ವಿಪಕ್ಷ ನಾಯಕನ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ತೀವ್ರ ಪೈಪೋಟಿ; ಬಿಎಸ್'ವೈ ಭೇಟಿಯಾದ ಮಾಜಿ ಸಿಎಂ ಬೊಮ್ಮಾಯಿ

ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಪತನವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ವಿಧಾನಸಭಾ ಚುನಾವಣೆಯಲ್ಲಿ ದೊಡ್ಡ ಸೋಲು ಅನುಭವಿಸಿದ ಬಳಿಕ ಬಿಜೆಪಿಯಲ್ಲಿ ವಿರೋಧ ಪಕ್ಷದ ನಾಯಕ ಯಾರುಗುತ್ತಾರೆಂಬ ಚರ್ಚೆ ಜೋರಾಗಿದೆ.
ಯಡಿಯೂರಪ್ಪ ಭೇಟಿಯಾಗಿ ಮಾತುಕತೆ ನಡೆಸುತ್ತಿರುವ ಮಾಜಿ ಸಿಎಂ ಬೊಮ್ಮಾಯಿ.
ಯಡಿಯೂರಪ್ಪ ಭೇಟಿಯಾಗಿ ಮಾತುಕತೆ ನಡೆಸುತ್ತಿರುವ ಮಾಜಿ ಸಿಎಂ ಬೊಮ್ಮಾಯಿ.

ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಪತನವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್‌ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ. ವಿಧಾನಸಭಾ ಚುನಾವಣೆಯಲ್ಲಿ ದೊಡ್ಡ ಸೋಲು ಅನುಭವಿಸಿದ ಬಳಿಕ ಬಿಜೆಪಿಯಲ್ಲಿ ವಿರೋಧ ಪಕ್ಷದ ನಾಯಕ ಯಾರುಗುತ್ತಾರೆಂಬ ಚರ್ಚೆ ಜೋರಾಗಿದೆ. ಅಲ್ಲದೇ ವಿಪಕ್ಷ ನಾಯಕನ ಸ್ಥಾನ ಪಡೆಯಲು ರಾಜ್ಯ ಬಿಜೆಪಿಯಲ್ಲಿ ಭಾರೀ ಪೈಪೋಟಿ ನಡೆಯುತ್ತಿರುವುದೂ ಕಂಡುಬಂದಿದೆ.

ಈ ನಡುವಲ್ಲೇ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬಿಜೆಪಿ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದು, ವಿಪಕ್ಷ ನಾಯಕ ಸ್ಥಾನ ಸೇರಿದಂತೆ ರಾಜ್ಯ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಿದ್ದಾರೆಂದು ತಿಳಿದುಬಂದಿದೆ.

ಈಗಾಗಲೇ ಬಿಜೆಪಿಯ ರಾಷ್ಟ್ರೀಯ ನಾಯಕರು ಬಿಜೆಪಿ ಶಾಸಕರ ಜೊತೆ ಅನೌಪಚಾರಿಕ ಸಭೆ ನಡೆಸಿ ಅಭಿಪ್ರಾಯವನ್ನು ಕಲೆಹಾಕುತ್ತಿದ್ದಾರೆ. ಆದರೆ, ಅಂತಿಮ ನಿರ್ಧಾರವನ್ನು ಜುಲೈನಲ್ಲಿ ನಡೆಯುವ ಬಜೆಟ್‌ ಅಧಿವೇಶನಕ್ಕೂ ಮುನ್ನ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ಬಿಜೆಪಿಯ ಮೂಲಗಳು ತಿಳಿಸಿವೆ. ಆದರೆ, ವಿಪಕ್ಷ ನಾಯಕರ ಸ್ಥಾನಕ್ಕೆ ಪೈಪೋಟಿ ಹೆಚ್ಚಿರುವುದು ಬಿಜೆಪಿ ವರಿಷ್ಠರ ತಲೆನೋವಿಗೆ ಕಾರಣವಾಗಿದೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಡಿಸಿಎಂ ಆರ್‌ ಅಶೋಕ್‌, ಮಾಜಿ ಸಚಿವ ಸುನೀಲ್‌ ಕುಮಾರ್‌ ಹಾಗೂ ಹಿರಿಯ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿಪಕ್ಷ ನಾಯಕ ಸ್ಥಾನದ ರೇಸ್‌ನಲ್ಲಿ ಮುಂದೆ ಇದ್ದಾರೆ.

ವಿಪಕ್ಷ ನಾಯಕನ ಸ್ಥಾನ ನಿರ್ಣಾಯಕ ಆಗಿರುವುದರಿಂದ ಬಿಜೆಪಿ ಅಳೆದು ತೂಗಿ ನಿರ್ಧಾರವನ್ನು ತೆಗೆದುಕೊಳ್ಳುತ್ತಿದೆ. ಎಕೆಂದರೆ ಕಾಂಗ್ರೆಸ್‌ ಸರ್ಕಾರದ ವೈಫಲ್ಯಗಳು ಹಾಗೂ ತಪ್ಪು ಹೆಜ್ಜೆಗಳನ್ನು ಜನರ ಮುಂದಿಟ್ಟು ಪ್ರತಿಯೊಂದು ಸಿಕ್ಕ ಅವಕಾಶಗಳನ್ನು ಯಶಸ್ವಿಯಾಗಿ ಬಳಸಿಕೊಳ್ಳಲು ವಿಪಕ್ಷ ನಾಯಕನ ಸ್ಥಾನ ಬಿಜೆಪಿಗೆ ಪ್ರಮುಖವಾಗಿದೆ.

ವಿಪಕ್ಷ ದಾಳಿಯನ್ನು ಸಮರ್ಥವಾಗಿ ಎದುರಿಸಲು ಕಾಂಗ್ರೆಸ್‌ನಲ್ಲಿ ಹಲವು ಹಿರಿಯ ಶಾಸಕರಿರುವ ಕಾರಣಕ್ಕಾಗಿ ಬಿಜೆಪಿಯಲ್ಲಿಯೂ ಅಂತಹದ್ದೇ ನಾಯಕನನ್ನು ಆಯ್ಕೆ ಮಾಡಲು ನಾಯಕರು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com