ಬೆಂಗಳೂರು: ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಶನಿವಾರ ಪ್ರಮಾಣವಚನ ಸ್ವೀಕರಿಸಿದರು.
ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮದಲ್ಲಿ ರಾಜ್ಯದ ನೂತನ ಸಿಎಂ ಆಗಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದರು.
ಉಭಯ ನಾಯಕರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು.
ಸಿದ್ದರಾಮಯ್ಯ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಡಿಕೆ ಶಿವಕುಮಾರ್ ಅವರು ಸ್ವಾಮಿ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಪರಮೇಶ್ವರ್, ಮುನಿಯಪ್ಪ, ಎಂಬಿ ಪಾಟೀಲ್ ಸೇರಿ ಸಚಿವರಿಂದ ಪ್ರಮಾಣ ವಚನ ಸ್ವೀಕಾರ
ಅಂತೆಯೇ ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕರಾದ ಡಾ.ಜಿ ಪರಮೇಶ್ವರ್, ಕೆಎಚ್ ಮುನಿಯಪ್ಪ, ಎಂಬಿ ಪಾಟೀಲ್ ಸೇರಿದಂತೆ ಹಲವು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಡಾ.ಪರಮೇಶ್ವರ್ ಅವರು ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರೆ, ಡಾ.ಪರಮೇಶ್ವರ್ ಅವರು ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ, ಕೆಜೆ ಜಾರ್ಜ್ ಮತ್ತು ಎಂಬಿ ಪಾಟೀಲ್ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಉಳಿದಂತೆ ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾರೆಡ್ಡಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ತಮ್ಮ ತಂದೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಮ್ಮುಖದಲ್ಲಿ ಪುತ್ರ ಪ್ರಿಯಾಂಕ್ ಖರ್ಗೆ ಪ್ರಮಾಣ ವಚನ ಸ್ವೀಕರಿಸಿದ್ದು ವಿಶೇಷವಾಗಿತ್ತು.
ಅಲ್ಲಾ ಮತ್ತು ತಾಯಿಯ ಹೆಸರಿನಲ್ಲಿ ಇಂಗ್ಲೀಷ್ ನಲ್ಲಿ ಜಮೀರ್ ಪ್ರತಿಜ್ಞಾವಿಧಿ ಸ್ವೀಕಾರ
ಇನ್ನು ಚಾಮರಾಜಪೇಟೆ ಶಾಸಕ ಬಿಝಡ್ ಜಮೀರ್ ಅಹ್ಮದ್ ಖಾನ್ ಅವರು ಅಲ್ಲಾಹ್ ಮತ್ತು ತಮ್ಮ ತಾಯಿಯ ಹೆಸರಿನಲ್ಲಿ ಇಂಗ್ಲೀಷ್ ಭಾಷೆಯಲ್ಲಿ ಪ್ರತಿಜ್ಞಾವಿಧಿ ಸ್ವೀಕರಿಸಿದರು.
Advertisement