ಜೈನ ಸಂಪ್ರದಾಯ, ಸರ್ಕಾರಿ ಗೌರವಗಳೊಂದಿಗೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅಂತ್ಯಕ್ರಿಯೆ

ಇಂದು ನಿಧನರಾದ ಶ್ರವಣಬೆಳಗೊಳದ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ (75 ವರ್ಷ) ಅಂತ್ಯಕ್ರಿಯೆಯನ್ನು ಜೈನ ಸಂಪ್ರದಾಯ, ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.
ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ
ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ

ಹಾಸನ: ಇಂದು ನಿಧನರಾದ ಶ್ರವಣಬೆಳಗೊಳದ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ (75 ವರ್ಷ) ಅಂತ್ಯಕ್ರಿಯೆಯನ್ನು ಜೈನ ಸಂಪ್ರದಾಯ, ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಬೆಳ್ಳೂರು ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶರಾಗಿದ್ದರು. ಗಣ್ಯಾತಿಗಣ್ಯರು ಸ್ವಾಮೀಜಿಗೆ ನಮನ ಸಲ್ಲಿಸಿದ್ದು, ಪವಿತ್ರ ಚಂದ್ರಗಿರಿ ಬೆಟ್ಟದಲ್ಲಿ ಇಂದು ಸಾಮೀಜಿಗಳ ಅಂತ್ಯಕ್ರಿಯೆ ನೆರವೇರಿಸಲಾಯಿತು. 

ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳ ಚಿತೆಗೆ ಅಗ್ನಿಸ್ಪರ್ಶ ಮಾಡಲಾಗಿದೆ. ಚಂದ್ರಗಿರಿ ಬೆಟ್ಟದ ತಪ್ಪಲಿನಲ್ಲಿ ಜೈನ ಸಂಪ್ರದಾಯದಂತೆ ಸೂರ್ಯಾಸ್ತಕ್ಕೂ ಮೊದಲು ಸರ್ಕಾರಿ ಗೌರವಗಳೊಂದಿಗೆ ಅಂತ್ಯಸಂಸ್ಕಾರವನ್ನು ನೆರವೇರಿಸಲಾಗಿದೆ.

ಜೈನ ಮಠದ ಸಾವಿರಾರು ಭಕ್ತಾದಿಗಳು ಚಾರೂಕೀರ್ತಿ ಭಟ್ಟಾರಕ ಮಹಾಸ್ವಾಮಿಗಳ ಚಿತೆಗೆ ಅಗ್ನಿಸ್ಪರ್ಶ ಮಾಡಿದ್ದಾರೆ. ಕಳೆದ ಕೆಲವು ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರವಣಬೆಳಗೊಳದ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ (74) ಗುರುವಾರ ವಿಧಿವಶರಾಗಿದ್ದರು. ಬೆಳ್ಳೂರು ಕ್ರಾಸ್‌ನಲ್ಲಿರುವ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಾಗಿದ್ದ ಸ್ವಾಮೀಜಿ ಇಂದು ಮುಂಜಾನೆ ಕೊನೆಯುಸಿರೆಳೆದಿದ್ದರು. 

ಇತಿಹಾಸ ತಜ್ಞರು, ತತ್ವ ಜ್ಞಾನಿಗಳು ಹಾಗೂ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ. 

ಸಿಎಂ ಬೊಮ್ಮಾಯಿ ಸಂತಾಪ
ಶ್ರೀಕ್ಷೇತ್ರ ಶ್ರವಣಬೆಳಗೊಳದ ಪರಮ ಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಗಳು ನಮ್ಮನ್ನಗಲಿದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಪೂಜ್ಯರ ಅಗಲಿಕೆ ನಾಡಿಗೆ ತುಂಬಲಾರದ ನಷ್ಟವಾಗಿದ್ದು, ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಅವರ ಅಪಾರ ಸಂಖ್ಯೆಯ ಭಕ್ತರಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ ಸೂಚಿಸಿದ್ದರು. ಹಾಗೆಯೇ ಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯರ ಅಂತ್ಯಸಂಸ್ಕಾರವನ್ನು ಜೈನ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುವುದು ಎಂದು ಸಿಎಂ ತಿಳಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com