'ನಿಮ್ಮ ಸಕಲಸದ್ಗುಣಗಳ ಬಗ್ಗೆ ನನಗಿಂತ ಖರ್ಗೆ ಹೆಚ್ಚು ಬಲ್ಲರು: ಸೋಲು, ಗೆಲುವು ಜನಾಧೀನ- ರಾಜ್ಯದ ಭವಿಷ್ಯ, ಪ್ರತಿಷ್ಠೆ ದೈವಾಧೀನ!'

ಮೇಲ್ನೋಟಕ್ಕೆ ಸರಳರಾಮಯ್ಯ! ಒಳಗೆ ಐಷಾರಾಮಯ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ
ಎಚ್.ಡಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ
ಎಚ್.ಡಿ ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ
Updated on

ಬೆಂಗಳೂರು: ಮೇಲ್ನೋಟಕ್ಕೆ ಸರಳರಾಮಯ್ಯ! ಒಳಗೆ ಐಷಾರಾಮಯ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ. ಈ ಸಂಬಂಧ ಸುದೀರ್ಘ ಟ್ವೀಟ್ ಮಾಡಿರುವ ಎಚ್.ಡಿ ಕುಮಾರಸ್ವಾಮಿ, ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ.

ಸನ್ಮಾನ್ಯ ಸಿದ್ದರಾಮಯ್ಯನವರೇ ನೀವು ಬಡವರ ಬಗ್ಗೆ ಮಾತನಾಡುತ್ತಿರುವುದೇ ಸೋಜಿಗ. ಐಷಾರಾಮಿಯಾದ ನೀವು ಮೇಲೆ 'ಸರಳರಾಮಯ್ಯ! ಒಳಗೆ ಐಷಾರಾಮಯ್ಯ!!' ಹೌದಲ್ಲವೇ? ನಾನು ಹೇಳಿದ್ದನ್ನೇಕೆ ತಿರುಚುತ್ತೀರಿ? ಗ್ಯಾರಂಟಿಗಳ ಬಗ್ಗೆ ನನಗೇಕೆ ಹೊಟ್ಟೆಯುರಿ? ನಾನು ಹೇಳಿದ್ದೇನು? ನೀವು ವಕ್ರೀಕರಿಸುತ್ತಿರುವುದೇನು? ಕಾಸು ಕೊಟ್ಟು ಸಮೀಕ್ಷೆ ಮಾಡಿಸಿಕೊಂಡ ಹಾಗಲ್ಲ ಇದು. 5 ಗ್ಯಾರಂಟಿ ಕೊಟ್ಟಿದ್ದೀರಿ, ಸರಿ. ಅದನ್ನು ನೆಟ್ಟಗೆ ಕೊಡಲು ವಿಫಲರಾಗಿದ್ದೀರಿ ಎಂದಿದ್ದೇನೆ. ಇಲ್ಲವೆಂದರೆ ಹೇಳಿ, ಬಹಿರಂಗ ಚರ್ಚೆಗೇ ಬರುತ್ತೇನೆ. ಎಲ್ಲಿಗೆ ಬರಲಿ?

ಕೋಟ್ಯಂತರ ಫಲಾನುಭವಿಗಳು ಸಂಭ್ರಮಿಸುತ್ತಿದ್ದಾರೆಯೇ? ಸತ್ಯ ಹೇಳಿ. ಮಾಧ್ಯಮಗಳು ಸುಳ್ಳು ಹೇಳುತ್ತಿವೆಯೇ? ಪೊಳ್ಳು ಬರೆಯುತ್ತಿವೆಯೇ? ನಿಮ್ಮ ಪ್ರಕಾರ ಮಾಧ್ಯಮಗಳಿಗೆ, ಪ್ರತಿಪಕ್ಷಗಳಿಗೆ ಸುಳ್ಳು ಹೇಳುವುದೇ ಕೆಲಸವೇ? ಹಿಂದೆ ನೀವು ಮಾಡಿದ್ದೂ ಇದೇನಾ? ನಿಮ್ಮ 'ಸಮಾಜವಾದಿ ಆತ್ಮಸಾಕ್ಷಿ' ಹೀಗಂತ ಹೇಳುತ್ತಿದೆಯಾ? ಗ್ಯಾರಂಟಿಗಳನ್ನು ಕಾಂಗ್ರೆಸ್ ಮತದಾರರಿಗಷ್ಟೇ ತಂದಿದ್ದೀರಿ ಎಂದು ನಾನು ಹೇಳಿದ್ದೇನೆಯೇ? ಬಹುಶಃ ನಿಮಗೆ ಅಂಥ ಮನಃಸ್ಥಿತಿ ಇದ್ದರೂ ಇದ್ದೀತು.

ಗ್ಯಾರಂಟಿಗಳು ಸರಿಯಾಗಿ ಅನುಷ್ಠಾನವಾಗಿಲ್ಲ ಎಂದು ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದೇನೆ. ಹಾಗಾದರೆ, ಮಾಧ್ಯಮಗಳಿಗೆ ಸತ್ಯ ತಿಳಿಸುವುದೇ ಅಪರಾಧವೇ? ನಿಮ್ಮ ದರ್ಬಾರಿನಲ್ಲಿ ಮಾಧ್ಯಮಗೋಷ್ಠಿಯೂ ಮಹಾಪಾಪವೇ? ನಿಮ್ಮ 'ಸಿದ್ದಾಂತರಾಳ' ಹೀಗೆಂದು ಅಪ್ಪಣೆ ಕೊಟ್ಟಿದೆಯಾ? ಹಳ್ಳಿಗಳಿಗೆ ಹೋಗಿದ್ದೇನೆ, ಫಲಾನುಭವಿಗಳನ್ನು ಮಾತನಾಡಿಸಿದ್ದೇನೆ. ಸತ್ಯ ಹೇಳಿದ್ದೇನೆ. ಬನ್ನಿ, ನಿಮಗೂ ಸತ್ಯದರ್ಶನ ಮಾಡಿಸುತ್ತೇನೆ.

ಐಶಾರಾಮಯ್ಯನವರೇ, ನನ್ನ ದನಿ ಬಡವರ ಪರ. ನಿಮ್ಮಂತೆ ಯಾರ ಮುಲಾಜಿಗೂ ಬಿದ್ದವನಲ್ಲ ನಾನು. ರಾಜ್ಯಕ್ಕೆ ರಾಜ್ಯವೇ ಬರದ ಬೆಂಕಿಯಲ್ಲಿ ಬೇಯುತ್ತಿದೆ. ರೈತಸಂಕುಲ ನರಕದಲ್ಲಿದೆ. ಅವರ ಸಾಲಮನ್ನಾ ಮಾಡಿ. #YstTax, #SstTax ಕಲೆಕ್ಷನ್ ಬದಿಗಿಟ್ಟು ರೈತರ ಪರ ನಿಲ್ಲಿ. ಗ್ಯಾರಂಟಿ ಗ್ಯಾರಂಟಿ ಎನ್ನುತ್ತಿದ್ದೀರಲ್ಲ, ರೈತರ ಬದುಕಿಗೆ ಗ್ಯಾರಂಟಿ ಕೊಡಿ. ನಾನು ಸಾಲಮನ್ನಾ ಮಾಡಿ ತೋರಿಸಿದ್ದೇನೆ, ಈಗ ನೀವು ಮಾಡಿ. ಬರೀ ಬಾಯಿ ಮಾತೇಕೆ? ಇದೇ ನನ್ನ ಸವಾಲು ಎಂದಿದ್ದಾರೆ.
 
ಇದ್ದಿದ್ದನ್ನು ಇದ್ದಂತೆ ಹೇಳಿದರೆ, ಅದನ್ನೇ ವಾಗ್ದಾಳಿ ಎಂದು ಅನುಕಂಪ ಗಿಟ್ಟಿಸಿಕೊಳ್ಳುವ ನಿಮ್ಮ ಬಗ್ಗೆ ಸಹಾನೂಭೂತಿ ಇದೆ. ಶಾಂತಿ, ದ್ವೇಷಾಸೂಯೆ, ಹತಾಶೆ ಬಗ್ಗೆ ದಯವಿಟ್ಟು ಮಾತನಾಡಬೇಡಿ. ನಿಮ್ಮ ಸಕಲಸದ್ಗುಣಗಳ ಬಗ್ಗೆ ನನಗಿಂತ ಮಲ್ಲಿಕಾರ್ಜುನ ಖರ್ಗೆ ಅವರೇ ಹೆಚ್ಚು ಬಲ್ಲರು. ಇನ್ನು; ಚುನಾವಣೆ ಸೋಲು ಎಂದಿದ್ದೀರಿ? ಇದು ನನಗೂ ಹೊಸದಲ್ಲ, ನಿಮಗೂ ಹೊಸದಲ್ಲ. ನಿಮ್ಮ ಹಳಹಳಿಕೆ ಅರ್ಥ ಮಾಡಿಕೊಳ್ಳಬಲ್ಲೆ. ವೈಫಲ್ಯಗಳನ್ನೇ ವಕ್ರೀಕರಿಸಿ ಅನುಕಂಪ ಗಿಟ್ಟಿಸುವ ಹಳೆಯ ಚಾಳಿ ಬಿಡಿ.

ಇದನ್ನೂ ಓದಿ: ಪಂಚರಾಜ್ಯಗಳ ಜನರಿಗೆ ಕಾಂಗ್ರೆಸ್ 'ಸುಳ್ಳು ಗ್ಯಾರಂಟಿಗಳ' ಮಂಕುಬೂದಿ ಎರಚುತ್ತಿದೆ: ಕುಮಾರಸ್ವಾಮಿ ವಾಗ್ದಾಳಿ
 
ನನ್ನ ಹೆಸರು ಕೇಳಿದರೆ ಪ್ರಧಾನಿ ನರೇಂದ್ರ ಮೋದಿ ಅವರಿಗೇ ಭಯ ಅನ್ನುತ್ತೀರಿ. ಪ್ರಧಾನಿ ಬಗ್ಗೆ ಮುಖ್ಯಮಂತ್ರಿ ಆಡುವ ಮಾತೇ ಇದು. 'ಸಾಸಿವೆ ಕಾಳಿನಷ್ಟು ಶಿಷ್ಟಾಚಾರ ಗೊತ್ತಿಲ್ಲ. ಸಾಲುಸಾಲು ಸಮ್ಮಾನ ಬೇಕು' ಎಂದನಂತೆ ಒಬ್ಬ. ಹಾಗಿದೆ ನಿಮ್ಮ ಧಿಮಾಕು. ಧಮ್ಮು, ತಾಕತ್ತು, ಗೈರತ್ತಿನಿಂದ ಕೆಲಸ ಆಗಲ್ಲ ಮುಖ್ಯಮಂತ್ರಿಗಳೇ? ಐದು ವರ್ಷ ಸಿಎಂ ಆಗಿದ್ದ ನಿಮಗೆ ಇಷ್ಟು ಸಾಮಾನ್ಯ ಜ್ಞಾನವೂ ಇಲ್ಲವೇ? ಕಾವೇರಿ ವಿಷಯದಲ್ಲಿಯೇ ನಿಮ್ಮ ದಮ್ಮು, ತಾಕತ್ತು ಮೂರಾಬಟ್ಟೆ ಆಯಿತಲ್ಲ. ತಮಿಳುನಾಡಿಗೆ ಈಗಲೂ ನೀರು ಹರಿಯುತ್ತಿದೆಯಲ್ಲ!! ಕಾಣುತ್ತಿಲ್ಲವೇ? ಎಂದು ಪ್ರಶ್ನಿಸಿದ್ದಾರೆ.
 
ಮಹಾದೇವಪ್ಪ ನಿಂಗೂ ಕತ್ತಲು ಫ್ರೀ! ನಂಗೂ ಕತ್ತಲು ಫ್ರೀ!! ಕಾಕಾ ಪಾಟೀಲ್ ನಿಂಗೂ ಕತ್ತಲು ಫ್ರೀ!!" ಇದು ನಿಮ್ಮ ಗ್ಯಾರಂಟಿಗಳ ಸ್ಥಿತಿ. ಸುಳ್ಳೇಕೆ ಹೇಳುತ್ತೀರಿ? ಆ ಪದವಿಗಾದರೂ ಗೌರವ ಬೇಡವೇ? ಸೀಟಿನಲ್ಲಿ ಕೂತು ಸುಳ್ಳು ಹೇಳದಿರಿ. ಉಚಿತ, ಖಚಿತ ಎಂದವರು ನೀವು. ಇವು ಅಗ್ಗದ ಯೋಜನೆಗಳು ಎಂದು ನಾನು ಹೇಳಿದ್ದೂ ಹೌದು. ನಾನೇ ಏಕೆ, ನಿಮ್ಮ ಸಂಪುಟದ ಹಾಲಿ ಕ್ಯಾಬಿನೇಟ್ ಮಂತ್ರಿಯೊಬ್ಬರೇ, "ಎಲೆಕ್ಷನ್ ಗೆಲ್ಲಬೇಕಾದರೆ ಗ್ಯಾರಂಟಿಗಳಂಥ ಚೀಫ್ ಗಿಮಿಕ್, ಟ್ರಿಕ್ಸ್ ಮಾಡಲೇಬೇಕು" ಎಂದು ಹೇಳಿರಲಿಲ್ಲವೇ? ವೈರಲ್ ಆಗಿದ್ದ ಆ ವಿಡಿಯೋ ನಿಮ್ಮ ಮೊಬೈಲಿಗೂ ಬಂದಿರಬೇಕಲ್ಲವೇ?

ಇದನ್ನೂ ಓದಿ: ಮಾಜಿ ಸಿಎಂ ಆಗಿ ವಿದ್ಯುತ್ ಕಳ್ಳತನ ಮಾಡುವ ದಾರಿದ್ರ್ಯ ಬಂದಿದ್ದು ದುರಂತ: ಎಚ್ ಡಿಕುಮಾರಸ್ವಾಮಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
 
ದೂರದೃಷ್ಟಿ ಇಲ್ಲದ ಗ್ಯಾರಂಟಿಗಳು ಕರ್ನಾಟಕವನ್ನು ಆರ್ಥಿಕ ಆಪತ್ತಿಗೆ ದೂಡುತ್ತವೆ ಎಂದು ಆರ್ಥಿಕ ಇಲಾಖೆ ಕಳೆದ ಜೂನ್ (1-6-2023) ನಲ್ಲಿಯೇ ಎಚ್ಚರಿಸಿತ್ತು. ಗೃಹಲಕ್ಷ್ಮೀ ಯೋಜನೆ ರಾಜ್ಯವನ್ನು ಆದಾಯ ಕೊರತೆಗೆ ನೂಕಲಿದೆ, ಪ್ರತೀವರ್ಷ ಇಷ್ಟು ಬೃಹತ್ ಮೊತ್ತ ಹೊಂದಿಸುವುದು ಕಷ್ಟ. ರಾಜ್ಯ ದಿವಾಳಿ ಆಗುತ್ತದೆ ಎಂಬ ಎಚ್ಚರಿಕೆಯನ್ನು ಹಣಕಾಸು ಸಚಿವರಾಗಿ ಉಪೇಕ್ಷೆ ಮಾಡಿದ್ದು ನೀವಲ್ಲವೇ? ವಿತ್ತೀಯ ಹೊಣೆಗಾರಿಕೆ ಕಾಯ್ದೆಯನ್ನು ಸ್ವತಃ ವಿತ್ತ ಸಚಿವರೇ ಉಲ್ಲಂಘಿಸಿದರೆ ಹೇಗೆ? ಎಂದು ಕುಮಾರಸ್ವಾಮಿ ಕಿಡಿ ಕಾರಿದ್ದಾರೆ
 
ಸೋಲು, ಗೆಲುವು ಜನಾಧೀನ. ಆ ಸತ್ಯ ನನಗೂ ಗೊತ್ತು, ನಿಮಗೂ ಗೊತ್ತು. ಆದರೆ, ಅರೆಬರೆ ಗ್ಯಾರಂಟಿಗಳಿಂದ ಲೋಕಸಭೆ ಗೆಲ್ಲುತ್ತೇವೆ ಎಂದು ಹೊರಟಿದ್ದೀರಿ. ಬನ್ನಿ ಅಖಾಡಕ್ಕೆ. ನಮ್ಮ ಸತ್ಯಕ್ಕೆ ಸೋಲೋ, ನಿಮ್ಮ ಸುಳ್ಳಿಗೆ ಗೆಲುವೋ.. ಎಂದು ನೋಡೋಣ. 'ಸಾಲದ ಶೂಲ', 'ಆರ್ಥಿಕ ದಿವಾಳಿತನ', 'ಆರ್ಥಿಕ ಅಸ್ಥಿರತೆ-ಅದಕ್ಷತೆ', 'ಪರಾಧೀನ ಬದುಕು', 'ಕಮೀಷನ್‌ ಕಾಂಡ' ; ಇವು ನಿಮ್ಮ ಸರಕಾರ ರಾಜ್ಯಕ್ಕೆ ಕೊಟ್ಟಿರುವ 5 ಹೊಸ ಗ್ಯಾರಂಟಿಗಳು! ಇನ್ನು, ರಾಜ್ಯದ ಭವಿಷ್ಯ, ಪ್ರತಿಷ್ಠೆ ಎಲ್ಲವೂ ದೈವಾಧೀನ! ಎಂದು ಸಿಎಂ ವಿರುದ್ಧ ಎಚ್.ಡಿಕೆ ಹರಿಹಾಯ್ದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com