ಆಡಳಿತಕ್ಕೆ ಹೊಸ ಸ್ಪರ್ಶ ನೀಡಲು ಎಲ್ಲಾ 34 ಸಚಿವ ಸ್ಥಾನಗಳನ್ನು ಭರ್ತಿ ಮಾಡಲಾಗಿದೆ: ಸಿಎಂ ಸಿದ್ದರಾಮಯ್ಯ
ರಾಜ್ಯದ ಆಡಳಿತಕ್ಕೆ ಹೊಸ ಸ್ಪರ್ಶ ನೀಡುವ ಉದ್ದೇಶದಿಂದ ಎಲ್ಲಾ 34 ಸಚಿವ ಸ್ಥಾನಗಳನ್ನು ಭರ್ತಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು.
Published: 28th May 2023 09:26 AM | Last Updated: 28th May 2023 09:26 AM | A+A A-

ಸಿಎಂ ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದ ಆಡಳಿತಕ್ಕೆ ಹೊಸ ಸ್ಪರ್ಶ ನೀಡುವ ಉದ್ದೇಶದಿಂದ ಎಲ್ಲಾ 34 ಸಚಿವ ಸ್ಥಾನಗಳನ್ನು ಭರ್ತಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದರು.
ನೂತನ ಸಚಿವ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ನಂತರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೂರ್ಣ ಪ್ರಮಾಣದ ಸಚಿವ ಸಂಪುಟವನ್ನು ರಚಿಸಲಾಗಿದೆ. ಮುಖ್ಯಮಂತ್ರಿಗಳನ್ನು ಹೊರತುಪಡಿಸಿ 33 ಜನರಿಗೂ ಸಂಪುಟ ದರ್ಜೆ ಸಚಿವರನ್ನಾಗಿ ಮಾಡಲಾಗಿದೆ. ಇನ್ನೆರಡು ದಿನಗಳೊಳಗೆ ಖಾತೆ ಹಂಚಿಕೆ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.
ಮೊದಲ ಬಾರಿಗೆ ಸಚಿವರಾಗುವವರ ಜೊತೆಗೆ ಅನುಭವಿಗಳನ್ನೂ ಕೂಡ ಸಂಪುಟಕ್ಕೆ ಸೇರ್ಪಡೆ ಮಾಡಲಾಗಿದೆ. ಎರಡು ಅಥವಾ ಅದಕ್ಕಿಂತ ಹೆಚ್ಚಿನ ಬಾರಿ ಗೆಲುವು ಸಾಧಿಸಿದವರನ್ನು ಮಾತ್ರ ಸಚಿವ ಸ್ಥಾನಕ್ಕೆ ಆಯ್ಕೆ ಮಾಡಲಾಗಿದ್ದು, ಸಮತೋಲಿತ ಸಚಿವ ಸಂಪುಟ ರಚಿಸಲಾಗಿದೆ. ಹೀಗಾಗಿ ಹಾವೇರಿ, ಕೊಡಗು, ಚಿಕ್ಕಮಗಳೂರು, ಹಾಸನ ಸೇರಿ ಇನ್ನಿತರೆ ಜಿಲ್ಲೆಗಳ ಶಾಸಕರನ್ನೂ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಸಚಿವ ಸ್ಥಾನ ದೊರಕಿಲ್ಲ ಎಂಬ ಕಾರಣಕ್ಕಾಗಿ ಯಾವುದೇ ಅಸಮಾಧಾನಗಳಿಲ್ಲ. ಎಲ್ಲರೂ ಸಚಿವರ ಆಯ್ಕೆಗೆ ಸಹಮತಿ ನೀಡಿದ್ದಾರೆಂದು ತಿಳಿಸಿದರು.
ನಾವು ನೀಡಿದ ಭರವಸೆಯನ್ನು ಸರ್ಕಾರ ಈಡೇರಿಸಬೇಕಿದೆ. ಜನರು ಬದಲಾವಣೆ ಬಯಸಿದ್ದಾರೆ. ಆಡಳಿತಕ್ಕೆ ಹೊಸ ರೂಪ ಕೊಡುವ ಉದ್ದೇಶದಿಂದ ಈ ಸಚಿವ ಸಂಪುಟ ರಚನೆ ಮಾಡಲಾಗಿದೆ. ಮೊದಲಿಗೆ 5 ಗ್ಯಾರಂಟಿಗಳನ್ನು ಮೊದಲು ಜಾರಿ ಮಾಡಬೇಕಿದೆ. ಪ್ರಣಾಳಿಕೆಯಲ್ಲಿ ನೀಡಲಾದ ಭರವಸೆಗಳನ್ನು 5 ವರ್ಷಗಳೊಳಗೆ ಅನುಷ್ಠಾನಗೊಳಿಸಬೇಕಿದೆ.
ವಿರೋಧ ಪಕ್ಷಗಳು ಭರವಸೆ ಈಡೇರಿಸಿಲ್ಲ, ಈ ಹಿಂದೆ ನೀಡಿದ್ದ ಭರವಸೆಗಳನ್ನು ನಾವು ಈಡೇರಿಸಿದ್ದೇವೆ. ಅದೇ ರೀತಿಯಲ್ಲಿಯೇ ಮುಂದುವರಿಯುತ್ತೇವೆ. ಮುಂದಿನ ಸಚಿವ ಸಂಪುಟದಲ್ಲಿ 5 ಗ್ಯಾರಂಟಿಗಳ ಕುರಿತು ಅಧಿಕೃತ ಆದೇಶ ಹೊರಡಿಸಲಾಗುವುದು. ಅದಕ್ಕಾಗಿ ವರದಿ ಕೇಳಲಾಗಿದೆ ಎಂದು ಮಾಹಿತಿ ನೀಡಿದರು.