ಬಳ್ಳಾರಿಯಲ್ಲಿ ಕಾಂಗ್ರೆಸ್‌–ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ; 10 ಮಂದಿ ಗಾಯ, ನಾಲ್ವರ ಬಂಧನ

ಮತದಾನದ ದಿನವಾದ ಬುಧವಾರ ಬಳ್ಳಾರಿ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಘರ್ಷಣೆಯಲ್ಲಿ 10 ಮಂದಿ ಗಾಯಗೊಂಡಿದ್ದು, ಘಟನೆ ಸಂಬಂಧ ನಾಲ್ವರನ್ನು ಬಂಧನಕ್ಕೊಳಪಡಿಸಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬಳ್ಳಾರಿ: ಮತದಾನದ ದಿನವಾದ ಬುಧವಾರ ಬಳ್ಳಾರಿ ಜಿಲ್ಲೆಯಲ್ಲಿ ನಡೆದ ಎರಡು ಪ್ರತ್ಯೇಕ ಘರ್ಷಣೆಯಲ್ಲಿ 10 ಮಂದಿ ಗಾಯಗೊಂಡಿದ್ದು, ಘಟನೆ ಸಂಬಂಧ ನಾಲ್ವರನ್ನು ಬಂಧನಕ್ಕೊಳಪಡಿಸಲಾಗಿದೆ.

ಬಳ್ಳಾರಿ ಗ್ರಾಮಾಂತರ ಕ್ಷೇತ್ರದ ಸಂಜೀವರಾಯನಕೋಟೆ ಗ್ರಾಮದಲ್ಲಿ ಘರ್ಷಣೆ ನಡೆದಿದ್ದು, ಘಟನೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಸೇರಿದ 10 ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.

ಬಿಜೆಪಿ ಬೆಂಬಲಿಗರು ಮತಗಟ್ಟೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸುತ್ತಿದ್ದಾರೆಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪಿಸಿದ್ದಾರೆ. ಆದರೆ, ಈ ಆರೋಪವನ್ನು ಬಿಜೆಪಿ ನಿರಾಕರಿಸಿದ್ದು, ಇದೇ ಘರ್ಷಣೆಗೆ ಕಾರಣವಾಯಿತು ಎನ್ನಲಾಗಿದೆ. ಘಟನೆಯಲ್ಲಿ 10 ಮಂದಿ ಗಾಯಗೊಂಡಿದ್ದು, ಈ ಪೈಕಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.

ಘಟನೆ ಸಂಬಂಧ ಬಳ್ಳಾರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ನಾಲ್ವರನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ.

ಈ ನಡುವೆ ಸಿರುಗುಪ್ಪ ಪಟ್ಟಣದಲ್ಲಿ ಕೆಲವು ಯುವಕರು ಪಕ್ಷದ ಚಿಹ್ನೆಯನ್ನು ಪ್ರದರ್ಶಿಸಿ ಮತಗಟ್ಟೆಗೆ ಪ್ರವೇಶಿಸಿದ್ದು, ಈ ವೇಳೆ ಪಕ್ಷದ ಚಿಹ್ನೆ ಪ್ರದರ್ಶಿಸಿದವರನ್ನು ಪೊಲೀಸರು ಬಂಧಿಸಿ, ನಂತರ ಬಿಡುಗಡೆ ಮಾಡಿದರು ಎಂದು ವರದಿಗಳು ತಿಳಿಸಿವೆ.

ಈ ಎಲ್ಲಾ ಘಟನೆ ಬೆನ್ನಲ್ಲೇ ಸಂಜೀವರಾಯನಕೋಟೆ ಗ್ರಾಮಕ್ಕೆ ಎಸ್ಪಿ ರಂಜಿತ್ ಕುಮಾರ್ ಬಂಡಾರು ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com