ಕಲ್ಯಾಣ ಕರ್ನಾಟಕದಲ್ಲಿ ಅಮೃತ ಮಹೋತ್ಸವ: ಸಿಎಂ ಸಿದ್ದರಾಮಯ್ಯರಿಂದ ರಾಷ್ಟ್ರಧ್ವಜಾರೋಹಣ
ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ದಿನ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ಡಿ.ಆರ್.ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು,
Published: 17th September 2023 10:39 AM | Last Updated: 17th September 2023 10:59 AM | A+A A-

ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ.
ಕಲಬುರಗಿ: ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ದಿನ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ಡಿ.ಆರ್.ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು,
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಲಬುರಗಿಯ ಪೊಲೀಸ್ ಪರೇಡ್ ಮೈದಾನದಲ್ಲಿ ಬೆಳಿಗ್ಗೆ 9 ಗಂಟೆಗೆ ರಾಷ್ಟ್ರ ಧ್ವಜಾರೋಹಣ ನೇರವೇರಿಸಿದರು. ಇದಕ್ಕೂ ಮುನ್ನ ಕಲ್ಯಾಣ ನಾಡಿನ ಸ್ವಾತಂತ್ರ್ಯಕ್ಕಾಗಿ ದಿಟ್ಟ ಕ್ರಮ ಕೈಗೊಂಡು ಮಿಲಿಟರಿ ಆಪರೇಷನ್ ನಡೆಸಿ ಹೈದರಾಬಾದ್ ನಿಜಾಮನ ಕಪಿಮುಷ್ಟಿಯಿಂದ ಮುಕ್ತಿಗೊಳಿಸಿ ಸ್ವಾತಂತ್ರ್ಯ ಕೊಡಿಸಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ಥಳಿಗೆ ಬೆಳಗ್ಗೆ 8:30 ಕ್ಕೆ ಮಾಲಾರ್ಪಣೆ ಮಾಡಿದರು. ನಂತರ ವಿವಿಧ ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿದರು.
#WATCH | Karnataka | On the occasion of Kalyan Karnataka day, CM Siddaramaiah unfurled the national flag at DR Ground in Kalaburagi. pic.twitter.com/t6UaTYae1w
— ANI (@ANI) September 17, 2023
ಬಳಿಕ ಮಾತನಾಡಿದ ಮುಖ್ಯಮಂತ್ರಿಗಳು, ಸ್ವಾಮಿ ರಮಾನಂದ ತೀರ್ಥರು ಹಾಗೂ ಅಸಂಖ್ಯ ಹೋರಾಟಗಾರರ ತ್ಯಾಗ, ಬಲಿದಾನಗಳ ಫಲವಾಗಿ ಹಾಗೂ ಸರ್ದಾರ್ ವಲ್ಲಭಭಾಯಿ ಪಟೇಲರ ಸಂಕಲ್ಪ ಶಕ್ತಿಯಿಂದಾಗಿ ಹೈದರಾಬಾದ್ ಕರ್ನಾಟಕ ನಿಜಾಮರ ಆಳ್ವಿಕೆಯಿಂದ ಮುಕ್ತವಾಗಿ ಭಾರತದ ಒಕ್ಕೂಟಕ್ಕೆ ಸೇರ್ಪಡೆಯಾಯಿತು' ಎಂದು ಹೇಳಿದರು.
2013ರಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಹೈದರಾಬಾದ್ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಸ್ಥಾಪಿಸಿ ಈ ಭಾಗದ ಅಭಿವೃದ್ಧಿಗೆ ಹೊಸ ವೇಗ ನೀಡಲಾಯಿತು. ಸಂವಿಧಾನದಲ್ಲಿ 371 (ಜೆ) ಪರಿಚ್ಛೇದ ಸೇರ್ಪಡೆಯೊಂದಿಗೆ ಹೈ-ಕ ಭಾಗಕ್ಕೆ ವಿಶೇಷ ಸ್ಥಾನಮಾನ ದೊರೆತಂತಾಯಿತು. ಹೈ-ಕ ಪ್ರದೇಶ ಅಭಿವೃದ್ಧಿ ಮಂಡಳಿ ಸ್ಥಾಪಿಸಿ ಈ ಭಾಗದ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಯಿತು. ಮುಂದೆ ಮಂಡಳಿಯನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಎಂದು ಪುನರ್ ನಾಮಕರಣ ಮಾಡಲಾಯಿತು' ಎಂದು ತಿಳಿಸಿದರು.
'ಸಮಾನತೆಯ ಹೊಸ ಹಾದಿಯಲ್ಲಿ ಸಾಗಿದ ಬುದ್ಧ, ಸಾಮಾಜಿಕ ಕ್ರಾಂತಿಯ ಹರಿಕಾರ ಬಸವಣ್ಣ ಹಾಗೂ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ತತ್ವ ಮತ್ತು ಅದರ್ಶಗಳನ್ನು ಅಕ್ಷರಶಃ ಅಳವಡಿಸಿಕೊಂಡಿರುವ ನಮ್ಮ ಸರ್ಕಾರವು ಅಧಿಕಾರದ ಚುಕ್ಕಾಣಿ ಹಿಡಿದ ದಿನವೇ ಚುನಾವಣಾ ಪೂರ್ವ ನೀಡಿದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳ ಜಾರಿಗೆ ತಾತ್ವಿಕ ಅನುಮೋದನೆ ನೀಡಿ 100 ದಿನಗಳ ಅವಧಿಯಲ್ಲಿ ಪ್ರಮುಖ ನಾಲ್ಕು ಗ್ಯಾರಂಟಿ ಜಾರಿಗೆ ತಂದಿದ್ದೇವೆ. ಇದು ನುಡಿದಂತೆ ನಡೆಯುವ ಸರ್ಕಾರ ಎಂಬುದು ಮತ್ತೊಮ್ಮೆ ಸಾಬೀತಾಗಿದೆ' ಎಂದರು.
'ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗೆ 371 (ಜೆ) ತಿದ್ದುಪಡಿಯನ್ವಯ ರಚನೆಗೊಂಡ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಪ್ರಸಕ್ತ 2023-24ನೇ ಸಾಲಿನ ಬಜೆಟ್ ನಲ್ಲಿ ತಿಳಿಸಿದಂತೆ 5 ಸಾವಿರ ಕೋಟಿ ವೆಚ್ಚದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ' ಎಂದರು.
ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಕೆಕೆಆರ್ ಡಿಬಿ ಅಧ್ಯಕ್ಷ ಡಾ. ಅಜಯ್ ಸಿಂಗ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ, ಶಾಸಕರಾದ ಬಿ.ಆರ್. ಪಾಟೀಲ, ಎಂ.ವೈ. ಪಾಟೀಲ, ಅಲ್ಲಮಪ್ರಭು ಪಾಟೀಲ, ಕನೀಜ್ ಫಾತಿಮಾ, ವಿಧಾನಪರಿಷತ್ ಸದಸ್ಯರಾದ ತಿಪ್ಪಣ್ಣಪ್ಪ ಕಮಕನೂರ, ಶಶೀಲ್ ಜಿ. ನಮೋಶಿ, ಮೇಯರ್ ವಿಶಾಲ ದರ್ಗಿ, ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಐಜಿಪಿ ಅಜಯ್ ಹಿಲೋರಿ, ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್, ಕಮಿಷನರ್ ಚೇತನ್ ಆರ್, ಜಿ.ಪಂ. ಸಿಇಒ ಭಂವರ್ ಸಿಂಗ್ ಮೀನಾ ಇತರರು ಇದ್ದರು.
ಕಲ್ಯಾಣ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಇಂದು ಸ್ವಾತಂತ್ರ್ಯ ದಿನದ ಸಂಭ್ರಮ ಮನೆ ಮಾಡಿದೆ. ದೇಶಕ್ಕೆ ಆಗಸ್ಟ್ 1947ರಲ್ಲಿ ಸ್ವಾತಂತ್ರ್ಯ ಸಿಕ್ಕಿದೆ. ಆದರೆ, ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳಿಗೆ ಹೈದರಾಬಾದ್ ನಿಜಾಮರಿಂದ ಸ್ವಾತಂತ್ರ್ಯ ಸಿಕ್ಕಿದ್ದು 1948 ಸೆಪ್ಟೆಂಬರ್ 17ರಂದು. ಸ್ವಾತಂತ್ರ್ಯ ಲಭಿಸಿ 75 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವ ದಿನ ಆಚರಣೆ ಮಾಡಲಾಗುತ್ತಿದೆ.