ಸಿದ್ದು ಪ್ರಮಾಣ ವಚನಕ್ಕೆ ವರುಣ ಅಡ್ಡಿ ಸಾಧ್ಯತೆ, ನಾಳೆ ಬೆಂಗಳೂರಲ್ಲಿ ಗುಡುಗು ಸಹಿತ ಮಳೆ
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಎರಡನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಈ ಸಮಾರಂಭಕ್ಕೆ...
Published: 19th May 2023 05:48 PM | Last Updated: 19th May 2023 08:06 PM | A+A A-

ಸಾಂದರ್ಭಿಕ ಚಿತ್ರ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಎರಡನೇ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದು, ಈ ಸಮಾರಂಭಕ್ಕೆ ವರುಣ ಅಡ್ಡಿಯಾಗುವ ಸಾಧ್ಯತೆ ಇದೆ.
ಬಿಸಿಲಿನಿಂದ ಕಂಗೆಟ್ಟಿರುವ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಶನಿವಾರ ಮತ್ತು ಭಾನುವಾರ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಸಿಎಂ ಮತ್ತು ಡಿಸಿಎಂ ಪ್ರಮಾಣ ವಚನಕ್ಕೆ ಭರದ ಸಿದ್ಧತೆ ನಡೆಯುತ್ತಿದೆ. ಆದರೆ, ಶನಿವಾರದ ಈ ಪ್ರಮಾಣ ವಚನ ಸಂಭ್ರಮಕ್ಕೆ ವರುಣ ತಣ್ಣೀರೆರಚುವ ಸಾಧ್ಯತೆ ಇದೆ.
ಮೇ 20 ಮತ್ತು ಮೇ 21 ರಂದು ದಕ್ಷಿಣ ಕರ್ನಾಟಕದ ಕೆಲವು ಭಾಗಗಳಲ್ಲಿ ಮಿಂಚು ಮತ್ತು ವೇಗವಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮೇ 21 ಮತ್ತು 22 ರಂದು ಬೆಂಗಳೂರಿನ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಮತ್ತು ಮೋಡ ಕವಿದಿರುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.