ಚೈತ್ರಾ ಕುಂದಾಪುರ ವಂಚನೆ ಪ್ರಕರಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ: ಬಸವರಾಜ ಬೊಮ್ಮಾಯಿ
ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಬಹುಕೋಟಿ ರೂಪಾಯಿ ವಂಚಿಸಿರುವ ಆರೋಪ ಎದುರಿಸುತ್ತಿರುವ ಚೈತ್ರಾ ಕುಂದಾಪುರ ಪ್ರಕರಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ತಿಳಿಸಿದ್ದಾರೆ.
Published: 14th September 2023 03:14 PM | Last Updated: 14th September 2023 04:41 PM | A+A A-

ಬಸವರಾಜ ಬೊಮ್ಮಾಯಿ
ಮಂಗಳೂರು: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಬಹುಕೋಟಿ ರೂಪಾಯಿ ವಂಚಿಸಿರುವ ಆರೋಪ ಎದುರಿಸುತ್ತಿರುವ ಹಿಂದುತ್ವ ಕಾರ್ಯಕರ್ತೆ ಚೈತ್ರಾ ಕುಂದಾಪುರ ಪ್ರಕರಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದಲ್ಲಿ ತನ್ನ ಇಮೇಜ್ ಅನ್ನು ದುರುಪಯೋಗಪಡಿಸಿಕೊಂಡಿರುವ ಬಗ್ಗೆ ಪಕ್ಷವು ಗಂಭೀರವಾಗಿ ಯೋಚಿಸಲಿದೆ. ತನಿಖೆ ನಂತರ ಸತ್ಯಾಂಶ ಹೊರಬರಲಿದ್ದು, ಪ್ರಕರಣದಲ್ಲಿ ಭಾಗಿಯಾಗಿರುವ ಎಲ್ಲರನ್ನೂ ಬಂಧಿಸಬೇಕು ಎಂದರು.
ಸ್ವಾಮೀಜಿ ಸಿಕ್ಕಿಹಾಕಿಕೊಳ್ಳಲಿ, ಇನ್ನೂ ದೊಡ್ಡ ದೊಡ್ಡ ಹೆಸರು ಹೊರಗೆ ಬರುತ್ತದೆ ಎಂಬ ಚೈತ್ರಾ ಕುಂದಾಪುರ ಹೇಳಿಕೆಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ, ಹೆಸರು ಹೊರಬರಲಿ. ತನಿಖೆ ಆರಂಭವಾಗಿದ್ದು, ಭಾಗಿಯಾದ ಎಲ್ಲರಿಗೂ ಶಿಕ್ಷೆಯಾಗಬೇಕು ಎಂದರು.
ಇದನ್ನೂ ಓದಿ: ಸ್ವಾಮೀಜಿ ಸಿಕ್ಕಿಹಾಕಿಕೊಳ್ಳಲಿ, ಸತ್ಯ ಹೊರಬರುತ್ತೆ, ದೊಡ್ಡ ದೊಡ್ಡವರ ಹೆಸರು ಹೊರಗೆ ಬರತ್ತೆ-ಚೈತ್ರಾ ಕುಂದಾಪುರ
ಮುಂಬರುವ ಲೋಕಸಭೆ ಚುನಾವಣೆಗೆ ರಾಜ್ಯದಲ್ಲಿ ಜೆಡಿಎಸ್ ಜೊತೆಗಿನ ಮೈತ್ರಿ ವಿಚಾರಕ್ಕೆ ಕುರಿತಂತೆ ಮಾತನಾಡಿದ ಅವರು, ಸೀಟು ಹಂಚಿಕೆ ಕುರಿತು ಚರ್ಚೆಗಳು ಪ್ರಾಥಮಿಕ ಹಂತದಲ್ಲಿವೆ. ಹಿರಿಯ ನಾಯಕರು ಮಾತುಕತೆ ನಡೆಸಿ ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಿದ್ದಾರೆ. ಕರ್ನಾಟಕದಲ್ಲಿ ಗರಿಷ್ಠ ಸೀಟುಗಳನ್ನು ಗೆಲ್ಲಲು ಬಿಜೆಪಿ ಉತ್ಸುಕವಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತ ಪ್ರಶ್ನೆಗೆ ಉತ್ತರಿಸಿದ ಬೊಮ್ಮಾಯಿ, ದುರ್ಬಲ ಮುಂಗಾರು ಮಳೆಯಿಂದಾಗಿ ಬೆಳೆ ನಷ್ಟವಾಗಿರುವ ರೈತರಿಗೆ ಕೂಡಲೇ ಪರಿಹಾರ ನೀಡಲು ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು.