ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸ್ ದೌರ್ಜನ್ಯ ಪ್ರಕರಣಕ್ಕೆ ರಾಜಕೀಯ ತಿರುವು

ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್  ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತರ ಮೇಲಿನ ಪೊಲೀಸ್ ದೌರ್ಜನ್ಯ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ.
ಚಪ್ಪಲಿ ಹಾರ ಹಾಕಿರುವ ಬ್ಯಾನರರ್
ಚಪ್ಪಲಿ ಹಾರ ಹಾಕಿರುವ ಬ್ಯಾನರರ್

ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತರ ಮೇಲಿನ ಪೊಲೀಸ್ ದೌರ್ಜನ್ಯ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ.

ಪೊಲೀಸರು ಒಂಬತ್ತು ಹಿಂದೂ ಕಾರ್ಯಕರ್ತರನ್ನು ಬಂಧಿಸಿ ಥರ್ಡ್ ಡಿಗ್ರಿ ಟ್ರೀಟ್ ಮೆಂಟ್ ನೀಡಿದ್ದಾರೆ. ಅವರಲ್ಲಿ ಬಹುತೇಕ ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದು ಇದೀಗ ವಿವಾದವಾಗಿ ರೂಪುಗೊಂಡಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ಇದೀಗ ಪರಸ್ಪರ ಆರೋಪ ಮಾಡುತ್ತಿವೆ. ಮತ್ತೊಂದೆಡೆ, ಆರೋಪಿ ಪೊಲೀಸ್ ಅಧಿಕಾರಿಗಳ ವಿರುದ್ಧ ಐಪಿಸಿ ಸೆಕ್ಷನ್ 307 (ಕೊಲೆ ಯತ್ನ) ದಾಖಲಿಸಬೇಕು ಎಂದು ಬಜರಂಗದಳ ಒತ್ತಾಯಿಸಿದೆ. ತಮ್ಮ ಬೇಡಿಕೆ ಈಡೇರಿಸದಿದ್ದರೆ ಬೃಹತ್ ಪ್ರತಿಭಟನೆ ನಡೆಸುವುದಾಗಿಯೂ ಎಚ್ಚರಿಕೆ ನೀಡಿದೆ.

ಪುತ್ತೂರು ಗ್ರಾಮಾಂತರ ಡಿಎಸ್‌ಪಿ ಹಾಗೂ ಇತರ ಮೂವರು ಪೊಲೀಸರ ವಿರುದ್ಧ ಈಗಾಗಲೇ ಎಫ್‌ಐಆರ್ ದಾಖಲಾಗಿದೆ. ಈ ಸಂಬಂಧ ಪೊಲೀಸ್ ಇಲಾಖೆ ಸಬ್ ಇನ್ಸ್ ಪೆಕ್ಟರ್ ಹಾಗೂ ಪೊಲೀಸ್ ಪೇದೆಯನ್ನು ಅಮಾನತುಗೊಳಿಸಿದೆ. ರಾಜ್ಯ ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಲೋಕ್ ಕುಮಾರ್ ಕಠಿಣ ಕ್ರಮದ ಭರವಸೆ ನೀಡಿದ್ದಾರೆ. 

ಹಿಂದೂ ಕಾರ್ಯಕರ್ತರ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯಕ್ಕೆ ಕಾಂಗ್ರೆಸ್ ಷಡ್ಯಂತ್ರ್ಯ ರೂಪಿಸಿದೆ ಎಂದು ಬಿಜೆಪಿ ಆರೋಪಿಸಿದೆ. ಮತ್ತೊಂದೆಡೆ ಬಿಜೆಪಿ ನಾಯಕರ ಒತ್ತಡಕ್ಕೆ ಮಣಿದು ಪೊಲೀಸರು ಈ ಕೃತ್ಯ ಎಸಗಿದ್ದಾರೆ ಎಂದು ಕಾಂಗ್ರೆಸ್ ಸಮರ್ಥಿಸಿಕೊಂಡಿದೆ. ಹಿಂದೂ ಕಾರ್ಯಕರ್ತರಿಗೆ ಥರ್ಡ್ ಡಿಗ್ರಿ ಟ್ರೀಟ್ಮೆಂಟ್ ನೀಡುವಂತೆ ಪೊಲೀಸರ ಮೇಲೆ ಒತ್ತಡ ಹೇರಿದ ನಾಯಕರ ಹೆಸರನ್ನು ಇನ್ನೆರಡು ದಿನಗಳಲ್ಲಿ ಬಹಿರಂಗ ಪಡಿಸುವುದಾಗಿ ಪುತ್ತೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ.

ವಿಧಾನಸಭಾ ಚುನಾವಣಾ ಫಲಿತಾಂಶದ ನಂತರ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಮೂರನೇ ಸ್ಥಾನಕ್ಕೆ ತಳಲ್ಪಟ್ಟಿದ್ದರಿಂದ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದಗೌಡ ಅವರ ಭಾವಚಿತ್ರವಿರುವ ಬ್ಯಾನರ್ ಗೆ ಚಪ್ಪಲಿ ಹಾರ ಹಾಕಲಾಗಿತ್ತು. ಪುತ್ತೂರು ಬಸ್ ನಿಲ್ದಾಣದ ಬಳಿ ಹಾಕಲಾಗಿದ್ದ ಬ್ಯಾನರ್‌ನಲ್ಲಿ ಉಭಯ ನಾಯಕರಿಗೆ ಸಂತಾಪ ಸೂಚಿಸಲಾಗಿತ್ತು. ಈ ಸಂಬಂಧ ಪುತ್ತೂರು ನಗರಸಭೆ ಅಧ್ಯಕ್ಷ ಮಧು ಮನೋಹರ್ ಮತ್ತಿತರರು ಪೊಲೀಸರಿಗೆ ದೂರು ನೀಡಿದ್ದರು. ನಂತರ ಒಂಬತ್ತು ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು ಥರ್ಡ್ ಡಿಗ್ರಿ ಚಿಕಿತ್ಸೆ ನೀಡಿದ್ದರು. ಪುತ್ತೂರು ಗ್ರಾಮಾಂತರ ಡಿಎಸ್ಪಿ ಸಮ್ಮುಖದಲ್ಲಿ ಥರ್ಡ್ ಡಿಗ್ರಿ ಚಿಕಿತ್ಸೆ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. 

ಬಿಜೆಪಿಯಿಂದ ಟಿಕೆಟ್ ನಿರಾಕರಿಸಿದ ನಂತರ ಸ್ವತಂತ್ರವಾಗಿ ಸ್ಪರ್ಧಿಸಿ ಎರಡನೇ ಸ್ಥಾನ ಪಡೆದಿದ್ದ ಬಂಡಾಯ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಆರೋಪಿಗಳನ್ನು ಬಿಡುಗಡೆಗೊಳಿಸಿದ್ದರು. ಬಳಿಕ ಆರೋಪಿಗಳೆಲ್ಲ ಬಿಜೆಪಿ ಪರ ಕೆಲಸ ಮಾಡಿದ ಹಿಂದೂ ಕಾರ್ಯಕರ್ತರೆಂದು ತಿಳಿದುಬಂದಿದ್ದು. ಕಟೀಲು ಹಾಗೂ ಸದಾನಂದಗೌಡ ವಿರುದ್ಧ ಸಾರ್ವಜನಿಕರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ನಳಿನ್ ಕುಮಾರ್ ಕಟೀಲ್ ಕೂಡ ಹಿಂದೂ ಕಾರ್ಯಕರ್ತರಿಗೆ ಥರ್ಡ್ ಡಿಗ್ರಿ ನಡೆಸಿರುವುದನ್ನು ಖಂಡಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com