ನಿಗ್ರಹ ದಳದಲ್ಲಿ (ಎಸಿಬಿ) ಕನಿಷ್ಠ 10 ಪ್ರಕರಣಗಳಿಗೆ ಕ್ಲೀನ್ ಚಿಟ್ ನೀಡಲಾಗಿತ್ತು. ಸಿದ್ದರಾಮಯ್ಯ ಅವರ ವಿರುದ್ಧ ಉಳಿದಿರುವ 50 ಪ್ರಕರಣಗಳ ತನಿಖೆಯಾಗಬೇಕೆಂದು ನಾವು ಬಯಸುತ್ತೇವೆ ಎಂದು ದೂರಿದರು. 

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ 35 ಸಾವಿರ ಕೋಟಿ ರೂ.ಗಳ ಆರ್ಥಿಕ ಅವ್ಯವಹಾರ ನಡೆದಿದೆ ಎಂದು ಸಿಎಜಿ ವರದಿಯನ್ನು ಉಲ್ಲೇಖಿಸಿ ಈ ಹಿಂದೆ ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com