
ಸಾಂದರ್ಭಿಕ ಚಿತ್ರ
ದಾವಣಗೆರೆ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಇಬ್ಬರು ರೈತರು ಸಾವು ಕಂಡಿರುವ ಘಟನೆ ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕಿನ ಅಣಬೂರು ಗೊಲ್ಲರಹಟ್ಟಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಕಾಟಲಿಂಗಪ್ಪ ಮತ್ತು ರಾಜಪ್ಪ ಮೃತ ರೈತರು. ಹೊಲದಲ್ಲಿ ಬಿತ್ತನೆಗೆ ತೆರಳಿದ್ದ ಇವರು, ಮಳೆಯಿಂದ ಆಶ್ರಯ ಪಡೆಯಲು ಮರದ ಕೆಳಗೆ ನಿಂತಿದ್ದ ವೇಳೆ ಸಿಡಿಲು ಬಡಿದು ಈ ದುರಂತ ನಡೆದಿದೆ.
ಜಗಳೂರು ಶಾಸಕ ಬಿ.ದೇವೆಂದ್ರಪ್ಪ, ತಹಶೀಲ್ದಾರ್ ಸಂತೋಷ್ ಕುಮಾರ್ ಘಟನಾ ಸ್ಥಳಕ್ಕೆ ಆಗಮಿಸಿ ಮೃತರ ಕುಟುಂಬಕ್ಕೆ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಿದರು.