ರಾಜ್ಯದ ನೆಲ, ಜಲ, ಭಾಷೆ ವಿಚಾರದಲ್ಲಿ ಯಾವುದೇ ಹೋರಾಟಕ್ಕೂ ಸಿದ್ಧ: ರೈತರ ಹೋರಾಟಕ್ಕೆ ಸ್ಯಾಂಡಲ್ ವುಡ್ ಬೆಂಬಲ
ಕಾವೇರಿ ವಿವಾದದ ಬಗ್ಗೆ ಮೌನ ತಾಳಿದ್ದಕ್ಕಾಗಿ ಟೀಕೆಗಳ ಸುರಿಮಳೆಗಳು ಸುರಿದ ಬೆನ್ನಲ್ಲೇ ರೈತರ ಹೋರಾಟಕ್ಕೆ ಸ್ಯಾಂಡಲ್ ವುಡ್ ಬೆಂಬಲ ವ್ಯಕ್ತಪಡಿಸಿದೆ.
Published: 21st September 2023 09:39 AM | Last Updated: 21st September 2023 08:47 PM | A+A A-

ಸಂಗ್ರಹ ಚಿತ್ರ
ಬೆಂಗಳೂರು: ಕಾವೇರಿ ವಿವಾದದ ಬಗ್ಗೆ ಮೌನ ತಾಳಿದ್ದಕ್ಕಾಗಿ ಟೀಕೆಗಳ ಸುರಿಮಳೆಗಳು ಸುರಿದ ಬೆನ್ನಲ್ಲೇ ರೈತರ ಹೋರಾಟಕ್ಕೆ ಸ್ಯಾಂಡಲ್ ವುಡ್ ಬೆಂಬಲ ವ್ಯಕ್ತಪಡಿಸಿದೆ.
ರಾಜ್ಯದ ನೆಲ, ಜಲ, ಭಾಷೆ ವಿಚಾರದಲ್ಲಿ ಯಾವುದೇ ಹೋರಾಟಕ್ಕೂ ಸಿದ್ಧ ಎಂದು ಸ್ಯಾಂಡಲ್ ವುಡ್ ನಟ-ನಟಿಯರು ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಶಿವರಾಜ್ ಕುಮಾರ್ ಅವರು, ರೈತ ದೇಶದ ಬೆನ್ನೆಲುಬು ಅಂತಾರೆ ಆ ರೈತನ ಬೆನ್ನೆಲುಬು ನಮ್ಮ ಕಾವೇರಿ. ರಾಜ್ಯದಲ್ಲಿ ಈ ಸರಿ ಮಳೆಯ ಅಭಾವವಿದು ರೈತ ಆಗಲೇ ಸಂಕಷ್ಟದಲ್ಲಿದಾನೆ. ಎರಡು ರಾಜ್ಯದ ನಾಯಕರು ಹಾಗು ನ್ಯಾಯಾಲಯ ಎಲ್ಲ ಅಂಶಗಳನ್ನು ಪರಿಶೀಲಿಸಿ ಒಂದು ಸಮಾಧಾನಕರ ಪರಿಹಾರ ಕಂಡುಕೊಳ್ಳಬೇಕು ಅನ್ನೋದು ನನ್ನ ಪ್ರಾರ್ಥನೆ ಎಂದು ಹೇಳಿದ್ದಾರೆ.
ನಟ ಸುದೀಪ್ ಅವರು ಟ್ವೀಟ್ ಮಾಡಿ. ನಮ್ಮ ಕಾವೇರಿ ನಮ್ಮ ಹಕ್ಕು. ಅಷ್ಟು ಒಮ್ಮತದಿಂದ ಗೆಲ್ಲಿಸಿರುವ ಸರ್ಕಾರ ಕಾವೇರಿಯನ್ನೇ ನಂಬಿರುವ ಜನರನ್ನು ಕೈಬಿಡುವುದಿಲ್ಲ ಎಂದು ನಾನು ನಂಬಿದ್ದೇನೆ. ಈ ಕೂಡಲೇ ತಜ್ಞರು ಕಾರ್ಯತಂತ್ರ ರೂಪಿಸಿ ನ್ಯಾಯ ನೀಡಲಿ ಎಂದು ಒತ್ತಾಯಿಸುತ್ತೇನೆ. ನೆಲ-ಜಲ-ಭಾಷೆಯ ಹೋರಾಟದಲ್ಲಿ ನನ್ನ ಧ್ವನಿಯೂ ಇದೆ. ಕಾವೇರಿ ತಾಯಿ ಕರುನಾಡನ್ನು ಕಾಪಾಡಲಿ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ತಮಿಳುನಾಡಿಗೆ ನಿತ್ಯ 5,000 ಕ್ಯೂಸೆಕ್ ಕಾವೇರಿ ನೀರು ಬಿಡುವಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ
ಕನ್ನಡ ಫಿಲಂ ಚೇಂಬರ್ ಅಧ್ಯಕ್ಷ ಬಾ.ಮ.ಹರೀಶ್ ಮಾತನಾಡಿ, ಕಾವೇರಿ ವಿಚಾರವಾಗಿ ಕನ್ನಡ ಚಿತ್ರರಂಗದ ಅನೇಕ ನಟರು ಹಾಗೂ ಚಿತ್ರರಂಗಕ್ಕೆ ಸಂಬಂಧಿಸಿದವರು ಕಳವಳ ವ್ಯಕ್ತಪಡಿಸಿದ್ದಾರೆ. ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಧ್ವನಿ ಎತ್ತಿದ್ದರೆ, ಇನ್ನು ಕೆಲವರು ಮಾಧ್ಯಮಗಳ ಜೊತೆ ಮಾತನಾಡಿದ್ದಾರೆಂದು ಹೇಳಿದ್ದಾರೆ.
ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಅನೇಕ ನಟರು ಫಿಲಂ ಚೇಂಬರ್ ಕಚೇರಿಗೆ ಭೇಟಿ ನೀಡುತ್ತಿದ್ದಾರೆ. ಈ ವೇಳೆ ಕಾವೇರಿ ವಿಚಾರವಾಗಿ ಅವರಿಗಿರುವ ಕಾಳಜಿ ಮತ್ತು ಬೆಂಬಲವನ್ನು ವ್ಯಕ್ತಪಡಿಸುತ್ತಿದ್ದಾರೆ. ಮೈಸೂರಿನಲ್ಲಿ ನಟ ರಾಘವೇಂದ್ರ ರಾಜ್‌ಕುಮಾರ್ ಕೂಡ ಕಳವಳವನ್ನು ವ್ಯಕ್ತಪಡಿಸಿದ್ದಾರೆ.
ನಟ ಅಭಿಷೇಕ್ ಅಂಬರೀಶ್ ಕೂಡ ಕರ್ನಾಟಕದ ರೈತರನ್ನು ಬೆಂಬಲಿಸಿ Instagram ನಲ್ಲಿ ಪೋಸ್ಟ್ ಮಾಡಿದ್ದಾರೆ. ಕರ್ನಾಟಕದ ಕೋಟ್ಯಂತರ ಜನರ ಜೀವನಾಡಿಯಾಗಿರುವ ಕಾವೇರಿ ನೀರನ್ನು ಅನ್ಯಾಯವಾಗಿ ಕಿತ್ತುಕೊಳ್ಳುತ್ತಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.
ಇದೇ ವೇಳೆ ತಮಿಳುನಾಡಿನ ನಟರು ಕೂಡ ತಮ್ಮ ರಾಜ್ಯದ ರೈತರ ಸಮಸ್ಯೆಗಳ ಕುರಿತು ಸಭೆ ನಡೆಸಿ, ಮಾತುಕತೆ ನಡೆಸಿದ್ದಾರೆಂದು ವರದಿಗಳು ತಿಳಿಸಿವೆ.