ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳ; ಸಂವಿಧಾನದ 9ನೇ ಶೆಡ್ಯೂಲ್ ನಲ್ಲಿ ಸೇರಿಸಲು ಕೇಂದ್ರಕ್ಕೆ ಒತ್ತಾಯ- ಸಿಎಂ ಸಿದ್ದರಾಮಯ್ಯ

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ 9ನೇ ಶೆಡ್ಯೂಲ್‌ ನಲ್ಲಿ ಸೇರಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ 9ನೇ ಶೆಡ್ಯೂಲ್‌ ನಲ್ಲಿ ಸೇರಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ, ಬಿಜೆಪಿ ಸರ್ಕಾರವು ತರಾತುರಿಯಲ್ಲಿ ಮೀಸಲಾತಿ ಹೆಚ್ಚಳ ಮಾಡಿರುವುದು ಚುನಾವಣಾ ಗಿಮಿಕ್‌ ಆಗಿತ್ತು. ಮೀಸಲಾತಿ ಹೆಚ್ಚಳ ಕುರಿತ ಕಾಯ್ದೆ ಜಾರಿಗೊಳಿಸಿದರೂ ಅದನ್ನು ಸಂವಿಧಾನದ 9ನೇ ಶೆಡ್ಯೂಲ್‌ ಗೆ ಸೇರ್ಪಡೆಗೊಳಿಸಲು ಚುನಾವಣೆ ಘೋಷಣೆಯ ಎರಡು ದಿನ ಮೊದಲಷ್ಟೇ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸಿದ್ದರು ಎಂದು ತಿಳಿಸಿದ್ದಾರೆ.

ಹಿಂದುಳಿದ ವರ್ಗಗಳ ಮೀಸಲಾತಿಯಲ್ಲಿ ಹಾಗೂ ಪರಿಶಿಷ್ಟ ಜಾತಿ ಒಳ ಮೀಸಲಾತಿ ಕಲ್ಪಿಸುವ ನೆಪದಲ್ಲಿ ಹಿಂದಿನ ಸರ್ಕಾರ ಗೊಂದಲ ಸೃಷ್ಟಿಸಿದೆ. ಎಲ್ಲ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಒಳ ಮೀಸಲಾತಿ ಕಲ್ಪಿಸುವಂತೆ ತಾವು ನೀಡಿದ್ದ ಸಲಹೆಯನ್ನು ನಿರ್ಲಕ್ಷಿಸಿದ ಪರಿಣಾಮ ವಿವಿಧ ಸಮುದಾಯಗಳ ವಿರೋಧ ಎದುರಿಸುವಂತಾಯಿತು. ಸಾಮಾಜಿಕ ನ್ಯಾಯದ ಕುರಿತು ಬದ್ಧತೆ ಇಲ್ಲದೆ ಹೋದರೆ ಇಂತಹ ಗೊಂದಲಗಳಾಗುತ್ತವೆ ಎಂದಿದ್ದಾರೆ.

ಜನಸಂಘ ಹಾಗೂ ಬಿಜೆಪಿ ಹಿಂದಿನಿಂದಲೂ ಮೀಸಲಾತಿ ವಿರೋಧಿ ನಿಲುವನ್ನೇ ಹೊಂದಿದ್ದವು. ಈಗ ಮೀಸಲಾತಿ ಹೆಚ್ಚಿಸಿರುವುದು ರಾಜಕೀಯ ಗಿಮಿಕ್. ಇಂಥವರ ಕುರಿತು ನಾವು ಎಚ್ಚರದಿಂದಿರಬೇಕು.ಕರ್ನಾಟಕದಲ್ಲಿ ಜನ ಬದಲಾವಣೆ ಬಯಸಿ ಮತ್ತೆ ಕಾಂಗ್ರೆಸ್‌ ಪಕ್ಷಕ್ಕೆ ಅವಕಾಶ ನೀಡಿದ್ದಾರೆ. ಕಾಂಗ್ರೆಸ್‌ ಸರ್ಕಾರ ಯಾವತ್ತೂ ಜಾತ್ಯತೀತ ಪಕ್ಷವಾಗಿದ್ದು, ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ, ಸಾಮಾಜಿಕ ನ್ಯಾಯದ ನಿಲುವಿನಲ್ಲಿ ರಾಜಿ ಇಲ್ಲ. ಕಾಂಗ್ರೆಸ್ ಸರ್ಕಾರವು ಮೀಸಲಾತಿಯಲ್ಲಿನ ಎಲ್ಲ ಗೊಂದಲಗಳನ್ನು ಸರಿಪಡಿಸಲಿದೆ ಎಂದು ಅವರು ಹೇಳಿದ್ದಾರೆ.

ಹಲವು ಶತಮಾನಗಳಿಂದ ಅವಕಾಶ ವಂಚಿತರಾದವರಿಗೆ ಈಗ ಅವಕಾಶ ಒದಗಿಸುವ ಮೂಲಕ ಅಸಮಾನತೆಯನ್ನು ನಿವಾರಿಸಿ ಸಮಾನತೆಯನ್ನು ಕಲ್ಪಿಸಬೇಕಾಗಿದೆ. ಈ ನಿಟ್ಟಿನಲ್ಲಿ ಹಿಂದೆ ನಮ್ಮ ಸರ್ಕಾರ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮೂಲಕ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು 162 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಂಡಿತ್ತು. ಸಮೀಕ್ಷೆಯ ವರದಿಯನ್ನು ಸ್ವೀಕರಿಸಲು ಹಿಂದಿನ ಸರ್ಕಾರಗಳು ಹಿಂದೇಟು ಹಾಕಿದವು. ಇದೀಗ ನಮ್ಮ ಸರ್ಕಾರ ಈ ವರದಿಯನ್ನು ಸ್ವೀಕರಿಸಲಿದ್ದು, ವಸ್ತು ಸ್ಥಿತಿ ಆಧರಿಸಿ, ಜನರಿಗೆ ಶಿಕ್ಷಣ, ಉದ್ಯೋಗ, ಉದ್ಯಮ ಹೀಗೆ ವಿವಿಧ ವಲಯಗಳಲ್ಲಿ ಅಗತ್ಯ ಸೌಲಭ್ಯ ಕಲ್ಪಿಸಲಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ಹಿಂದೆ ನಾವು ಅಧಿಕಾರದಲ್ಲಿದ್ದಾಗ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್‌ ಮೊದಲಾದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದೆವು. ಇದೀಗ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದೇವೆ. ಇದಕ್ಕೆ ಸುಮಾರು 59,000 ಕೋಟಿ ರೂ. ವಾರ್ಷಿಕ ವೆಚ್ಚವಾಗಲಿದೆ. ನಾಡಿನ ಎಲ್ಲಾ ವರ್ಗಗಳ ಜನರ ಕಲ್ಯಾಣ ನಮಗೆ ಮುಖ್ಯ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com