ರಾಯಚೂರು: ಮುಸ್ಲಿಂ ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಪೋಸ್ಟ್; ಆರ್ ಎಸ್ ಎಸ್ ಕಾರ್ಯಕರ್ತನ ಬಂಧನ
ಮುಸ್ಲಿಂ ಮಹಿಳೆಯರ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ ಆರೋಪದ ಮೇಲೆ ಪೊಲೀಸರು ಆರ್‌ಎಸ್‌ಎಸ್ ಕಾರ್ಯಕರ್ತನನ್ನು ಬಂಧಿಸಿದ್ದಾರೆ.
Published: 02nd June 2023 10:41 AM | Last Updated: 02nd June 2023 08:09 PM | A+A A-

ಸಾಂದರ್ಭಿಕ ಚಿತ್ರ
ರಾಯಚೂರು: ಮುಸ್ಲಿಂ ಮಹಿಳೆಯರ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ ಆರೋಪದ ಮೇಲೆ ಪೊಲೀಸರು ಆರ್‌ಎಸ್‌ಎಸ್ ಕಾರ್ಯಕರ್ತನನ್ನು ಬಂಧಿಸಿದ್ದಾರೆ.
ಪೋಸ್ಟ್ ವೈರಲ್ ಆದ ನಂತರ ಮುಸ್ಲಿಂ ಸಮುದಾಯದವರು ಗುರುವಾರ ಪ್ರತಿಭಟನೆ ನಡೆಸಿ ಅವರನ್ನು ಬಂಧಿಸುವಂತೆ ಒತ್ತಾಯಿಸಿದರು. ಪ್ರತಿಭಟನಾಕಾರರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಆರೋಪಿಗಳ ಬಂಧನಕ್ಕೆ 24 ಗಂಟೆಗಳ ಗಡುವು ನೀಡಿದರು.
ಬಂಧಿತ ಆರ್‌ಎಸ್‌ಎಸ್ ಕಾರ್ಯಕರ್ತನನ್ನು ರಾಜು ತಂಬಾಕ್ ಎಂದು ಗುರುತಿಸಲಾಗಿದೆ. ಆರೋಪಿಯು ಮುಸ್ಲಿಂ ಮಹಿಳೆಯರನ್ನು "ಮಕ್ಕಳನ್ನು ಉತ್ಪಾದಿಸುವ ಯಂತ್ರಗಳು" ಎಂದು ಬಿಂಬಿಸುವ ಪೋಸ್ಟ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ ಹಾಕಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ಮಂಗಳೂರು: ಸೋಮೇಶ್ವರ ಬೀಚ್ ನಲ್ಲಿ ನೈತಿಕ ಪೊಲೀಸ್ ಗಿರಿ; ಅಪ್ರಾಪ್ತ ಸೇರಿದಂತೆ ಐದು ಮಂದಿ ಬಂಧನ
ಆತನ ಪೋಸ್ಟ್ ವೈರಲ್ ಆಗಿದ್ದು, ಮುಸ್ಲಿಂ ಸಮುದಾಯವು ರಾಜು ತಂಬಾಕ್ ತಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾನೆ ಎಂದು ಆರೋಪಿಸಿದ್ದು, ಆತನನ್ನು ಕೂಡಲೇ ಬಂಧಿಸುವಂತೆ ಲಿಂಗಸೂಗೂರು ಪೊಲೀಸರನ್ನು ಒತ್ತಾಯಿಸಿದ್ದಾರೆ. ಘಟನೆಯಿಂದ ಲಿಂಗಸೂಗೂರು ಪಟ್ಟಣದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿತ್ತು. ಆದರೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಸ್ಥಳದಲ್ಲಿ ಬಿಗಿ ಬಂದೋಬಸ್ತ್ ಮಾಡಿದ್ದಾರೆ.