ರೈತರಿಂದ ಖರೀದಿಸುವ ಹಾಲಿನ ದರ ಕಡಿತಗೊಳಿಸದಿರಿ: ಕೆಎಂಎಫ್'ಗೆ ಸಿಎಂ ಸಿದ್ದರಾಮಯ್ಯ ಸೂಚನೆ
ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರದಲ್ಲಿ ಯಾವುದೇ ಕಡಿತ ಮಾಡಬಾರದು ಎಂದು ಕರ್ನಾಟಕ ಹಾಲು ಮಹಾ ಮಂಡಳ (ಕೆಎಂಎಫ್)ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
Published: 06th June 2023 08:45 AM | Last Updated: 06th June 2023 07:58 PM | A+A A-

ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರದಲ್ಲಿ ಯಾವುದೇ ಕಡಿತ ಮಾಡಬಾರದು ಎಂದು ಕರ್ನಾಟಕ ಹಾಲು ಮಹಾ ಮಂಡಳ (ಕೆಎಂಎಫ್)ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಇತ್ತೀಚಿಗೆ ಮನ್ಮುಲ್ ಮತ್ತು ಬಮುಲ್ ರೈತರಿಗೆ ನೀಡುತ್ತಿದ್ದ ಹಾಲಿನ ಪ್ರೋತ್ಸಾಹಧನವನ್ನು ಕಡಿಮೆ ಮಾಡಿತ್ತು. ಈ ಕುರಿತು ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗಿದ್ದು, ಮಾಹಿತಿ ತಿಳಿದ ಮುಖ್ಯಮಂತ್ರಿಗಳು ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಸಭೆ ನಡೆಸಿ ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರವನ್ನು ಕಡಿತ ಮಾಡದಂತೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.
ಏಕಾಏಕಿ ದರ ಕಡಿತ ಮಾಡುವಂತಿಲ್ಲ. ಈ ಕುರಿತು ಸರ್ಕಾರದ ಜೊತೆ ಚರ್ಚಿಸಬೇಕು. ಹಾಲಿನ ಪ್ರೋತ್ಸಾಹಧನ ಕಡಿತ ಮಾಡಿದರೇ ರೈತರಿಗೆ ತೊಂದರೆಯಾಗುತ್ತೆ. ಈ ಅಂಶವನ್ನು ಗಮನದಲ್ಲಿ ಇರಿಸಿಕೊಳ್ಳಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆಂದು ವರದಿಗಳು ತಿಳಿಸಿವೆ.
ಇದನ್ನೂ ಓದಿ: ಕರ್ನಾಟಕ ಹಾಲು ಮಹಾಮಂಡಳದ ದರ ಇಳಿಕೆ ನಿರ್ಧಾರ ನಮ್ಮ ಮೇಲೆ ಪರಿಣಾಮ ಬೀರುತ್ತದೆ: ರೈತರ ಅಳಲು
ಬೇಸಿಗೆ ಸಮಯದಲ್ಲಿ ಹಾಲಿನ ಉತ್ಪಾದನೆ ಕಡಿಮೆಯಾದ್ದರಿಂದ ಬೆಂಗಳೂರು ಹಾಲು ಉತ್ಪಾದಕರ ಒಕ್ಕೂಟ (ಬಮೂಲ್) ಏಪ್ರಿಲ್ 1ರಿಂದ ಮೇ 31ರವರೆಗೆ ಪ್ರತಿ ಲೀಟರ್ ಹಾಲಿಗೆ ರೂ.2.85 ವಿಶೇಷ ಪ್ರೋತ್ಸಾಹ ಧನ ಘೋಷಿಸಿತ್ತು.
ಇದೀಗ ಒಕ್ಕೂಟದ ವ್ಯಾಪ್ತಿಯ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿ ಹಸಿರು ಮೇವು ಲಭ್ಯವಾಗಿದ್ದು, ಹಾಲಿ ಉತ್ಪಾದನೆ ಹೆಚ್ಚಳವಾಗಿದೆ. ಈ ಕಾರಣಕ್ಕೆ ಪ್ರೋತ್ಸಾಹಧನದಲ್ಲಿ ರೂ.1.50 ಕಡಿತಗೊಳಿಸಿ ಆದೇಶ ಹೊರಡಿಸಲಾಗಿತ್ತು.