ಕರ್ನಾಟಕದ ಅಭಿವೃದ್ಧಿಗಾಗಿ ಮತ ಚಲಾಯಿಸಿ: ಮತದಾರರಿಗೆ ಸಿಎಂ ಬೊಮ್ಮಾಯಿ ಮನವಿ

ರಾಜ್ಯದ ಅಭಿವೃದ್ಧಿಗಾಗಿ ಮತಹಕ್ಕು ಚಲಾಯಿಸುವಂತೆ ಮತದಾರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಮನವಿ ಮಾಡಿಕೊಂಡಿದ್ದಾರೆ.
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಅಭಿವೃದ್ಧಿಗಾಗಿ ಮತಹಕ್ಕು ಚಲಾಯಿಸುವಂತೆ ಮತದಾರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಮನವಿ ಮಾಡಿಕೊಂಡಿದ್ದಾರೆ.

ರಾಜ್ಯ ವಿಧಾಸಭಾ ಚುನಾವಣೆಗೆ ಮತದಾನ ಪ್ರಕ್ರಿಯೆ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಮತಹಕ್ಕು ಚಲಾಯಿಸುವುದಕ್ಕೂ ಮುನ್ನ ಮುಖ್ಯಮಂತ್ರಿಗಳು ಹುಬ್ಬಳ್ಳಿಯ ಹನುಮನ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, ಪಕ್ಷದ ಪ್ರಚಾರದ ರೀತಿ ಮತ್ತು ಜನರು ಪ್ರತಿಕ್ರಿಯಿಸಿದ ರೀತಿ ಬಹಳ ಸಂತೋಷವನ್ನು ತಂದಿದೆ ಎಂದು ಹೇಳಿದರು. ಇದೇ ವೇಳೆ  ಕರ್ನಾಟಕ ಅಭಿವೃದ್ಧಿಗಾಗಿ ಮತ ಹಕ್ಕು ಚಲಾಯಿಸುವಂತೆ ಮತದಾರರಲ್ಲಿ ಮನವಿ ಮಾಡಿಕೊಂಡರು.

ಇದೇ ವೇಳೆ ಕಾಂಗ್ರೆಸ್ ನಾಯಕರ ಭ್ರಷ್ಟಾಚಾರ ಆರೋಪಗಳ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್ ನಾಯಕರ ವಿರುದ್ಧವೇ ಸಾಕಷ್ಟು ಭ್ರಷ್ಟಾಚಾರ ಆರೋಪಗಳಿವೆ. ಸಾಕಷ್ಟು ನಾಯಕರು ಜಾಮೀನನ ಮೇಲೆ ಹೊರಗಿದ್ದಾರೆ. ಮಾಜಿ ಸಿಎಂ ಹಾಗೂ ಹಲವು ನಾಯಕರ ವಿರುದ್ಧ 60ಕ್ಕೂ ಹೆಚ್ಚು ಪ್ರಕರಣಗಳು ಲೋಕಾಯುಕ್ತದಲ್ಲಿದೆ. ಭ್ರಷ್ಟಾಚಾರದ ಬಗ್ಗೆ ಏನು ಮಾತನಾಡುತ್ತಾರೆಂದು ಪ್ರಶ್ನಿಸಿದರು. ಮುಖ್ಯಮಂತ್ರಿ ಬೊಮ್ಮಾಯಿಯವರು ಶಿಗ್ಗಾಂವಿ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.

ಈ ನಡುವೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಕುಟುಂಬ ಸಮೇತರಾಗಿ ಶಿಕಾರಿಪುರದ ರಾಘವೇಂದ್ರ ಸ್ವಾಮಿ ಮಠದಲ್ಲಿ ಪೂಜೆ ಸಲ್ಲಿಸಿದರು. ಯಡಿಯೂರಪ್ಪ ಅವರ ಪುತ್ರ ಶಿಕಾರಿಪುರದಿಂದ ಸ್ಪರ್ಧೆಗಿಳಿದಿದ್ದಾರೆ.

ಶಿಕಾರಿಪುರದಲ್ಲಿ ಮತಹಕ್ಕು ಚಲಾಯಿಸಿದ ಬಳಿಕ ಮಾತನಾಡಿದ ಯಡಿಯೂರಪ್ಪ ಅವರು, ಬಿ.ವೈ.ವಿಜಯೇಂದ್ರ 40 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆಯಲಿದ್ದಾರೆ. ಸಂಪೂರ್ಣ ಬಹುಮತ ಪಡೆದು ಸರ್ಕಾರ ರಚಿಸುವ ವಿಶ್ವಾಸವಿದೆ.  ಇದರಲ್ಲಿ ಯಾವುದೇ ಸಂಶಯಗಳಿಲ್ಲ. ಜನರ ಪ್ರತಿಕ್ರಿಯೆ ತುಂಬಾ ಚೆನ್ನಾಗಿದೆ ಎಂದು ಹೇಳಿದ್ದಾರೆ.

ರಾಜ್ಯದ ಪ್ರತೀಯೊಬ್ಬರೂ ಆದಷ್ಟು ಬೇಗ ಮತ ಚಲಾಯಿಸುವಂತೆ ಮನವಿ ಮಾಡಿಕೊಳ್ಳುತ್ತಿದ್ದೇನೆ. ಜನರು ಬಿಜೆಪಿ ಪರವಾಗಿ ಮತ ಚಲಾಯಿಸುತ್ತಾರೆಂಬ ವಿಶ್ವಾಸ ನನಗಿದೆ. ಶೇ.75-80 ಕ್ಕಿಂತ ಹೆಚ್ಚು ಜನರು ಬಿಜೆಪಿಯನ್ನು ಬೆಂಬಲಿಸುತ್ತಾರೆ. ಈ ಬಾರಿ ಬಿಜೆಪಿ 130-135 ಸ್ಥಾನಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಿವೈ ವಿಜಯೇಂದ್ರ ಅವರು ಮಾತನಾಡಿ, ಇದು ನನ್ನ ಮೊದಲ ಚುನಾವಣೆಯಾಗಿದ್ದು, ಪಕ್ಷ ನನಗೆ ಸ್ಪರ್ಧಿಸಲು ಅವಕಾಶ ನೀಡಿರುವುದು ಸಂತಸ ತಂದಿದೆ. ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವುದು ನನ್ನ ಭಾಗ್ಯವಾಗಿದೆ. ಬಿಜೆಪಿ ಬಹುಮತ ಪಡೆಯುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಮೋದಿ ಅವರ ಮ್ಯಾಜಿಕ್ ನಮಗೆ ಸಂಪೂರ್ಣ ಬಹುಮತ ನೀಡಲಿದೆ. ಈ ಚುನಾವಣೆಯಲ್ಲಿ ಕನಿಷ್ಠ 130 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಲಿಂಗಾಯತ ಸಮುದಾಯವಷ್ಟೇ ಅಲ್ಲ, ಎಲ್ಲ ಜಾತಿಯವರೂ ಬಿಜೆಪಿ ಪರವಾಗಿದ್ದಾರೆ. ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲು ಕಾಣಲಿದೆ ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com