ಅಪಾರ್ಟ್‌ಮೆಂಟ್‌ಗಾಗಿ ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ನಿರ್ಮಾಣ: ಅಧಿಕಾರಿಗಳ ಅಮಾನತಿಗೆ ಡಿಕೆ ಶಿವಕುಮಾರ್ ಆದೇಶ
ಪ್ರಭಾವಿ ಅಪಾರ್ಟ್ಮೆಂಟ್ ಮಾಲೀಕರಿಗೆ ಅನುಕೂಲ ಮಾಡಿಕೊಡಲು ಹೊಸಕೆರೆಹಳ್ಳಿಯಲ್ಲಿ ಕೆರೆ ಮಧ್ಯೆ ರಸ್ತೆ ನಿರ್ಮಾಣ ಯೋಜನೆ ರೂಪಿಸಿದ, ಅನುಷ್ಠಾನಕ್ಕೆ ತಂದ ಎಲ್ಲ ಅಧಿಕಾರಿಗಳು, ಇಂಜಿನಿಯರ್ಗಳನ್ನು ಇವತ್ತು ಸಂಜೆ ಒಳಗೆ ಸೇವೆಯಿಂದ ಅಮಾನತು ಮಾಡುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಆದೇಶಿಸಿದ್ದಾರೆ.
Published: 05th June 2023 04:02 PM | Last Updated: 05th June 2023 06:57 PM | A+A A-

ಡಿ.ಕೆ ಶಿವಕುಮಾರ್
ಬೆಂಗಳೂರು: ಪ್ರಭಾವಿ ಅಪಾರ್ಟ್ಮೆಂಟ್ ಮಾಲೀಕರಿಗೆ ಅನುಕೂಲ ಮಾಡಿಕೊಡಲು ಹೊಸಕೆರೆಹಳ್ಳಿಯಲ್ಲಿ ಕೆರೆ ಮಧ್ಯೆ ರಸ್ತೆ ನಿರ್ಮಾಣ ಯೋಜನೆ ರೂಪಿಸಿದ, ಅನುಷ್ಠಾನಕ್ಕೆ ತಂದ ಎಲ್ಲ ಅಧಿಕಾರಿಗಳು, ಇಂಜಿನಿಯರ್ಗಳನ್ನು ಇವತ್ತು ಸಂಜೆ ಒಳಗೆ ಸೇವೆಯಿಂದ ಅಮಾನತು ಮಾಡುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಬಿಬಿಎಂಪಿ ಕಮಿಷನರ್ ತುಷಾರ್ ಗಿರಿನಾಥ್ ಅವರಿಗೆ ಸೂಚನೆ ನೀಡಿದ್ದಾರೆ.
ಬೆಂಗಳೂರು ಅಭಿವೃದ್ಧಿ ಕುರಿತು ನಡೆಸುತ್ತಿರುವ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, 'ಈ ಕೆರೆ ಮಧ್ಯೆ ರಸ್ತೆ ನಿರ್ಮಾಣ ಮಾಡುವ ಸಲಹೆ ಕೊಟ್ಟವರು ಯಾರು? ಯೋಜನೆ ರೂಪಿಸಿದವರು ಯಾರು? ಅನುಷ್ಠಾನಕ್ಕೆ ತಂದವರು ಯಾರು? ಯಾಕಾಗಿ ಇದನ್ನು ಮಾಡಿದಿರಿ? ಯಾರಿಗೆ ಅನುಕೂಲ ಮಾಡಿಕೊಡಲು ಮಾಡಿದಿರಿ? ಯಾರೆಲ್ಲ ಇದರಲ್ಲಿ ಭಾಗಿಯಾಗಿದ್ದೀರಿ' ಎಂದು ಪ್ರಶ್ನಿಸಿದರು.
ಅಧಿಕಾರಿಗಳು ಇದಕ್ಕೆ ಉತ್ತರಿಸಲು ತಡಬಡಾಯಿಸಿದರು. ತಕ್ಷಣವೇ ಉಪಮುಖ್ಯಮಂತ್ರಿಗಳು ಹೊಸಕೆರೆಹಳ್ಳಿ ಕೆರೆ ಭಾಗ ಮಾಡಿ ರಸ್ತೆ ನಿರ್ಮಾಣ ಮಾಡಿದ ಅಧಿಕಾರಿಗಳನ್ನು ಅಮಾನತು ಮಾಡುವಂತೆ ಸೂಚನೆ ನೀಡಿದ್ಧಾರೆ.