ಬಿಸಿಗಾಳಿ: ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ 3 ಜಿಲ್ಲೆಗಳಿಗೆ ಸೂಚನೆ
ತಾಪಮಾನ ಏರಿಕೆ ಕುರಿತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಘಟಕದ ಎಚ್ಚರಿಕೆಯ ಹಿನ್ನೆಲೆಯಲ್ಲಿ ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲಾಗಳಲ್ಲಿ ಮುಂಜಾಗ್ರತಾ ಕ್ರಮಗಳ ಕೈಗೊಳ್ಳುವಂತೆ ಜಿಲ್ಲಾಡಳಿತ ಮಂಡಳಿ ಸೂಚನೆ ನೀಡಿದೆ.
Published: 17th May 2023 10:50 AM | Last Updated: 17th May 2023 11:03 AM | A+A A-

ಸಂಗ್ರಹ ಚಿತ್ರ
ಬೆಂಗಳೂರು: ತಾಪಮಾನ ಏರಿಕೆ ಕುರಿತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ನಿಗಾ ಘಟಕದ ಎಚ್ಚರಿಕೆಯ ಹಿನ್ನೆಲೆಯಲ್ಲಿ ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲಾಗಳಲ್ಲಿ ಮುಂಜಾಗ್ರತಾ ಕ್ರಮಗಳ ಕೈಗೊಳ್ಳುವಂತೆ ಜಿಲ್ಲಾಡಳಿತ ಮಂಡಳಿ ಸೂಚನೆ ನೀಡಿದೆ.
ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ 3 ದಿನಗಳಲ್ಲಿ ಗರಿಷ್ಠ 40 ಡಿಗ್ರಿ ಸೆಲ್ಸಿಯಸ್‍ಗಿಂತ ಹೆಚ್ಚು (ತಾಪಮಾನ) ಬಿಸಿಲು ಮತ್ತು ಬಿಸಿ ಗಾಳಿ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬಿಸಿಗಾಳಿಯ ಮುನ್ಸೂಚನೆ ಹಿನ್ನಲೆಯಲ್ಲಿ ಕಲಬುರಗಿ ಜಿಲ್ಲಾಡಳಿತ ಜನರಿಗೆ ಕೆಲವು ಸಲಹೆಗಳನ್ನು ನೀಡಿದೆ. ಜನರು ಬಿಸಿಲಿನ ಶಾಖದಿಂದ ತಪ್ಪಿಸಿಕೊಳ್ಳಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಕಲಬುರಗಿ ಅಪರ ಜಿಲ್ಲಾಧಿಕಾರಿ ಭೀಮಾಶಂಕರ ತೆಗ್ಗೆಳ್ಳಿ ತಿಳಿಸಿದ್ದಾರೆ.
ಏನನ್ನು ಮಾಡಬೇಕು?
- ಸಾರ್ವಜನಿಕರು ರೇಡಿಯೊ, ಟಿವಿ ಹಾಗೂ ದಿನಪತ್ರಿಕೆಗಳಲ್ಲಿ ಬರುವ ಅತಿಯಾದ ಬಿಸಿಲಿನ ಕುರಿತು ಮುನ್ಸೂಚನೆ ಪಡೆದುಕೊಳ್ಳಬೇಕು. ಬಾಯಾರಿಕೆಯಿಲ್ಲದಿದ್ದರೂ ಸಹ ಸಾಕಷ್ಟು ಮತ್ತು ಸಾಧ್ಯವಾದಷ್ಟು ಹೆಚ್ಚಾಗಿ ನೀರು ಕುಡಿಯಬೇಕು. ಹಗುರವಾದ ತಿಳಿ ಬಣ್ಣದ, ಸಡಿಲವಾದ ಮತ್ತು ರಂದ್ರವುಳ್ಳ ಹತ್ತಿ ಬಟ್ಟೆಗಳನ್ನು ಧರಿಸಬೇಕು.
- ಬಿಸಿಲಿನಲ್ಲಿ ಹೊರಗೆ ಹೋಗುವಾಗ ರಕ್ಷಣಾತ್ಮಕ ಕನ್ನಡಕ, ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಧರಿಸಬೇಕು. ಬಸ್ಸಿನಲ್ಲಿ ದೂರದ ಪ್ರಯಾಣವನ್ನು ರಾತ್ರಿ ವೇಳೆಯಲ್ಲಿ ಮಾಡುವುದು ಉತ್ತಮ. ಒಂದು ವೇಳೆ ಹಗಲು ಪ್ರಯಾಣ ಮಾಡಿದ್ದಲ್ಲಿ ಈ ಸಂದರ್ಭದಲ್ಲಿ ಕುಡಿಯುವ ನೀರನ್ನು ತಪ್ಪದೇ ತೆಗೆದುಕೊಂಡು ಹೋಗಬೇಕು.
- ಹೊರಗಡೆ ಕೆಲಸ ಮಾಡುತ್ತಿದ್ದಲ್ಲಿ ಟೋಪಿ ಅಥವಾ ಛತ್ರಿಯನ್ನು ಬಳಸುವದರ ಜೊತೆಗೆ ತಲೆ, ಕುತ್ತಿಗೆ, ಮುಖ ಮತ್ತು ಕೈಕಾಲುಗಳ ಮೇಲೆ ಒದ್ದೆಯಾದ ಬಟ್ಟೆಯನ್ನು ಬಳಸಬೇಕು. ಓ.ಆರ್.ಎಸ್., ಮನೆಯಲ್ಲಿ ತಯಾರಿಸಿದ ಲಸ್ಸಿ, ಶರಬತ್, ನಿಂಬೆ ನೀರು, ಮಜ್ಜಿಗೆಗಳನ್ನು ಬಳಸಬೇಕು. ಮನೆಯನ್ನು ತಂಪಾಗಿರಿಕೊಳ್ಳಬೇಕು.
- ಆಗಾಗ್ಗೆ ತಣ್ಣೀರಿನಲ್ಲಿ ಸ್ನಾನ ಮಾಡಬೇಕು. ತಂಪಾದ ಸಮಯದಲ್ಲಿ ಕೆಲಸ ಮಾಡಬೇಕು. ಕೆಲಸ ನಿರ್ವಹಿಸುತ್ತಿರುವ ಗರ್ಭಿಣಿ ಮಹಿಳೆಯರಿಗೆ ಮತ್ತು ಅನಾರೋಗ್ಯದಿಂದಿರುವ ಕಾರ್ಮಿಕರಿಗೆ ಹೆಚ್ಚಿನ ಗಮನ ಹರಿಸಬೇಕು.
ಏನು ಮಾಡಬಾರದು?
- ಮಕ್ಕಳು ಮತ್ತು ಸಾಕುಪ್ರಾಣಿಗಳನ್ನು ಬಿಸಿಲಿನಲ್ಲಿ ನಿಲ್ಲಿಸಿದ ವಾಹನಗಳ ಹತ್ತಿರ ಬಿಡಬಾರದು. ವಿಶೇಷವಾಗಿ ಮಧ್ಯಾಹ್ನ 12 ಗಂಟೆಯಿಂದ ಮಧ್ಯಾಹ್ನ 3ರ ನಡುವೆ ಬಿಸಿಲಿನಲ್ಲಿ ಹೊರಗೆ ಹೋಗುವುದನ್ನು ತಪ್ಪಿಸಬೇಕು.
- ಕಪ್ಪು ಬಟ್ಟೆ ಅಥವಾ ಬಿಗಿಯಾದ ಬಟ್ಟೆಗಳನ್ನು ಧರಿಸಬಾರದು. ಹೊರಗಿನ ತಾಪಮಾನ ಹೆಚ್ಚಾದಾಗ ಶ್ರಮದಾಯಕ ಚಟ್ಟುವಟಿಕೆಗಳನ್ನು ತಪ್ಪಿಸಿ.
- ಮಧ್ಯಾಹ್ನ 12 ರಿಂದ ಮಧ್ಯಾಹ್ನ 3ರ ವರೆಗೆ ಹೊರಗಡೆ ಹೋಗಬಾರದು.
- ಅಡುಗೆ ಪ್ರದೇಶವನ್ನು ಸಮರ್ಪಕವಾಗಿ ಗಾಳಿಯಾಡಲು ಬಾಗಿಲು ಮತ್ತು ಕಿಟಕಿಗಳನ್ನು ತೆರೆಯಬೇಕು.
- ದೇಹವನ್ನು ನಿರ್ಜಲೀಕರಣಗೊಳಿಸುವ ಅಲ್ಕೋಹಾಲ್, ಚಹಾ, ಕಾಫಿ ಮತ್ತು ಹಾನಿಕಾರಕ ತಂಪು ಪಾನೀಯ, ಆಹಾರ ಹಾಗೂ ಹಳಸಿದ ಆಹಾರವನ್ನು ಸೇವಿಸಬಾರದು.
- ನೀರನ್ನು ಕಾಯಿಸಿ ಕುಡಿಯಬೇಕು. ಕುಡಿಯುವ ನೀರು ಪೋಲಾಗದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಲಾಗಿದೆ.