ಮುಸ್ಲಿಂ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕೆ ಬಜರಂಗ ದಳದ ಕಾರ್ಯಕರ್ತನಿಗೆ ಥಳಿತ, ಗಂಭೀರ ಗಾಯ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಸ್ಲಿಂ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 30 ಜನರ ಗುಂಪೊಂದು ಬಜರಂಗ ದಳದ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದೆ ಎಂದು ಶುಕ್ರವಾರ ಪೊಲೀಸರು ತಿಳಿಸಿದ್ದಾರೆ.
Published: 26th May 2023 01:33 PM | Last Updated: 26th May 2023 01:33 PM | A+A A-

ಪ್ರಾತಿನಿಧಿಕ ಚಿತ್ರ
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಸ್ಲಿಂ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 30 ಜನರ ಗುಂಪೊಂದು ಬಜರಂಗ ದಳದ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದೆ ಎಂದು ಶುಕ್ರವಾರ ಪೊಲೀಸರು ತಿಳಿಸಿದ್ದಾರೆ.
ಹಲ್ಲೆಗೊಳಗಾದ ವ್ಯಕ್ತಿಯನ್ನು ಅಜಿತ್ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೂಡಿಗೆರೆ ತಾಲೂಕಿನ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಯುವತಿಯೊಂದಿಗೆ ಅಜಿತ್ ಹೋಗುತ್ತಿದ್ದಾಗ ಗುಂಪೊಂದು ಅವರ ಮೇಲೆ ಹಲ್ಲೆ ನಡೆಸಿದೆ. ರಸ್ತೆಯ ಉದ್ದಕ್ಕೂ ಅವರನ್ನು ಎಳೆದೊಯ್ದು ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳ ವಿರುದ್ಧ ಮಹಿಳೆ ದೂರು ದಾಖಲಿಸಿದ್ದಾರೆ. ಅಜಿತ್ ಮೂಡಿಗೆರೆಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಟ್ಟುನಿಟ್ಟಿನ ಎಚ್ಚರಿಕೆಯ ನಂತರವೂ ರಾಜ್ಯದಲ್ಲಿ ನಡೆಯುತ್ತಿರುವ ಎರಡನೇ ನೈತಿಕ ಪೊಲೀಸ್‌ಗಿರಿ ಘಟನೆ ಇದಾಗಿದೆ.
ಮೇ 24 ರಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮತ್ತೊಂದು ನೈತಿಕ ಪೊಲೀಸ್‌ಗಿರಿ ಪ್ರಕರಣ ವರದಿಯಾಗಿದ್ದು, ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಚಿಕ್ಕಮಗಳೂರು ಕೋಮು ಸೂಕ್ಷ್ಮ ಜಿಲ್ಲೆಯಾಗಿದ್ದು, ಇತ್ತೀಚೆಗಷ್ಟೇ ನಡೆದ ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲ ಐದು ಸ್ಥಾನಗಳನ್ನು ಕಾಂಗ್ರೆಸ್ ಗೆದ್ದುಕೊಂಡಿದೆ. ಚಿಕ್ಕಮಗಳೂರಿನವರಾದ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ರವಿ ಹೀನಾಯ ಸೋಲು ಕಂಡಿದ್ದಾರೆ.