ಆರ್‌ಎಸ್‌ಎಸ್ ಸಂಸ್ಥಾಪಕ ಹೆಡಗೇವಾರ್ ಅಧ್ಯಾಯ ಕೈಬಿಡಲು ಸರ್ಕಾರ ನಿರ್ಧಾರ!

ಕಳೆದ ಶೈಕ್ಷಣಿಕ ವರ್ಷದಲ್ಲಿ ರಾಜ್ಯ ಪಠ್ಯಕ್ರಮದಲ್ಲಿ ಸೇರಿಸಲಾಗಿದ್ದ ಆರ್‌ಎಸ್‌ಎಸ್ ಸಂಸ್ಥಾಪಕ ಹೆಡಗೇವಾರ್ ಅವರ ಕುರಿತ ಅಧ್ಯಾಯವನ್ನು ಕೈಬಿಡಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕಳೆದ ಶೈಕ್ಷಣಿಕ ವರ್ಷದಲ್ಲಿ ರಾಜ್ಯ ಪಠ್ಯಕ್ರಮದಲ್ಲಿ ಸೇರಿಸಲಾಗಿದ್ದ ಆರ್‌ಎಸ್‌ಎಸ್ ಸಂಸ್ಥಾಪಕ ಹೆಡಗೇವಾರ್ ಅವರ ಕುರಿತ ಅಧ್ಯಾಯವನ್ನು ಕೈಬಿಡಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಮಂಗಳವಾರ ನಡೆದ ಶೈಕ್ಷಣಿಕ ಸುಧಾರಣೆಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಸಭೆ ಬಳಿಕ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಹಾಗೂ ಮಧು ಬಂಗಾರಪ್ಪ ಅವರು, ಹಿಂದಿನ ಬಿಜೆಪಿ ಸರ್ಕಾರವು ಶಾಲಾ ಪಠ್ಯಪುಸ್ತಕಗಳನ್ನು ಪರಿಷ್ಕರಿಸುವಾಗ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ಜಾರಿಗೊಳಿಸುವಾಗ ಮಾಡಿದ ಬದಲಾವಣೆಗಳನ್ನು ರದ್ದುಗೊಳಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.

ಸಭೆಯ ಬಳಿಕ ಅಧಿಕಾರಗಳೊಂದಿಗೆ ಮಾತುಕತೆ ನಡೆಸಿದ ಸಿದ್ದರಾಮಯ್ಯ ಅವರು, ಬಿಜೆಪಿ ಸರ್ಕಾರವು ಪಠ್ಯಪುಸ್ತಕಗಳಲ್ಲಿ ಸೇರಿಸಿರುವ ಅಧ್ಯಾಯಗಳನ್ನು ಅಧ್ಯಯನ ಮಾಡಲು ಮತ್ತು ಪರಿಷ್ಕರಿಸಲು ಸಮಿತಿಯನ್ನು ರಚಿಸುವಂತೆ ಸೂಚಿಸಿದರು ಎಂದು ಮೂಲಗಳು ತಿಳಿಸಿವೆ.

ಶಿಕ್ಷಣ ಇಲಾಖೆಯ ಮೂಲಗಳ ಪ್ರಕಾರ, ಪರಿಷ್ಕರಣೆ ಕುರಿತು ಶೀಘ್ರದಲ್ಲೇ ಸುತ್ತೋಲೆ ಹೊರಡಿಸಲು ಸರ್ಕಾರ ನಿರ್ಧರಿಸಿದೆ. ಆದರೆ ಈಗಾಗಲೇ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ವಿತರಿಸಿರುವುದರಿಂದ ಪರಿಷ್ಕರಣೆ ಸಾಧ್ಯವಾಗಿಲ್ಲ. ಹೀಗಾಗಿ ಆ ಪಾಠಗಳನ್ನು ಕೈಬಿಡುವಂತೆ ಶಿಕ್ಷಕರಿಗೆ ಸೂಚಿಸುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

2022-23 ಶೈಕ್ಷಣಿಕ ವರ್ಷಕ್ಕೆ ಮುಂಚಿತವಾಗಿ, ರಾಜ್ಯ ಪಠ್ಯಕ್ರಮದ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲಾಗಿತ್ತು. 10ನೇ ತರಗತಿಯ ಕನ್ನಡ ಪಠ್ಯಪುಸ್ತಕದಲ್ಲಿ ಆರ್‌ಎಸ್‌ಎಸ್ ಸಂಸ್ಥಾಪಕರ ಕುರಿತ ಅಧ್ಯಾಯವನ್ನು ಸೇರಿಸಲಾಗಿತ್ತು. ಇದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು.

ಬಿಜೆಪಿ ಸರ್ಕಾರವು ಶಾಲಾ ಹಂತದಲ್ಲಿ ಶಿಕ್ಷಣದ "ಕೇಸರಿಕರಣ"ವನ್ನು ಪ್ರೋತ್ಸಾಹಿಸುತ್ತಿದೆ ಎಂದು ಆರೋಪಿಸಿ ಆಗಿನ ಪ್ರತಿಪಕ್ಷ ಕಾಂಗ್ರೆಸ್ ಈ ಕ್ರಮವನ್ನು ಬಲವಾಗಿ ಟೀಕಿಸಿತ್ತು

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com