ಉಡುಪಿ ಕಾಲೇಜು ವಿಡಿಯೋ ಘಟನೆ: ಕೇಂದ್ರೀಯ ಸಂಸ್ಥೆಯಿಂದ ತನಿಖೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಉಡುಪಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಘಟನೆಯನ್ನು ಕೇಂದ್ರೀಯ ಸಂಸ್ಥೆಯಿಂದ ಮುಕ್ತ ಮತ್ತು ನ್ಯಾಯಸಮ್ಮತ ತನಿಖೆಗೆ ಆಗ್ರಹಿಸಿ ಸ್ಥಳೀಯ ಶಾಸಕ ಯಶಪಾಲ್ ಸುವರ್ಣ ನೇತೃತ್ವದಲ್ಲಿ ಬಿಜೆಪಿ ಶುಕ್ರವಾರ ಪ್ರತಿಭಟನೆ ನಡೆಸಿತು.
ಬಿಜೆಪಿ ಪ್ರತಿಭಟನೆ
ಬಿಜೆಪಿ ಪ್ರತಿಭಟನೆ

ಉಡುಪಿ: ಉಡುಪಿ ಕಾಲೇಜಿನಲ್ಲಿ ವಿಡಿಯೋ ಚಿತ್ರೀಕರಣ ಘಟನೆಯನ್ನು ಕೇಂದ್ರೀಯ ಸಂಸ್ಥೆಯಿಂದ ಮುಕ್ತ ಮತ್ತು ನ್ಯಾಯಸಮ್ಮತ ತನಿಖೆಗೆ ಆಗ್ರಹಿಸಿ ಸ್ಥಳೀಯ ಶಾಸಕ ಯಶಪಾಲ್ ಸುವರ್ಣ ನೇತೃತ್ವದಲ್ಲಿ ಬಿಜೆಪಿ ಶುಕ್ರವಾರ ಪ್ರತಿಭಟನೆ ನಡೆಸಿತು.

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಯಶಪಾಲ್ ಸುವರ್ಣ,  ನಾವು ನ್ಯಾಯಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದೇವೆ. ಕೇಂದ್ರೀಯ ಸಂಸ್ಥೆಯಿಂದ ಮುಕ್ತ ಮತ್ತು ನ್ಯಾಯಯುತ ತನಿಖೆಯನ್ನು ನಾವು ಬಯಸುತ್ತೇವೆ. ಈ ಬಗ್ಗೆ ಸರಕಾರ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ  ಎಂದು ದೂರಿದರು.

ಇದೇ ವೇಳೆ ಉಡುಪಿ ಘಟನೆ ಕುರಿತು ಪ್ರತಿಕ್ರಿಯಿಸಿರುವ ಕರ್ನಾಟಕ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಉಡುಪಿಯಲ್ಲಿ ನಡೆದಿರುವುದು ಸ್ವೀಕಾರಾರ್ಹವಲ್ಲ, ವಿದ್ಯಾರ್ಥಿಗಳು ಕೆಲವು ಇತಿಮಿತಿಗಳನ್ನು ಮೀರಬಾರದು. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಈಗಾಗಲೇ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರನ್ನು ಸುಮ್ಮನೆ ಬಿಡುವುದಿಲ್ಲ ಎಂದರು. 

ಉಡುಪಿಯ ಅರೆ ವೈದ್ಯಕೀಯ ಕಾಲೇಜಿನ ಮೂವರು ಬಾಲಕಿಯರು ವಾಶ್ ರೂಂನಲ್ಲಿ ಸಹ ವಿದ್ಯಾರ್ಥಿಗಳನ್ನು ಚಿತ್ರೀಕರಿಸಿದ ಘಟನೆ ವರದಿಯಾದ ಬೆನ್ನಲ್ಲೇ, ಪೊಲೀಸರು ಈ ವಿಷಯದಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ. ಪೊಲೀಸರ ಪ್ರಕಾರ, ವಿದ್ಯಾರ್ಥಿನಿಯ ವಿಡಿಯೋ ಚಿತ್ರೀಕರಣ ಮತ್ತು ವಿಡಿಯೋ ಅಳಿಸಿದ ಆರೋಪದ ಮೇಲೆ ಮೂವರು ಹುಡುಗಿಯರು ಮತ್ತು ಕಾಲೇಜು ಆಡಳಿತ ಮಂಡಳಿಯ ವಿರುದ್ಧ ಒಂದು  ಎಫ್‌ಐಆರ್‌ ದಾಖಲಿಸಲಾಗಿದೆ.

ಎರಡನೇ ಪ್ರಕರಣ YouTube ಚಾನಲ್‌ಗಳಲ್ಲಿ ಎಡಿಟ್ ಮಾಡಿದ ವೀಡಿಯೊವನ್ನು ಅಪ್‌ಲೋಡ್ ಮಾಡಿರುವುದಕ್ಕೆ ಸಂಬಂಧಿಸಿದೆ. ಈ ವಿಡಿಯೋವನ್ನು ಟ್ವಿಟರ್ ಹ್ಯಾಂಡಲ್‌ನಲ್ಲಿ ಪೋಸ್ಟ್ ಮಾಡಲಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಸುಳ್ಳು ಸುದ್ದಿ ಮತ್ತು ಆಕ್ಷೇಪಾರ್ಹ ಮತ್ತು ಕೋಮು ದ್ವೇಷವನ್ನು ಹರಡಲು ಬಳಸಲಾಗಿದೆ ಎಂದು ಪೊಲೀಸರು ಆರೋಪಿಸಿದ್ದಾರೆ. ಸೌಹಾರ್ದತೆಗೆ ಧಕ್ಕೆ ಉಂಟು ಮಾಡಲು ಯತ್ನಿಸಿದ ಆರೋಪದ ಮೇಲೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಡಿಯೋ ಘಟನೆಯು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಮತ್ತು ಪ್ರಮುಖ ಪ್ರತಿಪಕ್ಷವಾದ ಬಿಜೆಪಿ ನಡುವೆ ಮಾತಿನ ಸಮರಕ್ಕೆ ಕಾರಣವಾಯಿತು. ಈ ವಿಚಾರದಲ್ಲಿ ಸಿದ್ದರಾಮಯ್ಯ ಸರಕಾರ ಸಕಾಲದಲ್ಲಿ ಕ್ರಮ ಕೈಗೊಂಡಿಲ್ಲ ಎಂದು ಬಿಜೆಪಿ ಆರೋಪಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com