ಭೀಕರ ಬೇಸಿಗೆ; ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ನೀರು ಬಿಡುವಂತೆ ಮಹಾರಾಷ್ಟ್ರ ಸಿಎಂಗೆ ಸಿದ್ದರಾಮಯ್ಯ ಒತ್ತಾಯ
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ರಾಜ್ಯದ ಕುಡಿಯುವ ನೀರಿನ ಅಗತ್ಯತೆಗಾಗಿ ವರ್ನಾ/ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಮತ್ತು ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ ನೀರು ಬಿಡುವಂತೆ ಮನವಿ ಮಾಡಿದ್ದಾರೆ.
Published: 01st June 2023 10:55 AM | Last Updated: 01st June 2023 10:55 AM | A+A A-

ಸಿದ್ದರಾಮಯ್ಯ
ಬೆಂಗಳೂರು: ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರಿಗೆ ರಾಜ್ಯದ ಕುಡಿಯುವ ನೀರಿನ ಅಗತ್ಯತೆಗಾಗಿ ವರ್ನಾ/ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಮತ್ತು ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ ನೀರು ಬಿಡುವಂತೆ ಮನವಿ ಮಾಡಿದ್ದಾರೆ.
ಶಿಂಧೆ ಅಲ್ಲದೆ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೂ ಬರೆದಿರುವ ಪತ್ರದಲ್ಲಿ ಸಿದ್ದರಾಮಯ್ಯ ಅವರು, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬೇಸಿಗೆಯ ತೀವ್ರ ಪರಿಸ್ಥಿತಿಯನ್ನು ಉಲ್ಲೇಖಿಸಿದ್ದಾರೆ.
ತೀವ್ರ ಬೇಸಿಗೆಯಿಂದಾಗಿ ಈ ವರ್ಷದ ಮಾರ್ಚ್ ತಿಂಗಳಿನಿಂದ ಉತ್ತರ ಕರ್ನಾಟಕದ ಜಿಲ್ಲೆಗಳಾದ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಕುಡಿಯುವ ನೀರಿನ ತೀವ್ರ ಕೊರತೆಯನ್ನು ಎದುರಿಸುತ್ತಿವೆ ಎಂದು ಮುಖ್ಯಮಂತ್ರಿ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
ಕರ್ನಾಟಕ ಸರ್ಕಾರವು ಈ ಹಿಂದೆ ಮಾನವ ಮತ್ತು ಜಾನುವಾರುಗಳ ಕುಡಿಯುವ ನೀರಿನ ಅಗತ್ಯವನ್ನು ಪೂರೈಸಲು ವರ್ನಾ/ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಮೂರು ಟಿಎಂಸಿ ಮತ್ತು ಉಜ್ಜನಿ ಜಲಾಶಯದಿಂದ ಭೀಮಾ ನದಿಗೆ ಮೂರು ಟಿಎಂಸಿ ನೀರು ನೀಡುವಂತೆ ಮನವಿ ಮಾಡಿತ್ತು.
ಅದರಂತೆ ಮೇ ತಿಂಗಳ ಮೊದಲ ಹದಿನೈದು ದಿನಗಳಲ್ಲಿ ಮಹಾರಾಷ್ಟ್ರ ಸರ್ಕಾರ ಕೃಷ್ಣಾ ನದಿಗೆ ಒಂದು ಟಿಎಂಸಿ ನೀರು ಬಿಡುಗಡೆ ಮಾಡಿತ್ತು. ಈ ನಿಟ್ಟಿನಲ್ಲಿ ಸಿದ್ದರಾಮಯ್ಯ ಮಹಾರಾಷ್ಟ್ರ ಸರ್ಕಾರಕ್ಕೆ ಧನ್ಯವಾದ ತಿಳಿಸಿದ್ದಾರೆ.
ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ತೀವ್ರ ಬೇಸಿಗೆ ಪರಿಸ್ಥಿತಿ ಇರುವಾಗ ಮುಂಗಾರು ಇನ್ನೂ ಪ್ರಾರಂಭವಾಗಿಲ್ಲ. ಜನರು ಮತ್ತು ಜಾನುವಾರುಗಳಿಗೆ ಗೃಹಬಳಕೆಗೆ ನೀರಿನ ಅಗತ್ಯವಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಕುಡಿಯುವ ನೀರಿನ ಅಗತ್ಯತೆ ಪೂರೈಸಲು ವರ್ನಾ/ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ ಎರಡು ಟಿಎಂಸಿ ಹಾಗೂ ಉಜ್ಜನಿ ಜಲಾಶಯದಿಂದ ಭೀಮಾ ಜಲಾಶಯಕ್ಕೆ ಮೂರು ಟಿಎಂಸಿ ನೀರು ಬಿಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ಸಿದ್ದರಾಮಯ್ಯ ಪತ್ರದಲ್ಲಿ ಕೋರಿದ್ದಾರೆ.