ಚಿಲುಮೆ ಹಗರಣ: ಬಿಬಿಎಂಪಿ ಮುಖ್ಯ ಆಯುಕ್ತರ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ಆದೇಶ

ರಾಜ್ಯಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಚಿಲುಮೆ ಹಗರಣಕ್ಕೆ ಸಂಬಂದಿಸಿದಂತೆ ರಾಜ್ಯ ಸರ್ಕಾರ ಮಹತ್ವ ನಿರ್ಧಾರ ಕೈಗೊಂಡಿದ್ದು,  ಬಿಬಿಎಂಪಿ ಮುಖ್ಯ ಆಯುಕ್ತರ ವಿರುದ್ಧ ತನಿಖೆಗೆ ಆದೇಶ ನೀಡಿದೆ.
ತುಷಾರ್ ಗಿರಿನಾಥ್.
ತುಷಾರ್ ಗಿರಿನಾಥ್.

ಬೆಂಗಳೂರು: ರಾಜ್ಯಾದ್ಯಂತ ವ್ಯಾಪಕ ಸುದ್ದಿಗೆ ಗ್ರಾಸವಾಗಿದ್ದ ಚಿಲುಮೆ ಹಗರಣಕ್ಕೆ ಸಂಬಂದಿಸಿದಂತೆ ರಾಜ್ಯ ಸರ್ಕಾರ ಮಹತ್ವ ನಿರ್ಧಾರ ಕೈಗೊಂಡಿದ್ದು,  ಬಿಬಿಎಂಪಿ ಮುಖ್ಯ ಆಯುಕ್ತರ ವಿರುದ್ಧ ತನಿಖೆಗೆ ಆದೇಶ ನೀಡಿದೆ.

ಹೌದು... ಈ ಹಿಂದೆ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬೆಳಕಿಗೆ ಬಂದಿದ್ದ ಚಿಲುಮೆ ಸಂಸ್ಥೆ ಪ್ರಕರಣ ಸಂಬಂದ ಮತದಾರರ ಖಾಸಗಿ ಮಾಹಿತಿ ಸಂಗ್ರಹಕ್ಕೆ ಅವಕಾಶ ಮಾಡಿಕೊಡಲಾಗಿತ್ತು ಎಂಬ ಆರೋಪದ ಹಿನ್ನೆಲೆಯಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ವಿರುದ್ಧ ತನಿಖೆ ಮಾಡಿ ವರದಿ ನೀಡಲು ರಾಜ್ಯದ ಮುಖ್ಯಕಾರ್ಯದರ್ಶಿಗಳಿಗೆ ರಾಜ್ಯ ಸರ್ಕಾರ ಸೂಚಿಸಿದೆ.

ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿಯೂ ಆಗಿದ್ದರು. ತುಷಾರ್ ಗಿರಿನಾಥ್ ಅವರು ಚಿಲುಮೆ ಸಂಸ್ಥೆಗೆ ಮತಪಟ್ಟಿ ಪರಿಷ್ಕರಣೆಗೆ ಅವಕಾಶ ಕೊಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜುಲೈ 3ರಂದು ಪತ್ರ ಬರೆದು ತನಿಖೆ ನಡೆಸುವಂತೆ ಮನವಿ ಮಾಡಿದ್ದರು. ಪತ್ರದಲ್ಲಿ ಮತದಾರರ ಖಾಸಗಿ ವಿಷಯ ಸಂಗ್ರಹಿಸಲು ಚಿಲುಮೆ ಸಂಸ್ಥೆಗೆ ಅವಕಾಶ ನೀಡಿ ಕರ್ತವ್ಯಲೋಪ ಎಸಗಿರುವ ಆರೋಪದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ವಿರುದ್ಧ ಹಾಗೂ ಚಿಲುಮೆ ಸಂಸ್ಥೆಯ ಲೋಪದ ಬಗ್ಗೆ ಪೂರ್ಣ ಪ್ರಮಾಣದ ತನಿಖೆ ನಡೆಸುವಂತೆ ಕೋರಿದ್ದರು.

ಈ ದೂರನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿಗಳು ಸೂಕ್ತ ತನಿಖೆ ನಡೆಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದರು. ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಚುನಾವಣಾ ಆಯೋಗಕ್ಕೆ ಪರಿಶೀಲನೆ ನಡೆಸಿ ವರದಿ ನೀಡುವಂತೆ ಕೋರಿದ್ದಾರೆ. ಅಲ್ಲದೆ, ಮತದಾನದ ಬಗ್ಗೆ ಮತದಾರರಿಗೆ ಜಾಗೃತಿ ಮೂಡಿಸುವ ಹೆಸರಿನಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಚಿಲುಮೆ ಸಂಸ್ಥೆ ಬಿಎಲ್‍ಓ (ಬೂತ್ ಮಟ್ಟದ ಅಧಿಕಾರಿ) ಹೆಸರಿನಲ್ಲಿ ಗುರುತಿನ ಚೀಟಿಯನ್ನು ಸೃಷ್ಟಿಸಿಕೊಂಡು ಮತದಾರರ ಮನೆಗಳಿಗೆ ಹೋಗಿ ವೈಯಕ್ತಿಕ ಮಾಹಿತಿಗಳನ್ನು ಕಲೆ ಹಾಕಿತ್ತು. ಅಲ್ಲದೆ ಈ ಮಾಹಿತಿಯನ್ನು ದುರ್ಬಳಕೆ ಮಾಡಿಕೊಂಡಿದೆ ಎಂಬ ಆರೋಪ ಇದೆ.

ಜುಲೈ 10, 2023 ರಂದು ಮುಖ್ಯ ಕಾರ್ಯದರ್ಶಿ ರಮೇಶ್ ಬಾಬು ಅವರು ಸಲ್ಲಿಸಿದ ದೂರಿನ ಬಗ್ಗೆ ವಿವರಣೆಯನ್ನು ಕೋರಿ ಡಿಪಿಎಆರ್ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಈ ಹಿಂದೆ ಆಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ. ಚಿಲುಮೆಯ ಪಾತ್ರದಿಂದಾಗಿ ಬೆಂಗಳೂರಿನಲ್ಲಿ ಕಾಂಗ್ರೆಸ್ ತನ್ನ ಸ್ಥಾನವನ್ನು ಸುಧಾರಿಸಲು ವಿಫಲವಾಗಿದೆ ಮತ್ತು ಪಕ್ಷವು 4 ರಿಂದ 5 ಗೆಲ್ಲಬಹುದಾದ ಸ್ಥಾನಗಳಲ್ಲಿ ಸೋತಿದೆ ಎಂದು ಅವರು ಪತ್ರದಲ್ಲಿ ಆರೋಪಿಸಿದ್ದಾರೆ.

ಇಬ್ಬರು ಐಎಎಸ್ ಅಧಿಕಾರಿಗಳಾದ ಎಸ್ ರಂಗಪ್ಪ ಮತ್ತು ಕೆ ಶ್ರೀನಿವಾಸ್ ಅವರನ್ನು ಅಮಾನತುಗೊಳಿಸಿದ್ದ ಚುನಾವಣಾ ಆಯೋಗದ ಕ್ರಮದಿಂದ ಅಸಮಾಧಾನಗೊಂಡಿರುವುದಾಗಿ ಬಾಬು ಟಿಎನ್‌ಐಇಗೆ ತಿಳಿಸಿದ್ದಾರೆ. ಈ ಅಧಿಕಾರಿಗಳನ್ನು ಹರಕೆಯ ಕುರಿಗಳನ್ನಾಗಿ ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಇದಕ್ಕೂ ಮುನ್ನ ಹಲಸೂರು ಗೇಟ್‌ ಪೊಲೀಸರು ಶಿವಾಜಿನಗರ ಕಂದಾಯ ಅಧಿಕಾರಿ ಸುಹೇಲ್‌ ಅಹಮದ್‌, ಮಹದೇವಪುರ ಕಂದಾಯ ಅಧಿಕಾರಿ ಕೆ.ಚಂದ್ರಶೇಖರ್‌, ಚಿಕ್ಕಪೇಟೆ ಉಪ ಕಂದಾಯ ಅಧಿಕಾರಿ ವಿ.ಬಿ.ಭೀಮಾಶಂಕರ್‌, ಮತದಾರರ ನೋಂದಣಾಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದ ಆರ್‌.ಆರ್‌.ನಗರ ಕಂದಾಯ ಅಧಿಕಾರಿ ಮಹೇಶ್‌ ಅವರನ್ನು ಬಂಧಿಸಿದ್ದರು. ಬಳಿಕ ಬಿಬಿಎಂಪಿ ಅವರನ್ನು ಅಮಾನತು ಮಾಡಿತ್ತು. ಚುನಾವಣಾ ಆಯೋಗದ ನಿರ್ದೇಶನದ ಆಧಾರದ ಮೇಲೆ, ನವೆಂಬರ್ 24, 2022 ರಂದು ರಂಗಪ್ಪ ಮತ್ತು ಶ್ರೀನಿವಾಸ್ ಅವರನ್ನು ಅಮಾನತುಗೊಳಿಸಲಾಗಿತ್ತು.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com