ಎಚ್ಎಸ್ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಸಾರ್ವಜನಿಕರ ನಿರಾಸಕ್ತಿ: ಸರ್ಕಾರದಿಂದ ಗಡುವು ವಿಸ್ತರಣೆ ಸಾಧ್ಯತೆ

2019ರ ಏಪ್ರಿಲ್ ತಿಂಗಳಿಗೂ ಮೊದಲು ನೋಂದಾಯಿಸಲಾದ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳ (ಎಚ್‌ಎಸ್‌ಆರ್‌ಪಿ) ಅಳವಡಿಕೆಯ ಗಡುವು ನವೆಂಬರ್ 17ರಂದು ಕೊನೆಯಾಗಲಿದೆ. ನಂಬರ್ ಪ್ಲೇಟ್ ಅಳವಡಿಕೆಗೆ ಸಾರ್ವಜನಿಕರು ನಿರಾಸಕ್ತಿ ತೋರುತ್ತಿದ್ದು, ರಾಜ್ಯ ಸರ್ಕಾರವು ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಗಡುವನ್ನು ವಿಸ್ತರಿಸುವ ಸಾಧ್ಯತೆಯಿದೆ. 
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ
Updated on

ಬೆಂಗಳೂರು: 2019ರ ಏಪ್ರಿಲ್ ತಿಂಗಳಿಗೂ ಮೊದಲು ನೋಂದಾಯಿಸಲಾದ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್‌ಗಳ (ಎಚ್‌ಎಸ್‌ಆರ್‌ಪಿ) ಅಳವಡಿಕೆಯ ಗಡುವು ನವೆಂಬರ್ 17ರಂದು ಕೊನೆಯಾಗಲಿದೆ. ನಂಬರ್ ಪ್ಲೇಟ್ ಅಳವಡಿಕೆಗೆ ಸಾರ್ವಜನಿಕರು ನಿರಾಸಕ್ತಿ ತೋರುತ್ತಿದ್ದು, ರಾಜ್ಯ ಸರ್ಕಾರವು ಎಚ್‌ಎಸ್‌ಆರ್‌ಪಿ ಅಳವಡಿಕೆಗೆ ಗಡುವನ್ನು ವಿಸ್ತರಿಸುವ ಸಾಧ್ಯತೆಯಿದೆ. 

ರಾಜ್ಯದಲ್ಲಿ ನೋಂದಣಿಯಾಗಿರುವ 2 ಕೋಟಿ ಹಳೆಯ ವಾಹನಗಳ ಪೈಕಿ ಕೇವಲ 1.75 ಲಕ್ಷ (ಶೇ 10ಕ್ಕಿಂತ ಕಡಿಮೆ) ವಾಹನಗಳಿಗೆ ಮಾತ್ರ ಹೊಸ ನಂಬರ್ ಪ್ಲೇಟ್‌ ಅಳವಡಿಸಲಾಗಿದೆ. ನಂಬರ್ ಪ್ಲೇಟ್ ಅಳವಡಿಸಿಕೊಳ್ಳಲು ಜನರನ್ನು ಉತ್ತೇಜಿಸಲು ಹೆಚ್ಚಿನ ಪ್ರಚಾರ ನೀಡುವ ಸಾಧ್ಯತೆಯಿದೆ ಎಂದು ಹಿರಿಯ ಸಾರಿಗೆ ಅಧಿಕಾರಿಗಳು ತಿಳಿಸಿದ್ದಾರೆ.

ಟಿಎನ್ಐಇ ಜೊತೆಗೆ ಮಾತನಾಡಿದ ಹಿರಿಯ ಸಾರಿಗೆ ಅಧಿಕಾರಿಯೊಬ್ಬರು, 'ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಭದ್ರತೆ ಸೇರಿದಂತೆ ವಿವಿಧ ಕಾರಣಗಳಿಗಾಗಿ ಮತ್ತು ವಾಹನಗಳ ದುರುಪಯೋಗವನ್ನು ತಡೆಯಲು ಹಳೆಯ ವಾಹನಗಳಿಗೆ ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ಗಳನ್ನು ಅಳವಡಿಸುವುದನ್ನು ಕಡ್ಡಾಯಗೊಳಿಸಿದೆ. ಎಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್‌ಗಳನ್ನು ಒಮ್ಮೆ ಅಳವಡಿಸಿದರೆ ನಂತರ ತೆಗೆಯಲು ಸಾಧ್ಯವಾಗುವುದಿಲ್ಲ. ಇದರಿಂದಾಗಿ ನಂಬರ್ ಪ್ಲೇಟ್‌ಗಳ ವಿನಿಮಯಕ್ಕೆ ಸಾಧ್ಯವಾಗುವುದಿಲ್ಲ. ಏಪ್ರಿಲ್ 1, 2019 ಕ್ಕೂ ಮೊದಲು ರಾಜ್ಯದಲ್ಲಿ ಸುಮಾರು 2 ಕೋಟಿ ವಾಹನಗಳು ನೋಂದಣಿಯಾಗಿವೆ. ಈ ನಂತರ ನೋಂದಣಿಯಾದ ಎಲ್ಲಾ ವಾಹನಗಳಿಗೂ ಕಡ್ಡಾಯವಾಗಿ ಎಚ್‌ಎಸ್‌ಆರ್‌ಪಿ ಪ್ಲೇಟ್‌ಗಳನ್ನು ಅಳವಡಿಸಲಾಗಿದೆ' ಎಂದರು.

ರಾಜ್ಯ ಸರ್ಕಾರದ ಅಧಿಸೂಚನೆಯಲ್ಲಿ ನವೆಂಬರ್ 17ರವರೆಗೆ ಗಡುವು ನೀಡಿದ್ದರೂ, ಸಾರ್ವಜನಿಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹೀಗಾಗಿ, ಜನರನ್ನು ಉತ್ತೇಜಿಸಲು ಹೆಚ್ಚಿನ ಪ್ರಚಾರಕ್ಕೆ ಯೋಜಿಸುತ್ತಿದ್ದೇವೆ. ಆದರೆ, ಅದನ್ನು ತಾತ್ಕಾಲಿಕವಾಗಿ ನಿಲ್ಲಿಸಬೇಕಾಯಿತು. ಏಕೆಂದರೆ, ಮೂಲ ಸಲಕರಣೆ ತಯಾರಕರಿಂದ (ಒಇಎಂ) ಮಾನ್ಯತೆ ಪಡೆದಿರುವ ಎಚ್ಎಸ್ಆರ್‌ಪಿ ತಯಾರಕರಿಗೆ ಮಾತ್ರ ನಂಬರ್ ಪ್ಲೇಟ್ ಅಳವಡಿಕೆಗೆ ಅನುಮತಿ ನೀಡಿರುವುದರ ವಿರುದ್ಧ ಕೆಲವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಗಡುವು ಕೊನೆಗೊಳ್ಳಲು ಒಂದು ತಿಂಗಳಿಗಿಂತ ಕಡಿಮೆ ಅವಧಿಯಿದ್ದು, ಸರ್ಕಾರವು ಮತ್ತೆ ಗಡುವನ್ನು ವಿಸ್ತರಿಸಬಹುದು ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com