ಗೃಹಲಕ್ಷ್ಮಿ ಯೋಜನೆಗೆ ಮಾರ್ಗಸೂಚಿ ಪ್ರಕಟ: 2000 ರೂ. ಪಡೆಯಲು ಅರ್ಹತೆ ಏನು? ಅರ್ಜಿ ಸಲ್ಲಿಸುವುದು ಹೇಗೆ?
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಎರಡನೇ ಗ್ಯಾರಂಟಿಯಾದ ಗೃಹ ಲಕ್ಷ್ಮೀ ಯೋಜನೆಗೆ ಬುಧವಾರ ಮಾರ್ಗಸೂಚಿ ಪ್ರಕಟಿಸಲಾಗಿದ್ದು, ಮನೆಯ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ...
Published: 07th June 2023 07:52 PM | Last Updated: 07th June 2023 08:04 PM | A+A A-

ಗೃಹಲಕ್ಷ್ಮಿ ಯೋಜನೆಗೆ ಮಾರ್ಗಸೂಚಿ ಪ್ರಕಟ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಎರಡನೇ ಗ್ಯಾರಂಟಿಯಾದ ಗೃಹ ಲಕ್ಷ್ಮೀ ಯೋಜನೆಗೆ ಬುಧವಾರ ಮಾರ್ಗಸೂಚಿ ಪ್ರಕಟಿಸಲಾಗಿದ್ದು, ಮನೆಯ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿಸುತ್ತಿದ್ದರೆ, ಜಿಎಸ್ ಟಿ ರಿಟರ್ನ್ಸ್ ಸಲ್ಲಿಸುವವರು ಈ ಯೋಜನೆಗೆ ಅರ್ಹರಲ್ಲ ಎಂದು ತಿಳಿಸಲಾಗಿದೆ.
ಗೃಹಲಕ್ಷ್ಮಿ ಯೋಜನೆಯಡಿ ಮನೆಯ ಯಜಮಾನಿ 2000 ರೂಪಾಯಿ ಸಹಾಯಧನ ಪಡೆಯಲು ರಾಜ್ಯ ಸರ್ಕಾರ ಹಲವು ಷರತ್ತುಗಳನ್ನು ವಿಧಿಸಿದೆ.
ಪ್ರಮುಖ ಷರತ್ತುಗಳೇನು?
1. ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿಯಾಗಿರುತ್ತಾರೆ.
2. ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಬ್ಬ ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸಲಿದೆ.
3. ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್ ಖಾತೆ ಮತ್ತು ಆಧಾರ ಕಾರ್ಡ್ ಗಳನ್ನು ಜೋಡಣೆ ಮಾಡಬೇಕು.
4. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ಪಾವತಿದಾರರಾಗಿದ್ದಲ್ಲಿ ಸೌಲಭ್ಯ ಸಿಗುವುದಿಲ್ಲ.
5. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿಯು ಜಿಎಸ್‌ಟಿ ರಿಟರ್ನ್ ಸಲ್ಲಿಸುವವರಾಗಿದ್ದಲ್ಲಿ ಈ ಯೋಜನೆಗೆ ಅರ್ಹರಾಗಿರುವುದಿಲ್ಲ.
ಇದನ್ನು ಓದಿ: 'ಗೃಹಜ್ಯೋತಿ' ಯೋಜನೆ ಆಗಸ್ಟ್ 1 ರಿಂದ ಜಾರಿ: ಯಾರಿಗೆ ಲಭ್ಯ, ಅರ್ಜಿ ಸಲ್ಲಿಕೆ ವಿಧಾನ ಹೇಗೆ? ಇಲ್ಲಿದೆ ವಿವರ...
ಅರ್ಜಿ ಸಲ್ಲಿಸುವುದೇಕೆ?
ಈ ಯೋಜನೆಯ ಫಲಾನುಭವಿಗಳು ಜೂನ್ 15 ರಿಂದ ಜುಲೈ 15 ರವರೆಗೆ ಅರ್ಜಿ ಸಲ್ಲಿಸಬೇಕು. ಆ ನಂತರ ಜುಲೈ 15 ರಿಂದ ಫಲಾನುಭವಿಗಳ ಆಯ್ಕೆ ಮಾಡಲಾಗುತ್ತದೆ. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ 15 ರಂದು ಅವರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲಾಗುತ್ತದೆ. ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ ಮೂಲಕವಾಗಲಿ ಅಥವಾ ಭೌತಿಕವಾಗಿಯಾಗಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.