ಚಿಕ್ಕಬಳ್ಳಾಪುರ ಕಾಲೇಜು ಹಾಸ್ಟೆಲ್‌ನಲ್ಲಿ ಕೋಲಾರ ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು
ಚಿಕ್ಕಬಳ್ಳಾಪುರದ ಕಾಲೇಜು ಹಾಸ್ಟೆಲ್‌ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿದ ಪೋಷಕರು ಪೊಲೀಸ್ ದೂರು ದಾಖಲಿಸಿದ್ದಾರೆ.
Published: 05th July 2023 12:26 PM | Last Updated: 05th July 2023 12:26 PM | A+A A-

ಸಾಂದರ್ಭಿಕ ಚಿತ್ರ
ಚಿಕ್ಕಬಳ್ಳಾಪುರ: ಇಲ್ಲಿನ ಕಾಲೇಜು ಹಾಸ್ಟೆಲ್‌ನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸಾವಿನ ಕುರಿತು ಅನುಮಾನ ವ್ಯಕ್ತಪಡಿಸಿದ ಪೋಷಕರು ಪೊಲೀಸ್ ದೂರು ದಾಖಲಿಸಿದ್ದಾರೆ.
ದೂರಿನ ಆಧಾರದ ಮೇಲೆ ತನಿಖೆ ಆರಂಭಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ನಾಗಾರ್ಜುನ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದ ಇಪ್ಪತ್ತೆರಡು ವರ್ಷದ ಪ್ರೀತಿ ಸೋಮವಾರ ಮಧ್ಯಾಹ್ನ ತನ್ನ ಕೋಣೆಯ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ.
ಮಾಹಿತಿ ವಿಜ್ಞಾನ ವಿಭಾಗದಲ್ಲಿ ಎರಡನೇ ವರ್ಷದ ವಿದ್ಯಾರ್ಥಿನಿಯಾಗಿದ್ದ ಈಕೆ ಕಾಲೇಜಿನ ಮಹಿಳಾ ಹಾಸ್ಟೆಲ್‌ನಲ್ಲಿ ತಂಗಿದ್ದಳು.
ಪ್ರೀತಿ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಸಮೀಪದ ಯಲ್ದೂರು ಗ್ರಾಮದವರು. ಸೋಮವಾರ ಕಾಲೇಜಿಗೆ ಹೋಗದೆ ಹಾಸ್ಟೆಲ್‌ನಲ್ಲಿ ಉಳಿದುಕೊಂಡಿರುವುದು ಪ್ರಾಥಮಿಕ ವಿಚಾರಣೆಯಿಂದ ತಿಳಿದುಬಂದಿದೆ.
ಹಾಸ್ಟೆಲ್ ವಾರ್ಡನ್ ಮತ್ತು ಸ್ನೇಹಿತರಿಗೆ ತನಗೆ ಹುಷಾರಿಲ್ಲದಿರುವ ಕಾರಣ, ತಾನು ತರಗತಿಗಳಿಗೆ ಹಾಜರಾಗುವುದಿಲ್ಲ ಎಂದು ತಿಳಿಸಿದ್ದಳು. ಆಕೆಯ ಸ್ನೇಹಿತೆಯೊಬ್ಬರು ಆಕೆಯನ್ನು ಪರೀಕ್ಷಿಸಲು ಕೋಣೆಗೆ ಹೋದಾಗ, ಘಟನೆ ಬೆಳಕಿಗೆ ಬಂದಿದೆ.
ತಕ್ಷಣ ಕಾಲೇಜು ಅಧಿಕಾರಿಗಳು ಆಕೆಯನ್ನು ಚಿಕ್ಕಬಳ್ಳಾಪುರ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಅಷ್ಟೊತ್ತಿಗಾಗಲೇ ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಪಾಲಕರು ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ವಿಜಯಪುರ ಪೊಲೀಸರು ತನಿಖೆ ಆರಂಭಿಸಿದ್ದು, ಎಲ್ಲ ಆಯಾಮಗಳಲ್ಲೂ ಪರಿಶೀಲನೆ ನಡೆಸಿದ್ದಾರೆ.