ಕರ್ನಾಟಕ 'ಕೈ' ವಶ: ಸಿಎಂ ರೇಸ್ ಗೆ ವೇದಿಕೆ ಸಜ್ಜು; ಆಪ್ತರ ಸಭೆ ಬಳಿಕ ಶಾಸಕರ ಬೆಂಬಲ ಇದೆ ಎಂದ ಸಿದ್ದರಾಮಯ್ಯ

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸರಳ ಬಹುಮತ ಪಡೆದು ಅಧಿಕಾರದ ಗದ್ದುಗೆ ಹಿಡಿಯಲು ಅಣಿಯಾಗಿರುವಾಗಲೇ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಚರ್ಚೆ ಮುನ್ನೆಲೆಗೆ ಬಂದಿದ್ದು, ಮುಖ್ಯಮಂತ್ರಿ ಪಟ್ಟ ಯಾರಿಗೆ ಒಲಿಯಲಿದೆ ಎಂಬುದು ಕುತೂಹಲ ಮೂಡಿಸಿದೆ.
ಸಿದ್ದರಾಮಯ್ಯ-ಡಿಕೆ ಶಿವಕುಮಾರ್
ಸಿದ್ದರಾಮಯ್ಯ-ಡಿಕೆ ಶಿವಕುಮಾರ್

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸರಳ ಬಹುಮತ ಪಡೆದು ಅಧಿಕಾರದ ಗದ್ದುಗೆ ಹಿಡಿಯಲು ಅಣಿಯಾಗಿರುವಾಗಲೇ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಚರ್ಚೆ ಮುನ್ನೆಲೆಗೆ ಬಂದಿದ್ದು, ಮುಖ್ಯಮಂತ್ರಿ ಪಟ್ಟ ಯಾರಿಗೆ ಒಲಿಯಲಿದೆ ಎಂಬುದು ಕುತೂಹಲ ಮೂಡಿಸಿದೆ.

ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಹುದ್ದೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಹಾಗೆಯೇ, ಮುಖ್ಯಮಂತ್ರಿಯ ಹುದ್ದೆಯ ರೇಸ್‌ನಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಸಹ ಇದ್ದು, ಮುಖ್ಯಮಂತ್ರಿ ಹುದ್ದೆ ಯಾರ ಪಾಲಾಗಲಿದೆ ಎಂಬುದು ಕುತೂಹಲಕ್ಕೆಡೆ ಮಾಡಿಕೊಟ್ಟಿದೆ.

ಕಾಂಗ್ರೆಸ್‌ನಲ್ಲಿ ಮೊದಲಿನಿಂದಲೂ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಮುಖ್ಯಮಂತ್ರಿ ಹುದ್ದೆಗೆ ಪೈಪೋಟಿ ಇದೆಯಾದರೂ ದಲಿತ ಸಿಎಂ ಕೂಗು ಕೇಳಿ ಬರುತ್ತಿದೆ. ಹಾಗಾಗಿ. ಡಾ. ಜಿ. ಪರಮೇಶ್ವರ್ ಹೆಸರು ಈಗ ಮುನ್ನಲೆಗೆ ಬಂದಿದೆ.  ಇದೆಲ್ಲದರ ನಡುವೆ ಬಿಜೆಪಿಯ ವೋಟ್ ಬ್ಯಾಂಕ್ ಆಗಿದ್ದ ಲಿಂಗಾಯತ ಸಮುದಾಯ ಈ ಚುನಾವಣೆಯಲ್ಲಿ ಕಾಂಗ್ರೆಸ್ ಪರ ನಿಂತಿದ್ದಾರೆ. ಹಾಗಾಗಿ. ಆ ಸಮುದಾಯಕ್ಕೆ ಸೇರಿದವರೇ ಮುಖ್ಯಮಂತ್ರಿಯಾಗಬೇಕು ಎಂಬ ಮಾತುಗಳು ಕೇಳಿ ಬರುತ್ತಿವೆ. ಲಿಂಗಾಯತ ಮುಖ್ಯಮಂತ್ರಿಯ ರೇಸ್‌ನಲ್ಲಿ ಎಂ.ಬಿ. ಪಾಟೀಲ್, ಈಶ್ವರ ಖಂಡ್ರೆ, ಎಸ್.ಎಸ್. ಮಲ್ಲಿಕಾರ್ಜುನ್ ಹೆಸರುಗಳು ಮುಂಚೂಣಿಯಲ್ಲಿವೆ.

ಯಾವುದೇ ರಾಜ್ಯದಲ್ಲಿ ಚುನಾವಣೆಗಳು ನಡೆದಾಗ ಆಯಾ ರಾಜ್ಯದ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರುಗಳೇ ಮುಖ್ಯಮಂತ್ರಿಯಾಗುವುದು ಸಹಜವಾದರೂ, ಕೆಲ ಬಾರಿ ಈ ಸಂಪ್ರದಾಯವನ್ನು ಬದಿಗೊತ್ತಿ, ಹೈಕಮಾಂಡ್ ಸೂಚಿಸಿದವರು ಮುಖ್ಯಮಂತ್ರಿಯಾಗಿರುವ ನಿದರ್ಶನಗಳು ಕಾಂಗ್ರೆಸ್‌ನಲ್ಲಿದೆ. ಹಾಗಾಗಿ, ಮುಖ್ಯಮಂತ್ರಿ ಪಟ್ಟ ಶಿವಕುಮಾರ್‌ಗೋ ಸಿದ್ದರಾಮಯ್ಯಗೋ ಎಂಬುದು ಈಗ ಯಕ್ಷ ಪ್ರಶ್ನೆಯಾಗಿದೆ.  ಮುಖ್ಯಮಂತ್ರಿ ಹುದ್ದೆ ಆಯ್ಕೆ ವರಿಷ್ಠರಿಗೆ ಸವಾಲಾಗಿದೆ. ಯಾರನ್ನು ಆಯ್ಕೆ ಮಾಡಬೇಕು ಎಂಬ ಸಂದಿಗ್ಧದಲ್ಲಿ ಹೈಕಮಾಂಡ್ ಇದೆ. ಹೈ ಕಮಾಂಡ್ ಎಲ್ಲರ ಜತೆ ಚರ್ಚಿಸಿ ಒಂದು ನಿರ್ಧಾರಕ್ಕೆ ಬರಲಿದೆ. ಹೈಕಮಾಂಡ್ ನಿರ್ಧರಿಸಿದವರೇ ಮುಖ್ಯಮಂತ್ರಿಯಾಗುವ ಸಾಧ್ಯತೆಗಳು ಹೆಚ್ಚಿವೆ.

ಶಾಸಕರ ಬೆಂಬಲ ಇದೆ ಎಂದ ಸಿದ್ದರಾಮಯ್ಯ
ಇನ್ನು ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ಮಾಜಿ ಸಿದ್ದರಾಮಯ್ಯ ತಮಗೆ ಶಾಸಕರ ಬೆಂಬಲವಿದೆ ಎಂದು ಹೇಳುವ ಮೂಲಕ ಸಿಎಂ ಸ್ಥಾನ ತಮಗೇ ನೀಡಬೇಕು ಎಂದು ಪ್ರತಿಪಾದಿಸಿದ್ದಾರೆ. ಇಂದು ಬೆಳಗ್ಗೆ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿರುವ ಬೈರತಿ ಸುರೇಶ್ ಅವರಿಗೆ ಸೇರಿದ್ದು ಎನ್ನಲಾದ ಹೊಟೆಲ್ ನಲ್ಲಿ ಸಿದ್ದರಾಮಯ್ಯ ಅವರ ಆಪ್ತ ಶಾಸಕರು ನಾಯಕರ ರಹಸ್ಯ ಕರೆಯಲಾಗಿತ್ತು. ಈ ಸಭೆಯಲ್ಲಿ ಸಿದ್ದರಾಮಯ್ಯ ಅವರನ್ನೇ ಕಾಂಗ್ರೆಸ್ ಪಕ್ಷದ ಸಿಎಂ ಆಗಿ ಆಯ್ಕೆ ಮಾಡಲು ಮಾಡಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚಿಸಲಾಗಿದೆ ಎನ್ನಲಾಗಿದೆ. ಅಂತೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಶಾಸಕರ ಬೆಂಬಲ ಇರುವ ಕುರಿತು ಮಾಹಿತಿ ನೀಡಲಾಗಿದೆ ಎಂದು ಹೇಳಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com