ಅತ್ತಿಬೆಲೆ ಪಟಾಕಿ ದುರಂತ: ದುಷ್ಕರ್ಮಿಗಳನ್ನು ನಮ್ಮ ಸರ್ಕಾರ ಬಿಡಲ್ಲ- ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಬೆಂಗಳೂರು: ಅತ್ತಿಬೆಲೆಯಲ್ಲಿ ಪಟಾಕಿ ಅಂಗಡಿಯೊಂದಕ್ಕೆ ಬೆಂಕಿ ಬಿದ್ದು 14 ಮಂದಿ ಸಾವಿಗೀಡಾದ ಘಟನೆಗೆ ಕಾರಣರಾದ ದುಷ್ಕರ್ಮಿಗಳನ್ನು ನಮ್ಮ ಸರ್ಕಾರ ಬಿಡುವುದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಹೇಳಿದ್ದಾರೆ.
ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಎಲ್ಲ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುತ್ತದೆ ಎಂದು ಅವರು ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಖರ್ಗೆ ಸಾಂತ್ವನ ತಿಳಿಸಿದ್ದು, ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳೊಂದಿಗೆ ನಮ್ಮ ಆಲೋಚನೆಗಳು ಇವೆ. ಸಂತ್ರಸ್ತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ರಾಜ್ಯ ಸರ್ಕಾರ ಘೋಷಿಸಿದೆ. ಅಪರಾಧಿಗಳನ್ನು ಬಿಡುವುದಿಲ್ಲ ಮತ್ತು ಭವಿಷ್ಯದಲ್ಲಿ ಇಂತಹ ಘಟನೆಗಳು ಸಂಭವಿಸದಂತೆ ಎಲ್ಲಾ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಭಾನುವಾರ ಇನ್ನಿಬ್ಬರು ಸಾವನ್ನಪ್ಪಿದ್ದು, ಬೆಂಕಿ ಅವಘಡದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ತಲುಪಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಆನೇಕಲ್ ತಾಲೂಕಿನ ಅತ್ತಿಬೆಲೆಯ ಪಟಾಕಿ ಅಂಗಡಿ- ಗೋದಾಮ್ ನಲ್ಲಿ ಸಂಭವಿಸಿದ ಬೆಂಕಿ ಅನಾಹುತದಲ್ಲಿ ಶನಿವಾರ ರಾತ್ರಿ 12 ಮಂದಿ ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದರು. ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ