NCCF, ನಾಫೆಡ್, ಕೇಂದ್ರೀಯ ಭಂಡಾರಗಳಿಂದ ಅಕ್ಕಿ ಪಡೆಯಲು ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ 'ಅನ್ನಭಾಗ್ಯ ಯೋಜನೆ' ರಾಜ್ಯ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದ್ದು, ಕೇಂದ್ರ ಸರ್ಕಾರದ ಅಸಹಕಾರದ ನಡುವೆ ಯೋಜನೆ ಜಾರಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ಕಾಂಗ್ರೆಸ್ ಗ್ಯಾರಂಟಿಗಳಲ್ಲಿ ಒಂದಾದ 'ಅನ್ನಭಾಗ್ಯ ಯೋಜನೆ' ರಾಜ್ಯ ಸರ್ಕಾರಕ್ಕೆ ಸವಾಲಾಗಿ ಪರಿಣಮಿಸಿದ್ದು, ಕೇಂದ್ರ ಸರ್ಕಾರದ ಅಸಹಕಾರದ ನಡುವೆ ಯೋಜನೆ ಜಾರಿ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ನ್ಯಾಷನಲ್ ಕೋ-ಆಪರೇಟಿವ್ ಕನ್ಸೂಮರ್ಸ್ ಫೆಡರೇಷನ್ (ಎನ್ ಸಿ ಸಿಎಫ್), ನ್ಯಾಷನಲ್ ಅಗ್ರಿಕಲ್ಚರಲ್ ಕೋ-ಆಪರೇಟಿವ್ ಮಾರ್ಕೆಟಿಂಗ್ ಫೆಡರೇಷನ್ (ನಾಫೆಡ್) ಹಾಗೂ  ಕೇಂದ್ರೀಯ ಭಂಡಾರದಿಂದ ಅಕ್ಕಿ ಪಡೆಯಲು ದರಪಟ್ಟಿ ಕರೆಯಲು ಕ್ರಮ ಕೈಗೊಳ್ಳಲಾಗುವುದಾಗಿ ಅವರು ತಿಳಿಸಿದ್ದಾರೆ. 

ಗೃಹ ಕಚೇರಿ ಕೃಷ್ಣಾದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಂತ್ರಿ,  ಭಾರತೀಯ ಆಹಾರ ಮಂಡಳಿ(ಎಫ್ ಸಿ ಐ) ನಿಂದ 34 ರೂ. ಅಕ್ಕಿ, 2.60  ರೂ. ಸಾಗಾಣಿಕೆ ವೆಚ್ಚ ಸೇರಿ ಒಂದು ಕೆ.ಜಿ. ಅಕ್ಕಿಗೆ ಒಟ್ಟು 36.40 ರೂ. ವೆಚ್ಚ ತಗಲುತ್ತದೆ. ಈ ಮೂರು ಸಂಸ್ಥೆಗಳು ನಮೂದಿಸುವ ದರ, ಸರಬರಾಜು ಮಾಡುವ ಪ್ರಮಾಣಗಳ ವಿವರ ಪಡೆಯಲಾಗುವುದು . ಟೆಂಡರ್ ಮೂಲಕ ಅಕ್ಕಿ ಪಡೆಯಲೂ ಕ್ರಮ ಕೈಗೊಳ್ಳಲಾಗುವುದು ಎಂದರು.

10 ಕೆಜಿ ಅಕ್ಕಿನೀಡಲು ವಾರ್ಷಿಕ 10,092 ಕೋಟಿ ರೂ: ಅನ್ನಭಾಗ್ಯ ಯೋಜನೆಯಡಿ 10 ಕೆಜಿ  ಅಕ್ಕಿ ವಿತರಿಸಲು ಒಂದು ತಿಂಗಳಿಗೆ 840  ಕೋಟಿ ರೂ. ವೆಚ್ಚ ತಗುಲಲಿದೆ. ವರ್ಷಕ್ಕೆ 10,092 ಕೋಟಿ ವೆಚ್ಚವಾಗಲಿದೆ. ಸರ್ಕಾರ ಈ ವೆಚ್ಚವನ್ನು ಭರಿಸಿ ಅಕ್ಕಿಯನ್ನು ವಿತರಿಸಲು ಸಿದ್ಧವಿದೆ. ಅಕ್ಕಿಯ ದಾಸ್ತಾನು ಲಭ್ಯವಿದ್ದರೂ ಕೇಂದ್ರ ಸರ್ಕಾರದವರು ಅಕ್ಕಿ ನೀಡಲು ಒಪ್ಪುತ್ತಿಲ್ಲ ಎಂದರು. 

ರಾಗಿ, ಜೋಳ ವಿತರಣೆ ಸುಳಿವು:  ರಾಜ್ಯ ಬಿಜೆಪಿ ಪಕ್ಷದವರು ರಾಜ್ಯದ ಬಡವರಿಗೆ ಅನುಕೂಲವಾಗಲು ಅಕ್ಕಿಯನ್ನು ವಿತರಿಸುವಂತೆ ಕೇಂದ್ರ ಸರ್ಕಾರವನ್ನು ಮನವಿ ಮಾಡಬಹುದಲ್ಲ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು, ರಾಜ್ಯದಲ್ಲಿ ರಾಗಿ, ಜೋಳವನ್ನು 6 ತಿಂಗಳವರೆಗೆ ತಲಾ 2 ಕೆಜಿ ಕೊಡುವಷ್ಟು ಮಾತ್ರ ದಾಸ್ತಾನು ಲಭ್ಯವಿದೆ. ಹಳೇ ಮೈಸೂರು ಭಾಗದ ಜನರಿಗೆ 2 ಕೆಜಿ ರಾಗಿ ಹಾಗೂ ಹೈದ್ರಾಬಾದ್ ಕರ್ನಾಟಕ ಹಾಗೂ ಮುಂಬೈ ಕರ್ನಾಟಕದ ಭಾಗದ ಜನರಿಗೆ 2 ಕೆಜಿ ಜೋಳ ನೀಡಬಹುದು. ಇನ್ನುಳಿದ 3 ಕೆಜಿ ಅಕ್ಕಿಯನ್ನು ರಾಜ್ಯದ ಜನರಿಗೆ ನೀಡಬೇಕಾಗುತ್ತದೆ ಎಂದು ಅವರು ತಿಳಿಸಿದರು. 

ಪಂಜಾಬ್ ಸರ್ಕಾರದೊಂದಿಗೆ ಚರ್ಚೆ: ಪಂಜಾಬ್ ಸರ್ಕಾರ ಕರ್ನಾಟಕಕ್ಕೆ ಅಕ್ಕಿ ಸರಬರಾಜು ಮಾಡಲು ಸಿದ್ದವಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಪಂಜಾಬ್ ನಿಂದ ಅಕ್ಕಿ ಖರೀದಿ ಬಗ್ಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಚರ್ಚಿಸಿದ್ದಾರೆ. ರಾಜ್ಯ ತಿಳಿಸುವ ದರಕ್ಕೆ ಅಕ್ಕಿ ನೀಡಲು ಪಂಜಾಬ್ ಸರ್ಕಾರದೊಂದಿಗೆ ಮತ್ತೊಮ್ಮೆ ಚರ್ಚಿಸಲಾಗುವುದು ಎಂದರು.

ಬಡವರಿಗಾಗಿ ಅಕ್ಕಿ ನೀಡುವ ಯೋಜನೆಗೆ ತಪ್ಪದೇ ಚಾಲನೆ : ಕೇಂದ್ರ ಸರ್ಕಾರದ ಸಂಸ್ಥೆಗಳಿಂದ ಅಕ್ಕಿ ಪಡೆಯುವವರೆಗೆ ಸರ್ಕಾರದ ಬಳಿ ಸಮಯವಿದೆಯೇ ಎಂಬುದಕ್ಕೆ ಪ್ರತಿಕ್ರಯಿಸಿ, ಜುಲೈ 1 ರಿಂದ ರಾಜ್ಯದ ಜನರಿಗೆ ಅಕ್ಕಿಯನ್ನು ನೀಡಲು ಸರ್ಕಾರ ಪ್ರಮಾಣಿಕವಾಗಿ ಪ್ರಯತ್ನಿಸುತ್ತಿದೆ. ಕೇಂದ್ರ ಸರ್ಕಾರದಲ್ಲಿ ಅಕ್ಕಿಯ ದಾಸ್ತಾನು ಲಭ್ಯವಿದ್ದು, ಅವರು ರಾಜ್ಯಕ್ಕೆ ಅಕ್ಕಿ ನೀಡಲು ಮನಸ್ಸು ಮಾಡಬೇಕಿದೆ. ಎಂಎಸ್ ಪಿ ಮೂಲಕ ಅಕ್ಕಿ ಖರೀದಿಸಬೇಕಾಗಿದೆ. ಬಡವರಿಗೆ ಅಕ್ಕಿ ನೀಡುವ ವಿಷಯದಲ್ಲಿ ಯಾರೇ ಎಷ್ಟೇ ರಾಜಕಾರಣ ಮಾಡಿದರೂ , ನಮ್ಮ ಸರ್ಕಾರ ಅನ್ನಭಾಗ್ಯ ಯೋಜನೆಯನ್ನು ಖಂಡಿತವಾಗಿಯೂ ಜಾರಿಗೊಳಿಸಲಿದೆ ಎಂದು ಅವರು ತಿಳಿಸಿದರು. 

ಕೇಂದ್ರ ಸಹಕರಿಸಬೇಕು: ಸಹಕಾರಿ ಒಕ್ಕೂಟದ ಬಗ್ಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪದೇ ಪದೇ ಹೇಳುತ್ತಾರೆ. ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಕೇಂದ್ರ ಸರ್ಕಾರಕ್ಕೆ ರಾಜ್ಯಗಳಿಂದ ತೆರಿಗೆ ಬರುತ್ತಿರುವುದರಿಂದ ಪ್ರಧಾನಿ ಸಹಕರಿಸಬೇಕು ಎಂದರು.

ಕರ್ನಾಟಕಕ್ಕೆ ನೀರು ಬಿಡಬಾರದೆಂದು ಮಹಾರಾಷ್ಟ್ರದ ರೈತರು ಬ್ಯಾರೇಜ್ ಬಂದ್ ಮಾಡಿ ನಡೆಸುತ್ತಿರುವ ಪ್ರತಿಭಟನೆ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಅಲ್ಲಿನ ರೈತರು ಹಾಗೂ ಮುಖ್ಯಮಂತ್ರಿಗಳೊಂದಿಗೆ ಮಾತನಾಡಲಾಗುವುದು ಎಂದು ಹೇಳಿದರು. ಜಿ.ಎಸ್.ಟಿ ಸಮಿತಿಗೆ ಕೃಷ್ಣಬೈರೇಗೌಡರನ್ನು ಕಳಿಸಲು ಅವಕಾಶವಿದೆ. ಅದಕ್ಕೆ ಅವರು ಅರ್ಹರೂ, ನಮ್ಮಲ್ಲಿ ಯಾವುದೇ ಅಧಿಕಾರಿ ಹಂಚಿಕೆಯ ಗೊಂದಲವಿಲ್ಲ ಎಂದು ಮುಖ್ಯಮಂತ್ರಿ ತಿಳಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com