ಮೈಸೂರು: ಖಾಸಗಿ ಬಸ್- ಕಾರು ಮುಖಾಮುಖಿ ಡಿಕ್ಕಿ, ಭೀಕರ ಅಪಘಾತದಲ್ಲಿ 10 ಮಂದಿ ಸಾವು
ಮೈಸೂರು ಜಿಲ್ಲೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ಸೋಮವಾರ ಖಾಸಗಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಭೀಕರ ಅಪಘಾತದಲ್ಲಿ 10 ಮಂದಿ ಮೃತಪಟ್ಟಿದ್ದಾರೆ.
Published: 29th May 2023 03:49 PM | Last Updated: 29th May 2023 09:09 PM | A+A A-

ಖಾಸಗಿ ಬಸ್ - ಕಾರು ಮುಖಾಮುಖಿ ಡಿಕ್ಕಿ
ಮೈಸೂರು: ಮೈಸೂರು ಜಿಲ್ಲೆಯ ಕುರುಬೂರು ಗ್ರಾಮದ ಪಿಂಜರ ಪೋಲ್ ಬಳಿ ಸೋಮವಾರ ಖಾಸಗಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾಗಿದ್ದು, ಭೀಕರ ಅಪಘಾತದಲ್ಲಿ 10 ಮಂದಿ ಮೃತಪಟ್ಟಿದ್ದಾರೆ.
ಇಂದು ಮಧ್ಯಾಹ್ನ ಕೊಳ್ಳೇಗಾಲ - ಟಿ.ನರಸೀಪುರ ಮುಖ್ಯ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ 10 ಮಂದಿ ಮೃತಪಟ್ಟಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.
ಇದನ್ನು ಓದಿ: ಕೊಪ್ಪಳ: ಕಾರು-ಲಾರಿ ನಡುವೆ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ 6 ಜನ ಸಾವು
ಅಪಘಾತದ ತೀವ್ರತೆಗೆ ಇನ್ನೊವಾ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಸಿಲುಕಿರುವ ವ್ಯಕ್ತಿಗಳನ್ನು ಸ್ಥಳೀಯರು ರಕ್ಷಣೆ ಮಾಡಿದ್ದು, ಮಗು ಸೇರಿದಂತೆ ಹಲವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಅಪಘಾತದಲ್ಲಿ ನಾಲ್ವರು ಪುರುಷರು, ಮೂವರು ಮಹಿಳೆಯರು ಮತ್ತು ಮೂವರು ಮಕ್ಕಳು ಮೃತಪಟ್ಟಿದ್ದು, ಈ ಪೈಕಿ ಕೆಲವರು ಬಳ್ಳಾರಿ ಜಿಲ್ಲೆಯ ಸಂಗನಕಲ್ ನಿವಾಸಿಗಳಾಗಿದ್ದು, ಮೈಸೂರಿಗೆ ಪ್ರವಾಸಕ್ಕೆ ತೆರಳಿದ್ದರು. ಅಲ್ಲಿಂದ ಚಾಮರಾಜನಗರಕ್ಕೆ ಹೋಗಿದ್ದರು ಎನ್ನಲಾಗಿದೆ.
ಕಾರಿನಲ್ಲಿದ್ದ ಮೂವರ ಸ್ಥಿತಿ ಗಂಭೀರವಾಗಿದೆ. ಮೂವರು ಗಾಯಾಳುಗಳನ್ನು ಬಳ್ಳಾರಿ ಮೂಲದ ಜನಾರ್ದನ್ (45), ಪುನೀತ್ (4), ಶಶಿಕುಮಾರ್(24) ಎಂದು ಗುರುತಿಸಲಾಗಿದ್ದು, ಚಾಮರಾಜನಗರ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.