ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳವನ್ನು ಶೆಡ್ಯೂಲ್ 9ಕ್ಕೆ ಸೇರ್ಪಡೆಗೊಳಿಸಿ: ಕೇಂದ್ರಕ್ಕೆ ರಾಜ್ಯ ಸರ್ಕಾರ ಪತ್ರ
ಬೆಂಗಳೂರು: ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳವನ್ನು ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಪತ್ರ ಬರೆದಿದೆ.
ರಾಜ್ಯ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಬಲ್ಲಾ ಅವರಿಗೆ ಪತ್ರ ಬರೆದು ಪ್ರಸ್ತಾವನೆ ಸಲ್ಲಿಸಿದ್ದಾರೆ.
ಆ ಮೂಲಕ ಮೀಸಲಾತಿ ಹೆಚ್ಚಳಕ್ಕೆ ಕಾನೂನು ಬಲ ನೀಡಲು ಶೆಡ್ಯೂಲ್ 9 ಸೇರ್ಪಡೆ ಮಾಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ.
ಫೆ. 9ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಕ್ಯಾನ್ಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಅಧಿನಿಯಮ, 2022 (ಕರ್ನಾಟಕ ಕಾಯ್ದೆ 01 2023) ನ್ನು ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರಕ್ಕೆ ಶಿಫಾರಸು ಮಾಡಲು ತೀರ್ಮಾನಿಸಲಾಗಿತ್ತು. ಮೀಸಲಾತಿ ಹೆಚ್ಚಳದ ಈ ವಿಧೇಯಕಕ್ಕೆ 2023ರ ಜನವರಿ 11ರಂದು ರಾಜ್ಯಪಾಲರಿಂದ ಒಪ್ಪಿಗೆ ಪಡೆಯಲಾಗಿತ್ತು.
ಅದರಂತೆ ರಾಜ್ಯ ಸರ್ಕಾರ ಮೀಸಲಾತಿ ಪ್ರಮಾಣವನ್ನು ಪರಿಶಿಷ್ಟ ಜಾತಿ(ಎಸ್‌ಸಿ)ಗೆ ಶೇ.15ರಿಂದ ಶೇ.17 ಹಾಗೂ ಪರಿಶಿಷ್ಟ ಪಂಗಡ(ಎಸ್‌ಟಿ)ಕ್ಕೆ ಶೇ.3ರಿಂದ ಶೇ.7ಕ್ಕೆ ಹೆಚ್ಚಳ ಮಾಡಿ ಬೆಳಗಾವಿ ಅಧಿವೇಶನದಲ್ಲಿ ವಿಧೇಯಕ ಮಂಡಿಸಿ ಅನುಮೋದನೆ ಪಡೆದಿತ್ತು. ಆದರೆ, ಈ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಕಾನೂನು ಬಲ ನೀಡಲು ಸಂವಿಧಾನದ ಶೆಡ್ಯೂಲ್ 9ಕ್ಕೆ ಸೇರ್ಪಡೆ ಮಾಡಬೇಕಾಗಿತ್ತು. ಈ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ಕೇಂದ್ರಕ್ಕೆ ಶಿಫಾರಸು ಮಾಡಲು ನಿರ್ಧರಿಸಲಾಗಿತ್ತು.
ಇದೀಗ ಸರ್ಕಾರ ಮೀಸಲಾತಿ ಹೆಚ್ಚಳ ಪ್ರಕ್ರಿಯೆಯನ್ನು ಮತ್ತಷ್ಟು ಮುಂದಕ್ಕೆ ತೆಗೆದುಕೊಂಡು ಹೋಗಿದೆ ಮೀಸಲಾತಿ ಹೆಚ್ಚಳ ಸಂಬಂಧ ಶೆಡ್ಯೂಲ್ 9ಕ್ಕೆ ಸೇರಿಸುವಂತೆ ಕೇಂದ್ರಕ್ಕೆ ಮನವಿ ಮಾಡಿಕೊಂಡಿದೆ.
ಪತ್ರದಲ್ಲಿ ರಾಜ್ಯಪಾಲರ ಅಂಕಿತ ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಕ್ಯಾನ್ಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಅಧಿನಿಯಮ 2022ನ್ನು ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರಿಸುವಂತೆ ಕೋರಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ